ರಾಜ್ಯಕ್ಕೆ ಸೂಕ್ತ ಪರಿಹಾರ ಒದಗಿಸಲು ಶಿಫಾರಸ್ಸು ಮಾಡಲು ಕೇಂದ್ರ ಅಧ್ಯಯನ ತಂಡಕ್ಕೆ ಸಿಎಂ ಮನವಿ

Update: 2018-09-14 15:07 GMT

ಬೆಂಗಳೂರು, ಸೆ.14: ಕೊಡಗು, ದಕ್ಷಿಣ ಕನ್ನಡ, ಹಾಸನ ಮತ್ತು ಉಡುಪಿ ಜಿಲ್ಲೆಗಳಲ್ಲಿ ಅತಿವೃಷ್ಟಿಯಿಂದಾಗಿ ಅಪಾರ ಹಾನಿ ಉಂಟಾಗಿರುವುದರಿಂದ ಸೂಕ್ತ ಹಾಗೂ ಉದಾರ ಪರಿಹಾರ ಒದಗಿಸಲು ಕೇಂದ್ರ ಸರಕಾರಕ್ಕೆ ಶಿಫಾರಸ್ಸು ಮಾಡುವಂತೆ ಕೇಂದ್ರ ಅಧ್ಯಯನ ತಂಡಕ್ಕೆ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಮನವಿ ಮಾಡಿದರು.

ಶುಕ್ರವಾರ ಗೃಹ ಕಚೇರಿ ಕೃಷ್ಣಾದಲ್ಲಿ ನೆರೆ ಪೀಡಿತ ಜಿಲ್ಲೆಗಳಿಗೆ ಭೇಟಿ ನೀಡಿದ ನಂತರ ಕೇಂದ್ರ ಗೃಹ ಇಲಾಖೆಯ ಜಂಟಿ ಕಾರ್ಯದರ್ಶಿ ಅನಿಲ್ ಮಲ್ಲಿಕ್ ನೇತೃತ್ವದ ಕೇಂದ್ರ ಅಧ್ಯಯನ ತಂಡವು ಮುಖ್ಯಮಂತ್ರಿಯನ್ನು ಭೇಟಿಮಾಡಿ ಚರ್ಚೆ ನಡೆಸಿತು.

ಪ್ರಕೃತಿ ವಿಕೋಪದಿಂದ ಹಾನಿಗೊಳಗಾಗಿರುವ ರಸ್ತೆ, ಸೇತುವೆ, ಮನೆ ಹಾಗೂ ಇನ್ನಿತರ ಮೂಲಭೂತ ಸೌಕರ್ಯಗಳನ್ನು ಪುನರ್ ನಿರ್ಮಿಸಲು ರಾಜ್ಯ ವಿಕೋಪ ಪರಿಹಾರ ನಿಧಿಯಡಿ ಒದಗಿಸಲಾಗಿರುವ ಮೊತ್ತ ತೀರಾ ಕಡಿಮೆ ಎಂದು ಮುಖ್ಯಮಂತ್ರಿ ಕೇಂದ್ರ ತಂಡಕ್ಕೆ ತಿಳಿಸಿದರು.

ಪ್ರತಿ ಬಾರಿ ವಿಕೋಪದ ಸಂದರ್ಭದಲ್ಲಿ ಒದಗಿಸಿರುವ ಅನುದಾನಕ್ಕಿಂತಲೂ ದುಪ್ಪಟ್ಟು ಮೊತ್ತವನ್ನು ರಾಜ್ಯ ಸರಕಾರ ಖರ್ಚು ಮಾಡಿದೆ. ಹೆಚ್ಚಿನ ಪ್ರಮಾಣದಲ್ಲಿ ಬೆಳೆ ನಾಶವೂ ಆಗಿದ್ದು, ಹೆಚ್ಚಿನ ಪರಿಹಾರವನ್ನು ಒದಗಿಸಲು ತಿಳಿಸಿದರು. ಹಬ್ಬದ ಸಂದರ್ಭದಲ್ಲಿ, ಹಾನಿಯ ಪರಿಶೀಲನೆ ಕೈಗೊಂಡ ತಂಡದ ಕಾರ್ಯನಿಷ್ಠೆಯನ್ನು ಮುಖ್ಯಮಂತ್ರಿ ಶ್ಲಾಘಿಸಿದರು.

