ಚಿಕ್ಕಮಗಳೂರು: ಸ್ವಚ್ಛ ಭಾರತ ಅಭಿಯಾನಕ್ಕೆ ಶಾಸಕ ಸಿ.ಟಿ.ರವಿ ಚಾಲನೆ

Update: 2018-09-15 13:14 GMT

ಚಿಕ್ಕಮಗಳೂರು, ಸೆ.15: ಪರಿಸರ ಸ್ವಚ್ಛವಾಗಿದ್ದಲ್ಲಿ ಭಗವಂತ ನೆಲೆಸಿರುತ್ತಾನೆ. ಪ್ರತಿಯೊಬ್ಬರೂ ತಮ್ಮ ನೆರೆಹೊರೆಯನ್ನು ಸ್ವಚ್ಛವಾಗಿಟ್ಟುಕೊಳ್ಳಲು ಮುಂದಾಗಬೇಕೆಂದು ಶಾಸಕ ಸಿ.ಟಿ.ರವಿ ಕರೆ ನೀಡಿದರು.

ನಗರದ ಹಿರೇಮಗಳೂರಿನಲ್ಲಿ ಸ್ವಚ್ಚತಾ ಅಭಿಯಾನಕ್ಕೆ ಶನಿವಾರ ಚಾಲನೆ ನೀಡಿ ಮಾತನಾಡಿದ ಅವರು, ಪ್ರಧಾನಿ ನರೇಂದ್ರ ಮೋದಿ ಅವರು ಸ್ವಚ್ಚ ಭಾರತ್ ಅಭಿಯಾನಕ್ಕೆ ಚಾಲನೆ ನೀಡಿ ಇಂದಿಗೆ 4 ವರ್ಷಗಳು ಪೂರ್ಣಗೊಂಡಿವೆ. ಈ ಹಿನ್ನೆಲೆಯಲ್ಲಿ ಸ್ವಚ್ಚತಾಹಿ ಸೇವಾ ಎಂಬ ಹೆಸರಿನಡಿಯಲ್ಲಿ ಅ.2ರ ಗಾಂಧಿ ಜಯಂತಿವರೆಗೆ ದೇಶದ ಪ್ರತಿಯೊಬ್ಬರೂ ಪ್ರತಿನಿತ್ಯ ಕನಿಷ್ಠ 1 ಗಂಟೆ ತಮ್ಮ ನೆರೆಹೊರೆಯಲ್ಲಿ ಸ್ವಚ್ಚಗೊಳಿಸುವ ಮೂಲಕ ಸ್ವಚ್ಚ ಭಾರತಕ್ಕೆ ಮುಂದಾಗುವಂತೆ ಕರೆ ನೀಡಿದ್ದಾರೆ. ಈ ಹಿನ್ನೆಲೆಯಲ್ಲಿ ನಗರದಲ್ಲಿ ಸ್ವಚ್ಚತಾ ಅಭಿಯಾನಕ್ಕೆ ಚಾಲನೆ ಕೊಡಲಾಗಿದೆ ಎಂದರು.

ಸ್ವಚ್ಚತೆ ಕಾಪಾಡುವುದು ಪ್ರತಿಯೊಬ್ಬರ ಜವಾಬ್ದಾರಿ. ಈ ಕಾರ್ಯಕ್ಕೆ ಪ್ರತಿಯೊಬ್ಬರೂ ಕೈ ಜೋಡಿಸಬೇಕು. ಕನಿಷ್ಠ ಪಕ್ಷ ತಮ್ಮ ನೆರೆಹೊರೆಯನ್ನು ಸ್ವಚ್ಚಗೊಳಿಸುವ ಮೂಲಕ ಸ್ವಚ್ಚತಾ ಅಭಿಯಾನವನ್ನು ಯಶಸ್ವಿಗೊಳಿಸಲು ಮುಂದಾಗಬೇಕು ಎಂದು ಹೇಳಿದರು.

ನಗರ ಸೇರಿದಂತೆ ರಾಜ್ಯದಲ್ಲಿ ಪ್ಲಾಸ್ಟಿಕ್ ಅನ್ನು ನಿಷೇಧಿಸಲಾಗಿದ್ದರೂ ಅದರ ಬಳಕೆ ಸಂಪೂರ್ಣವಾಗಿ ನಿಂತಿಲ್ಲ. ಉತ್ಪಾದನಾ ಘಟ್ಟದಲ್ಲಿಯೇ ಪ್ಲಾಸ್ಟಿಕ್ ಅನ್ನು ನಿಯಂತ್ರಿಸುವ ಕಾರ್ಯಕ್ಕೆ ಮುಂದಾಗಬೇಕಿದೆ. ಈ ನಿಟ್ಟಿನಲ್ಲಿ ರಾಜ್ಯ ಸರ್ಕಾರ ಗಮನಹರಿಸಬೇಕಿದೆ ಎಂದ ಅವರು, ಜನತೆಯೂ ಪ್ಲಾಸ್ಟಿಕ್ ಕ್ಯಾರಿ ಬ್ಯಾಗ್, ಕಪ್, ಪ್ಲೇಟ್‍ಗಳನ್ನು ಬಳಸಬಾರದು. ಅದನ್ನು ಮಾರಾಟ ಮಾಡುವುದನ್ನು ನಿಯಂತ್ರಿಸಲು ಎಲ್ಲರೂ ಕೈ ಜೋಡಿಸಬೇಕು ಎಂದು ಹೇಳಿದರು.

ನಗರಸಭೆ ಅಧ್ಯಕ್ಷೆ ಶಿಲ್ಪಾರಾಜಶೇಖರ್, ಉಪಾಧ್ಯಕ್ಷ ಸುಧೀರ್, ಸದಸ್ಯರಾದ ಹೆಚ್.ಡಿ.ತಮ್ಮಯ್ಯ, ಪುಷ್ಪರಾಜ್, ಟಿ.ರಾಜಶೇಖರ್, ಬಿಜೆಪಿ ಜಿಲ್ಲಾ ವಕ್ತಾರ ವರಸಿದ್ದಿವೇಣುಗೋಪಾಲ್ ಇದ್ದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News