ಮಹಾದಾಯಿ ನೀರು ಸದುಪಯೋಗ ಕುರಿತು 15 ದಿನಗಳಲ್ಲಿ ರೂಪುರೇಷೆ: ಮುಖ್ಯಮಂತ್ರಿ ಕುಮಾರಸ್ವಾಮಿ

Update: 2018-09-15 15:22 GMT

ಬೆಳಗಾವಿ, ಸೆ.15: ರಾಜ್ಯಕ್ಕೆ ಹಂಚಿಕೆಯಾಗಿರುವ ಮಹಾದಾಯಿ ನದಿ ನೀರನ್ನು ಯಾವ ರೀತಿ ಸದುಪಯೋಗ ಪಡಿಸಿಕೊಳ್ಳಬೇಕೆಂಬ ಕುರಿತು ಕಾನೂನು ತಜ್ಞರು ಹಾಗೂ ನೀರಾವರಿ ತಜ್ಞರೊಂದಿಗೆ ಈಗಾಗಲೇ ಸಭೆ ನಡೆಸಿ ಚರ್ಚಿಸಲಾಗಿದ್ದು, 15 ದಿನಗಳೊಳಗಾಗಿ ಈ ಬಗ್ಗೆ ಸೂಕ್ತ ನಿರ್ಧಾರ ಕೈಗೊಳ್ಳುವುದಾಗಿ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ತಿಳಿಸಿದ್ದಾರೆ.

ಶನಿವಾರ ಇಲ್ಲಿನ ನೆಹರು ನಗರದಲ್ಲಿ ನೂತನವಾಗಿ ನಿರ್ಮಿಸಲಾಗಿರುವ ಕನ್ನಡ ಭವನವನ್ನು ಲೋಕಾರ್ಪಣೆಗೊಳಿಸಿ ಮಾತನಾಡಿದ ಅವರು, ಮಹಾದಾಯಿ ಹೋರಾಟಗಾರರ ಮೇಲಿನ ಪ್ರಕರಣಗಳನ್ನು ಶೀಘ್ರವೇ ಹಿಂಪಡೆಯುವುದಾಗಿ ತಿಳಿಸಿದರು.

ನೂತನವಾಗಿ ನಿರ್ಮಾಣವಾಗಿರುವ ಕನ್ನಡ ಭವನದಲ್ಲಿ ಇನ್ನೂ ಕೆಲವು ಕಾಮಗಾರಿಗಳು ಬಾಕಿಯಿದ್ದು, ಅವುಗಳಿಗಾಗಿ 1.5 ಕೋಟಿ ರೂ.ಗಳನ್ನು ಸರಕಾರದಿಂದ ಬಿಡುಗಡೆ ಮಾಡುವಂತೆ ಸಾಂಸ್ಕೃತಿಕ ಕನ್ನಡ ಭವನ ಸಮಿತಿಯ ಪದಾಧಿಕಾರಿಗಳು ಮನವಿ ಮಾಡಿದ್ದಾರೆ. ಶೀಘ್ರವೇ 1.5 ಕೋಟಿ ರೂ.ಹಣವನ್ನು ಬಿಡುಗಡೆ ಮಾಡಲಾಗುವುದು ಎಂದು ಅವರು ಭರವಸೆ ನೀಡಿದರು.

2006ರಲ್ಲಿ ತಾವು ಮುಖ್ಯಮಂತ್ರಿಯಾಗಿದ್ದ ಸಂದರ್ಭದಲ್ಲಿ ಕನ್ನಡ ಭವನಕ್ಕೆ ಶಂಕುಸ್ಥಾಪನೆ ನೆರವೇರಿಸಿ, ನಿರ್ಮಾಣಕ್ಕೆ ಚಾಲನೆ ನೀಡಲಾಗಿತ್ತು. ಇಂದು ಈ ಭವನವನ್ನು ತಾವೇ ಉದ್ಘಾಟಿಸುತ್ತಿರುವುದನ್ನು ಸ್ಮರಿಸಿ ಕುಮಾರಸ್ವಾಮಿ ಸಂತಸ ವ್ಯಕ್ತಪಡಿಸಿದರು.

