ಕೊಡಗಿನಲ್ಲಿ ಪ್ರಕೃತಿ ವಿಕೋಪ ವಿಚಾರ: ಸಂಪೂರ್ಣ ಅಧ್ಯಯನ ನಡೆಸಲು ಕೋರಿ ಸಲ್ಲಿಸಿದ್ದ ಪಿಐಎಲ್ ವಜಾ

Update: 2018-09-14 17:11 GMT

ಬೆಂಗಳೂರು, ಸೆ.14: ಕಳೆದ ವಾರ ಕೊಡಗು ಜಿಲ್ಲೆಯಲ್ಲಿ ಉಂಟಾಗಿದ್ದ ಪ್ರವಾಹದ ಕಾರಣಗಳ ಕುರಿತು ಅಧ್ಯಯನ ನಡೆಸಲು ಹೈಕೋರ್ಟ್ ನಿವೃತ್ತ ನ್ಯಾಯಮೂರ್ತಿಯೊಬ್ಬರ ನೇತೃತ್ವದಲ್ಲಿ ನ್ಯಾಯಾಂಗ ಆಯೋಗ ರಚಿಸುವಂತೆ ಕೋರಿ ಸಲ್ಲಿಸಲಾಗಿದ್ದ ಸಾರ್ವಜನಿಕ ಹಿತಾಸಕ್ತಿ ಅರ್ಜಿಯನ್ನು ಹೈಕೋರ್ಟ್ ವಜಾಗೊಳಿಸಿದೆ.   

ಈ ಕುರಿತು ರಾಜ್ಯ ಮಾಹಿತಿ ಆಯೋಗದ ಮಾಜಿ ಆಯುಕ್ತ ಜೆ.ಎಸ್. ವಿರೂಪಾಕ್ಷಯ್ಯ ಸಲ್ಲಿಸಿದ್ದ ಅರ್ಜಿ ವಿಚಾರಣೆ ನಡೆಸಿದ ಮುಖ್ಯ ನ್ಯಾಯಮೂರ್ತಿ ದಿನೇಶ್ ಮಾಹೇಶ್ವರಿ ಮತ್ತು ನ್ಯಾಯಮೂರ್ತಿ ಎಸ್.ಜಿ.ಪಂಡಿತ್ ಅವರಿದ್ದ ವಿಭಾಗೀಯ ನ್ಯಾಯಪೀಠ, ಈ ವಿಚಾರದ ಬಗ್ಗೆ ಅರ್ಜಿದಾರರು ರಾಜ್ಯ ಸರಕಾರದ ಮುಖ್ಯ ಕಾರ್ಯದರ್ಶಿ ಅವರಿಗೆ ಮನವಿ ಪತ್ರ ಸಲ್ಲಿಸಲು ಸೂಚಿಸಿ ಅರ್ಜಿಯನ್ನು ವಜಾಗೊಳಿಸಿದೆ. ಅರ್ಜಿದಾರರ ಪರ ವಕೀಲ ರವೀಂದ್ರ ಕಾಮತ್ ವಾದಿಸಿ, ಕೊಡಗು ನೆರೆ ಪರಿಸ್ಥಿತಿ ಕುರಿತು ಮಾಧ್ಯಮಗಳಲ್ಲಿ ಪ್ರಕಟವಾಗಿರುವ ವರದಿಗೂ ಹಾಗೂ ವಾಸ್ತವದ ಅಂಶಗಳಿಗೆ ಸಾಕಷ್ಟು ವ್ಯತ್ಯಾಸವಿದೆ. ಕೊಡಗಿನ ನೆರೆ ಪರಿಸ್ಥಿತಿ ಬಗ್ಗೆ ಸಂಪೂರ್ಣ ಅಧ್ಯಯನ ಮಾಡಲು ನ್ಯಾಯಾಂಗ ತನಿಖಾ ಆಯೋಗ ರಚನೆ ಮಾಡಬೇಕು. ಈ ಕುರಿತು ಸರಕಾರಕ್ಕೆ ಆದೇಶಿಸಬೇಕು ಎಂದು ಕೋರಿದರು.

ಇದಕ್ಕೆ ಪ್ರತಿಕ್ರಿಯಿಸಿದ ಮುಖ್ಯ ನ್ಯಾಯಮೂರ್ತಿಗಳು, ನ್ಯಾಯಾಂಗ ತನಿಖೆ ನೇಮಕ ಮಾಡುವುದು ಸರಕಾರದ ಕೆಲಸ. ಸರಕಾರದ ಕೆಲಸವನ್ನು ನ್ಯಾಯಾಲಯ ಮಾಡಲಾಗುವುದಿಲ್ಲ. ಹೀಗಾಗಿ ರಾಜ್ಯ ಸರಕಾರಕ್ಕೆ ಮನವಿ ಪತ್ರ ಸಲ್ಲಿಸುವಂತೆ ಅರ್ಜಿದಾರರಿಗೆ ಸೂಚಿಸಿ, ಅರ್ಜಿ ವಜಾಗೊಳಿಸಿತು.