ರಾಜ್ಯಕ್ಕೆ ಉದಾರವಾಗಿ ಪರಿಹಾರ ನೀಡುವಂತೆ ಮುಖ್ಯಮಂತ್ರಿಗಳು ಮಾಡಿದ ಮನವಿಗೆ ವೈದ್ಯಕೀಯ ಶಿಕ್ಷಣ ಸಚಿವ ಡಿ.ಕೆ.ಶಿವಕುಮಾರ್ ಮತ್ತು ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಸಚಿವ ಕೃಷ್ಣ ಭೈರೇಗೌಡ ಧ್ವನಿಗೂಡಿಸಿದರು. ಕೇಂದ್ರ ಗೃಹ ಇಲಾಖೆಯ ಜಂಟಿ ಕಾರ್ಯದರ್ಶಿ ಅನಿಲ್ ಮಲ್ಲಿಕ್ ಮಾತನಾಡಿ ಅತಿವೃಷ್ಟಿಯಿಂದ ಹಾನಿಗೊಳಗಾದ ಜಿಲ್ಲೆಗಳಲ್ಲಿ ವ್ಯಾಪಕವಾಗಿ ಪರಿಶೀಲನೆ ನಡೆಸಲಾಗಿದೆ. ರಾಜ್ಯದಲ್ಲಿ ಜಿ.ಪಿ.ಎಸ್.ಆಧಾರಿತ ಬೆಳೆ ಸಮೀಕ್ಷೆ ಹಾಗೂ ಮಾಹಿತಿ ಸಂಗ್ರಹಣೆಯ ವಿಧಾನ ದೇಶದಲ್ಲಿಯೇ ಅತ್ಯುತ್ತಮವಾದದ್ದು ಎಂದರು. ಹಾನಿಗೊಳಗಾದ ಯಾವ ಜಿಲ್ಲೆಯಲ್ಲಿಯೂ ಸರಕಾರದ ವಿರುದ್ಧ ಜನರು ಪ್ರತಿಭಟನೆ ಮಾಡಲಿಲ್ಲ. ಇದು ರಾಜ್ಯ ಸರಕಾರ ಪರಿಸ್ಥಿತಿಯನ್ನು ಅತ್ಯುತ್ತಮವಾಗಿ ನಿರ್ವಹಣೆ ಮಾಡಿದೆ ಎನ್ನುವುದಕ್ಕೆ ಹಿಡಿದ ಕೈಗನ್ನಡಿ ಎಂದು ಅವರು ಮೆಚ್ಚುಗೆ ವ್ಯಕ್ತಪಡಿಸಿದರು.

