ರಾಜ್ಯದಲ್ಲಿ ಅತಿವೃಷ್ಟಿ ಹಾನಿ: ಮುಖ್ಯಮಂತ್ರಿಯನ್ನು ಭೇಟಿ ಮಾಡಿದ ಕೇಂದ್ರದ ತಂಡ

Update: 2018-09-14 15:28 GMT

ಬೆಂಗಳೂರು, ಸೆ.14: ರಾಜ್ಯದ ಕೊಡಗು, ಹಾಸನ, ಮಲೆನಾಡು, ದಕ್ಷಿಣ ಕನ್ನಡ ಸೇರಿದಂತೆ ಇನ್ನಿತರೆಡೆ ಅತಿವೃಷ್ಟಿಯಿಂದ ಹಾನಿಗೀಡಾದ ಪ್ರದೇಶಗಳಲ್ಲಿ ಅಧ್ಯಯನ ನಡೆಸಿದ ಕೇಂದ್ರ ಸರಕಾರದ ಅಧಿಕಾರಿಗಳ ತಂಡ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿಯನ್ನು ಭೇಟಿ ಮಾಡಿ ಚರ್ಚೆ ನಡೆಸಿತು.

ಶುಕ್ರವಾರ ಗೃಹ ಕಚೇರಿ ಕೃಷ್ಣಾದಲ್ಲಿ ಮುಖ್ಯಮಂತ್ರಿಯನ್ನು ಭೇಟಿ ಮಾಡಿದ ಆರು ಜನ ಸದಸ್ಯರನ್ನು ಒಳಗೊಂಡ ಕೇಂದ್ರ ಸರಕಾರದ ಅಧಿಕಾರಿಗಳ ತಂಡವು ನೆರೆ ಪೀಡಿತ ಪ್ರದೇಶಗಳಿಗೆ ಸಂಬಂಧಿಸಿದಂತೆ ಮುಖ್ಯಮಂತ್ರಿ, ಸಚಿವರು ಹಾಗೂ ಹಿರಿಯ ಅಧಿಕಾರಿಗಳೊಂದಿಗೆ ಸಮಾಲೋಚನೆ ನಡೆಸಿತು. ಆನಂತರ, ಹೊಸದಿಲ್ಲಿಗೆ ತೆರಳಿತು.

ಕೇಂದ್ರ ಸರಕಾರದ ಅಧಿಕಾರಿಗಳ ತಂಡ ನೀಡುವ ವರದಿಯನ್ನು ಆಧರಿಸಿ ಕೇಂದ್ರ ಸರಕಾರವು ನೆರೆ ಪೀಡಿತ ಪ್ರದೇಶಗಳಿಗೆ ನೆರವು ನೀಡಲಿದೆ. ರಾಜ್ಯ ಸರಕಾರವು ಅತಿವೃಷ್ಟಿ ಪೀಡಿತ ಪ್ರದೇಶಗಳಿಗೆ ತುರ್ತಾಗಿ ಎರಡು ಸಾವಿರ ಕೋಟಿ ರೂ.ಗಳ ಪರಿಹಾರ ನೀಡುವಂತೆ ಮುಖ್ಯಮಂತ್ರಿ ನೇತೃತ್ವದ ನಿಯೋಗವು ಇತ್ತೀಚೆಗೆ ಪ್ರಧಾನಿಯನ್ನು ಭೇಟಿ ಮಾಡಿ ಮನವಿ ಸಲ್ಲಿಸಿತ್ತು.

ರಾಜ್ಯದ ಪರಿಸ್ಥಿತಿಯನ್ನು ಅಧ್ಯಯನ ಮಾಡಲು ಅಧಿಕಾರಿಗಳ ತಂಡವನ್ನು ಕಳುಹಿಸುವುದಾಗಿ ಪ್ರಧಾನಿ ಹೇಳಿದ್ದರು. ಅದರಂತೆ, ಸೆ.12 ಮತ್ತು 13ರಂದು ಕೇಂದ್ರದ ಅಧಿಕಾರಿಗಳ ತಂಡವು ವಿವಿಧ ಸ್ಥಳಗಳಿಗೆ ಭೇಟಿ ನೀಡಿ ಮಳೆಯಿಂದ ಉಂಟಾಗಿರುವ ಹಾನಿ ಕುರಿತು ಸ್ಥಳೀಯ ಹಾಗೂ ಜಿಲ್ಲಾಮಟ್ಟದ ಅಧಿಕಾರಿಗಳೊಂದಿಗೆ ಸಮಾಲೋಚನೆ ನಡೆಸಿ ಮಾಹಿತಿ ಕಲೆ ಹಾಕಿತ್ತು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News