ಪ್ರಕರಣವೇನು: ಕೊಡಗು ಜಿಲ್ಲೆಯಲ್ಲಿ ಸಂಭವಿಸಿದ ಪ್ರಾಕೃತಿಕ ವಿಕೋಪದಿಂದಾಗಿ ಹಲವರು ಪ್ರಾಣ ಕಳೆದುಕೊಂಡಿದ್ದಾರೆ. ಅಪಾರ ಪ್ರಮಾಣದ ಆಸ್ತಿ ಪಾಸ್ತಿ ನಷ್ಟವಾಗಿದ್ದು, ಸಾವಿರಾರು ಜನರು ನಿರಾಶ್ರಿತರಾಗಿದ್ದಾರೆ. ಹೀಗಾಗಿ ಪ್ರವಾಹದ ಕುರಿತು ಅಧ್ಯಯನ ನಡೆಸಿ ವರದಿ ಸಲ್ಲಿಸಲು ಹೈಕೋರ್ಟ್ ನಿವೃತ್ತ ನ್ಯಾಯಮೂರ್ತಿಯೊಬ್ಬರ ನೇತೃತ್ವದಲ್ಲಿ ಆಯೋಗ ರಚಿಸುವಂತೆ ಅರ್ಜಿಯಲ್ಲಿ ಮನವಿ ಮಾಡಲಾಗಿದೆ.

ಕೊಡಗಿನಲ್ಲಿ ಕಳೆದ ನಾಲ್ಕು ತಿಂಗಳಿನಿಂದ ಸುರಿದ ಭಾರಿ ಮಳೆಯಿಂದಾಗಿ, ಹಾರಂಗಿ ಜಲಾಶಯ ಭರ್ತಿಯಾಗಿತ್ತು. ಹೀಗಿದ್ದರೂ ಜಲಾಶಯದ ಗೇಟ್‌ಗಳನ್ನು ತೆಗೆದು ನೀರು ಹೊರಬಿಡಲಾಗಿಲ್ಲ. ಇದರಿಂದ ಹಿನ್ನೀರು ಹೆಚ್ಚಾಗಿ, ಈ ಭಾಗದ 32 ಹಳ್ಳಿಗಳಿಗೆ ನುಗ್ಗಿದೆ. ಅಧಿಕಾರಿಗಳ ನಿರ್ಲಕ್ಷವೇ ಪ್ರವಾಹ ಸ್ಥಿತಿಗೆ ಕಾರಣವಾಗಿದೆ ಎಂದು ಅರ್ಜಿಯಲ್ಲಿ ದೂರಲಾಗಿದೆ.

ಪ್ರವಾಹ ಸಂತ್ರಸ್ತರಿಗೆ ಸೂಕ್ತ ಪರಿಹಾರ ಹಾಗೂ ಪುನರ್ವಸತಿ ಕಲ್ಪಿಸಬೇಕಿದೆ. ನೆರೆಯಿಂದ ಸಾವಿರಾರು ಎಕರೆ ಭೂಮಿ ನಾಶವಾಗಿದ್ದು, ಅಲ್ಲಿ ಮತ್ತೆ ಕೃಷಿ ಚಟುವಟಿಕೆ ನಡೆಸುವುದು ಕಷ್ಟ ಸಾಧ್ಯವಾಗಿದೆ. ಹೀಗಾಗಿ ಭೂಮಿ ಕಳೆದುಕೊಂಡವರಿಗೆ ಪರ್ಯಾಯ ಭೂಮಿ ಕಲ್ಪಿಸಬೇಕಿದೆ. ಈ ಕುರಿತು ಅಧ್ಯಯನ ನಡೆಸಲು ನ್ಯಾಯಾಂಗ ಆಯೋಗ ರಚಿಸಬೇಕು ಎಂದು ಮನವಿ ಮಾಡಿರುವ ಅರ್ಜಿದಾರರು, ಪ್ರವಾಹ ಪೀಡಿತ ಪ್ರದೇಶಗಳಿಗೆ ಭೇಟಿ ನೀಡಿ ಅಧ್ಯಯನ ನಡೆಸಿ, ಈ ಕುರಿತ ವರದಿಯನ್ನು ನ್ಯಾಯಾಲಯಕ್ಕೆ ಸಲ್ಲಿಸಲು ಆಯೋಗಕ್ಕೆ ನಿರ್ದೇಶಿಸಬೇಕೆಂದು ಮಧ್ಯಂತರ ಮನವಿ ಮಾಡಿದ್ದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News