ಹೈ-ಕ ಭಾಗದಲ್ಲಿ ಉದ್ಯೋಗ ಸೃಷ್ಟಿಗೆ ಒತ್ತು: ಸಚಿವ ಬಂಡೆಪ್ಪ ಕಾಶಂಪುರ್

Update: 2018-09-16 13:39 GMT

ಬೆಂಗಳೂರು, ಸೆ.16: ಉದ್ಯೋಗ ಸೃಷ್ಟಿಗೆ ಹೆಚ್ಚು ಒತ್ತು ನೀಡುವ ಮೂಲಕ ಮುಂದಿನ ಐದು ವರ್ಷಗಳಲ್ಲಿ ಹೈದರಬಾದ್-ಕರ್ನಾಟಕ ಪ್ರದೇಶದ ಅಭಿವೃದ್ಧಿಗೆ ಕ್ರಮ ಕೈಗೊಳ್ಳಾಗುವುದೆಂದು ಸಹಕಾರ ಸಚಿವ ಬಂಡೆಪ್ಪ ಕಾಶಂಪುರ್ ತಿಳಿಸಿದ್ದಾರೆ.

ರವಿವಾರ ನಗರದ ನಗರದ ಕೊಂಡಜ್ಜಿ ಬಸಪ್ಪ ಸಭಾಂಗಣದಲ್ಲಿ ಹೈದರಬಾದ್ ಕರ್ನಾಟಕ ನಿವಾಸಿಗಳ ಶೈಕ್ಷಣಿಕ ಹಾಗೂ ಸಾಂಸ್ಕೃತಿಕ ಸಂಘ ಹಮ್ಮಿಕೊಂಡಿದ್ದ ಹೈದ್ರಾಬಾದ್ ಕರ್ನಾಟಕ ಉತ್ಸವದ ಅಂಗವಾಗಿ ವಿಮೋಚನಾ ದಿನಾಚರಣೆ ಹಾಗೂ ಪ್ರತಿಭಾ ಪುರಸ್ಕಾರ ಸಮಾರಂಭದಲ್ಲಿ ಪಾಲ್ಗೊಂಡು ಅವರು ಮಾತನಾಡಿದರು.

ಶಿಕ್ಷಣ, ನೀರಾವರಿ, ಪ್ರವಾಸೋದ್ಯಮ, ಉದ್ದಿಮೆಗಳ ಸ್ಥಾಪನೆ ಸೇರಿದಂತೆ ಹೈ-ಕ ಪ್ರದೇಶದ ಅಭಿವೃದ್ಧಿಗೆ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಅವರ ನೇತೃತ್ವದ ಸರಕಾರ ಬದ್ಧವಾಗಿದೆ. ಹೈ-ಕ ಪ್ರದೇಶದ ಅಭಿವೃದ್ಧಿಗೆ ಸಮರೋಪಾದಿಯಲ್ಲಿ ಯೋಜನೆಗಳನ್ನು ಅನುಷ್ಟಾನಗೊಳಿಸಲು ಈ ಭಾಗದ 40 ಶಾಸಕರ ಸಭೆ ನಡೆಸಿ ಚರ್ಚಿಸಿದ್ದೇವೆ ಎಂದು ತಿಳಿಸಿದರು.

ಹೈ-ಕ ಅಭಿವೃದ್ಧಿಗೆ ಸಂಬಂಧಿಸಿದಂತೆ 371-ಜೆ ವಿಧಿ ಜಾರಿಗೆ ಬಂದು ಹಲವು ವರ್ಷಗಳಾದರೂ, ಶಿಕ್ಷಣ, ಉದ್ಯೋಗ ಇತ್ಯಾದಿ ಕ್ಷೇತ್ರಗಳಲ್ಲಿ ಸಂಪೂರ್ಣವಾಗಿ ಅನುಷ್ಟಾನಗೊಂಡಿಲ್ಲ. ಅಧಿಕಾರಿಗಳ ಭಡ್ತಿ ಹಾಗೂ ಇತರೆ ವಿಷಯಗಳಲ್ಲಿ ಹಲವು ಸಮಸ್ಯೆಗಳು ಎದುರಾಗಿವೆ ಎಂದು ಬೇಸರ ವ್ಯಕ್ತಪಡಿಸಿದ ಅವರು, ಶೀಘ್ರದಲ್ಲಿಯೇ ಹೈ-ಕ ಭಾಗದ ಎಲ್ಲಾ ಜನಪ್ರತಿನಿಧಿಗಳ ಸಭೆ ಕರೆದು ಚರ್ಚಿಸಿ ಸೂಕ್ತ ಕ್ರಮ ಕೈಗೊಳ್ಳುವುದಾಗಿ ವಿಶ್ವಾಸ ವ್ಯಕ್ತಪಡಿಸಿದರು.

ಗಣಿ ಮತ್ತು ಭೂ ವಿಜ್ಞಾನ ಸಚಿವ ರಾಜಶೇಖರ ಪಾಟೀಲ ಮಾತನಾಡಿ, ಹೈ-ಕ ಅಭಿವೃದ್ಧಿಗೆ ಸರಕಾರ 1,500 ಕೋಟಿ ರೂ.ಗಳಷ್ಟು ಅನುದಾನ ನಿಗದಿ ಮಾಡಿದೆ. ಬೆಂಗಳೂರಿನಲ್ಲಿ ಹೈ-ಕ ಭವನದ ನಿರ್ಮಾಣಕ್ಕೆ ಜಮೀನು ಮಂಜೂರಾತಿಗೆ ಕ್ರಮ ಕೈಗೊಳ್ಳಲಾಗುವುದು ಎಂದು ನುಡಿದರು.

ಕಾರ್ಯಕ್ರಮದಲ್ಲಿ ಮಾಜಿ ಸಚಿವ ಪಿ.ಜಿ.ಆರ್.ಸಿಂಧ್ಯಾ, ದಲಿತ ಕವಿ ಡಾ.ಸಿದ್ದಲಿಂಗಯ್ಯ, ಸಂಘದ ಅಧ್ಯಕ್ಷ ಸಂಗಮೇಶ ಬಾದವಾಡಗಿ ಸೇರಿದಂತೆ ಪ್ರಮುಖರು ಹಾಜರಿದ್ದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News