ಕನ್ನಡ ಭವನದಲ್ಲಿ ಉತ್ತಮ ಕಾರ್ಯಕ್ರಮಗಳನ್ನು ಆಯೋಜಿಸಬೇಕು. ಕಲಾವಿದರು ಹಾಗೂ ಸಾರ್ವಜನಿಕರು ಈ ಭವನವನ್ನು ಸದುಪಯೋಗ ಪಡಿಸಿಕೊಳ್ಳಬೇಕೆಂದು ಮುಖ್ಯಮಂತ್ರಿ ಸಲಹೆ ನೀಡಿದರು.

ಸಾಲಮನ್ನಾದಿಂದ ಸರಕಾರಕ್ಕೆ ತೊಂದರೆಯಿಲ್ಲ: ರಾಜ್ಯ ಸರಕಾರ ರೈತರ 45 ಸಾವಿರ ಕೋಟಿ ರೂ. ಸಾಲಮನ್ನಾ ಘೋಷಣೆ ಮಾಡಿದೆ. ಸಾಲಮನ್ನಾ ಮಾಡಿದ ಹಣಕ್ಕೂ ಇಲಾಖೆಗಳ ಕಾರ್ಯಕ್ರಮಗಳಿಗೆ ಮೀಸಲಿರಿಸಿರುವ ಹಣಕ್ಕೂ ಯಾವುದೇ ಸಂಬಂಧವಿಲ್ಲ. ಸಾಲಮನ್ನಾದಿಂದ ಸರಕಾರದ ಯಾವುದೇ ಯೋಜನೆಗಳಿಗೆ ತೊಂದರೆಯಾಗಿಲ್ಲ. ಸರಕಾರದ ಆರ್ಥಿಕ ಪರಿಸ್ಥಿತಿ ಉತ್ತಮವಾಗಿದೆ ಎಂದು ಅವರು ಹೇಳಿದರು.

ರೈತರಿಗೆ ತೊಂದರೆ ನೀಡಬೇಡಿ: ಕೆಲವು ಬ್ಯಾಂಕ್‌ನವರು ರೈತರಿಗೆ ಸಾಲ ಪಡೆದುಕೊಂಡ ಹಣ ನೀಡುವಂತೆ ಕಿರುಕುಳ ನೀಡುತ್ತಿದ್ದಾರೆ ಎಂದು ತಿಳಿದುಬಂದಿದೆ. ಯಾವುದೇ ಬ್ಯಾಂಕ್‌ನವರು ರೈತರಿಗೆ ಹಣ ನೀಡುವಂತೆ ಕಿರುಕುಳ ನೀಡಬಾರದು ಎಂದು ಮುಖ್ಯಮಂತ್ರಿ ಸೂಚನೆ ನೀಡಿದರು.

ಸರಕಾರದಿಂದ ಘೋಷಣೆ ಮಾಡಿರುವ ರಾಷ್ಟ್ರೀಕೃತ ಬ್ಯಾಂಕ್‌ಗಳ 35 ಸಾವಿರ ಕೋಟಿ ರೂ.ಸಾಲವನ್ನು 4 ವರ್ಷಗಳಲ್ಲಿ ಕಂತುಗಳ ಮೂಲಕ ಪೂರೈಸಬೇಕೆಂದು ಚರ್ಚೆ ಮಾಡಲಾಗಿತ್ತು. ಆದರೆ, ಮುಂದಿನ ಸಾಲಿನ ಜುಲೈನೊಳಗೆ ಎಲ್ಲ ಹಣವನ್ನು ಬ್ಯಾಂಕ್‌ಗಳಿಗೆ ನೀಡಲು ಕ್ರಮಕೈಗೊಳ್ಳಲಾಗುತ್ತಿದೆ. ಆದುದರಿಂದ, ಬ್ಯಾಂಕ್‌ನವರು ಸರಕಾರಕ್ಕೆ ಸಹಕಾರ ನೀಡಬೇಕೆಂದು ಅವರು ತಿಳಿಸಿದರು.