ಅವಶೇಷಗಳ ನಿರ್ವಹಣೆ, ಪಶುಸಂಗೋಪನೆಗೆ ಪರಿಹಾರ, ಮೀನುಗಾರಿಕೆ ಹಾಗೂ ಏಲಕ್ಕಿಗೆ ಸಂಬಂಧಿಸಿದಂತೆ ಹಾಗೂ ಸಣ್ಣ ನೀರಾವರಿ ಇಲಾಖೆ ವ್ಯಾಪ್ತಿಯಲ್ಲಿ ಸಂಭವಿಸಿದ ನಷ್ಟದ ಕುರಿತು ಹೆಚ್ಚುವರಿ ಮಾಹಿತಿ ಒದಗಿಸುವಂತೆ ಅವರು ತಿಳಿಸಿದರು. ಕಾಫಿ ಬೆಳೆ ನಾಶಕ್ಕೆ ಸಂಬಂಧಿಸಿದಂತೆ ಕಾಫಿ ಮಂಡಳಿಯು ಸಿಬ್ಬಂದಿ ಕೊರತೆ ಎದುರಿಸುತ್ತಿರುವ ಹಿನ್ನೆಲೆಯಲ್ಲಿ ಕೃಷಿ ಇಲಾಖೆ ಅಧಿಕಾರಿಗಳನ್ನು ನಿಯೋಜಿಸಿ, ಮಾಹಿತಿ ಸಂಗ್ರಹಿಸಲು ಮಂಡಳಿ ಅಧಿಕಾರಿಗಳು ಸಮ್ಮತಿಸಿದ್ದಾರೆ. ಅದರಂತೆ ಕ್ರಮ ಕೈಗೊಳ್ಳುವುದು ಸೂಕ್ತ ಎಂದು ಮುಖ್ಯಮಂತ್ರಿಗಳು ತಿಳಿಸಿದರು.

ಕೇರಳಕ್ಕೆ ಈಗಾಗಲೇ ಮುಂಗಡ ಅನುದಾನವನ್ನು ಬಿಡುಗಡೆ ಮಾಡಲಾಗಿದ್ದು, ಮನವಿ ಮಾಡಿದಲ್ಲಿ ಇದೇ ಮಾದರಿಯಲ್ಲಿ ರಾಜ್ಯಕ್ಕೂ ಮುಂಗಡವಾಗಿ ಅನುದಾನ ಬಿಡುಗಡೆ ಮಾಡಲಾಗುವುದೆಂದು ಅವರು ಮಾಹಿತಿ ನೀಡಿದರು. ಸಭೆಯಲ್ಲಿ ಕೇಂದ್ರ ತಂಡದ ಸದಸ್ಯರಾದ ಜಿತೇಂದರ್ ಪನ್ವರ್, ಡಾ. ಪೊನ್ನುಸ್ವಾಮಿ, ಭರತೇಂದು ಕುಮಾರ್ ಸಿಂಗ್, ಮಾಣಿಕ್ ಚಂದ್ರ ಪಂಡಿತ್, ಸದಾನಂದ ಬಾಬು ಭಾಗವಹಿಸಿದ್ದರು.

ಸರಕಾರದ ಮುಖ್ಯ ಕಾರ್ಯದರ್ಶಿ ಟಿ.ಎಂ.ವಿಜಯ ಭಾಸ್ಕರ್, ಅಭಿವೃದ್ಧಿ ಆಯುಕ್ತೆ ವಂದಿತಾ ಶರ್ಮಾ, ಕಂದಾಯ ಇಲಾಖೆ(ವಿಕೋಪ ನಿರ್ವಹಣೆ) ಪ್ರಧಾನ ಕಾರ್ಯದರ್ಶಿ ಗಂಗಾರಾಮ್ ಬಡೇರಿಯಾ, ಮುಖ್ಯಮಂತ್ರಿಗಳ ಅಪರ ಮುಖ್ಯ ಕಾರ್ಯದರ್ಶಿ ಇ.ವಿ.ರಮಣರೆಡ್ಡಿ, ಮುಖ್ಯಮಂತ್ರಿಗಳ ಕಾರ್ಯದರ್ಶಿ ಸೆಲ್ವಕುಮಾರ್, ಲೋಕೋಪಯೋಗಿ ಇಲಾಖೆ ಅಪರ ಮುಖ್ಯ ಕಾರ್ಯದರ್ಶಿ ರಜನೀಶ್ ಗೋಯಲ್, ಜಲಸಂಪನ್ಮೂಲ ಇಲಾಖೆ ಪ್ರಧಾನ ಕಾರ್ಯದರ್ಶಿ ರಾಕೇಶ್ ಸಿಂಗ್ ಮತ್ತಿತರರು ಸಭೆಯಲ್ಲಿ ಉಪಸ್ಥಿತರಿದ್ದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News