ಉ.ಕ ಜಿಲ್ಲೆಗಳಲ್ಲಿ ಉತ್ಪಾದನೆಗೆ ಒತ್ತು: ಬೆಳಗಾವಿ, ಕಲಬುರಗಿ, ಬೀದರ್, ಕೊಪ್ಪಳ, ಬಳ್ಳಾರಿ ಜಿಲ್ಲೆಗಳಲ್ಲಿ ಉತ್ಪಾದನಾ ವಲಯವನ್ನು ನಿರ್ಮಿಸಲು ಹೆಚ್ಚಿನ ಒತ್ತು ನೀಡಲಾಗುವುದು. ಉತ್ತರ ಕರ್ನಾಟಕ ಸೇರಿದಂತೆ ಸಮಗ್ರ ಕರ್ನಾಟಕದ ಅಭಿವೃದ್ಧಿಗೆ ಸರಕಾರ ಬದ್ಧವಾಗಿದ್ದು, ಎಲ್ಲ ಜಿಲ್ಲೆಗಳ ಅಭಿವೃದ್ಧಿಗೂ ಕಾರ್ಯಕ್ರಮವನ್ನು ಅನುಷ್ಠಾನಗೊಳಿಸಲಾಗುತ್ತಿದೆ. ಸರಕಾರದ ಕುರಿತ ಅಪಪ್ರಚಾರಕ್ಕೆ ಯಾರು ಕೂಡ ಕಿವಿಗೊಡಬಾರದು ಎಂದು ಮುಖ್ಯಮಂತ್ರಿ ಮನವಿ ಮಾಡಿದರು.

ಕಾರ್ಯಕ್ರಮದ ಅಧ್ಯಕ್ಷತೆಯನ್ನು ಸಾಂಸ್ಕೃತಿಕ ಕನ್ನಡ ಭವನ ಸಮಿತಿಯ ಅಧ್ಯಕ್ಷ ಹಾಗೂ ರಾಜ್ಯಸಭಾ ಸದಸ್ಯ ಡಾ.ಪ್ರಭಾಕರ ಕೋರೆ ವಹಿಸಿದ್ದರು. ಕನ್ನಡ ಸಾಹಿತ್ಯ ಪರಿಷತ್ತಿನ ಅಧ್ಯಕ್ಷ ಡಾ.ಮನು ಬಳಿಗಾರ, ಸರಕಾರದ ಮುಖ್ಯ ಸಚೇತಕ ಗಣೇಶ್ ಹುಕ್ಕೇರಿ, ವಿಧಾನಪರಿಷತ್ತಿನ ವಿರೋಧ ಪಕ್ಷದ ಮುಖ್ಯ ಸಚೇತಕ ಮಹಾಂತೇಶ ಕವಟಗಿಮಠ, ಸಂಸದರಾದ ಸುರೇಶ್ ಅಂಗಡಿ, ಪ್ರಕಾಶ್ ಹುಕ್ಕೇರಿ, ಮೇಯರ್ ಬಸಪ್ಪ ಚಿಕ್ಕಲದಿನ್ನಿ, ಉಪ ಮೇಯರ್ ಮಧುಶ್ರೀ ಪೂಜಾರಿ, ಶಾಸಕರಾದ ಸತೀಶ್ ಜಾರಕಿಹೊಳಿ, ಅನಿಲ ಬೆನಕೆ, ಅಭಯ ಪಾಟೀಲ, ಲಕ್ಷ್ಮಿಹೆಬ್ಬಾಳ್ಕರ್, ಮಹಾಂತೇಶ ಕೌಜಲಗಿ, ದುರ್ಯೋದನ ಐಹೊಳೆ, ಮಹಾಂತೇಶ ದೊಡಗೌಡರ, ಮಾಜಿ ಶಾಸಕ ಕೋನರಡ್ಡಿ ಸೇರಿದಂತೆ ಇನ್ನಿತರರು ಉಪಸ್ಥಿತರಿದ್ದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News