ಲಾರಿ ಬ್ಯಾಟರಿ ಕಳವು : ಆರೋಪಿ ಸೆರೆ; ಸೊತ್ತು ವಶ

Update: 2018-09-16 16:33 GMT

ಮಂಗಳೂರು, ಸೆ.16: ನಗರದ ಹೊರ ವಲಯದ ವಾಮಂಜೂರಿನಲ್ಲಿ ನಿಲ್ಲಿಸಲಾಗಿದ್ದ ಲಾರಿಗಳ ಬ್ಯಾಟರಿ ಹಾಗೂ ಕಾಂಕ್ರಿಟ್ ಕಬ್ಬಿಣದ ಶೀಟ್‌ಗಳನ್ನು ಕಳ್ಳತನ ಮಾಡಿ ಸಾಗಾಟ ಮಾಡುತ್ತಿದ್ದ ಆರೋಪಿಯೋರ್ವನನ್ನು 4.50 ಲಕ್ಷ ರೂ. ಮೌಲ್ಯದ ಸೊತ್ತು ಸಮೇತ ಕಂಕನಾಡಿ ನಗರ ಪೊಲೀಸರು ಬಂಧಿಸಿದ್ದು, ಇನ್ನೋರ್ವ ಆರೋಪಿ ತಲೆಮರೆಸಿಕೊಂಡಿದ್ದಾನೆ ಎಂದು ತಿಳಿಸಿದ್ದಾರೆ.

ವಾಮಂಜೂರು  ನಿವಾಸಿ ಅಝರುದ್ದೀನ್ (26) ಬಂಧಿತ ಆರೋಪಿ. ಇನ್ನೋರ್ವ ಆರೋಪಿ ಆರಿಫ್ ತಲೆಮರೆಸಿಕೊಂಡಿದ್ದಾನೆ. ಬಂಧಿತ ಆರೋಪಿಗೆ ನ್ಯಾಯಾಂಗ ಬಂಧನ ವಿಧಿಸಲಾಗಿದೆ.

ಆರೋಪಿ ಅಜರುದ್ದೀನ್ ವಿರುದ್ಧ ಮಂಗಳೂರು ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಈಗಾಗಲೇ ಕೊಲೆ ಪ್ರಕರಣ ಕೂಡ ದಾಖಲಾಗಿದೆ. ಪ್ರಸ್ತುತ ಮಂಗಳೂರು ಗ್ರಾಮಾಂತರ ಪೊಲೀಸ್ ಠಾಣೆಯ ಪ್ರಕರಣದಲ್ಲಿ ಕಳವಾದ 40,000 ರೂ. ಮೌಲ್ಯದ ಬ್ಯಾಟರಿ ಹಾಗೂ ಕಾಂಕ್ರಿಟ್ ಶೀಟ್‌ಗಳನ್ನು ಮತ್ತು ಸೊತ್ತುಗಳನ್ನು ಸಾಗಾಟ ಮಾಡುತ್ತಿದ್ದ ಸ್ಕಾರ್ಪಿಯೋ ವಾಹನವನ್ನು ಸ್ವಾಧೀನಪಡಿಸಿಕೊಳ್ಳಲಾಗಿದೆ. ಸ್ವಾಧೀನಪಡಿಸಿಕೊಂಡ  ಸೊತ್ತಿನ ಮೌಲ್ಯ 4.50 ಲಕ್ಷ ರೂ. ಆಗಬಹುದು ಎಂದು ಅಂದಾಜಿಸಲಾಗಿದೆ.

ಮಂಗಳೂರು ನಗರ ಪೊಲೀಸ್ ಆಯುಕ್ತ ಟಿ.ಆರ್. ಸುರೇಶ್, ಡಿಸಿಪಿ ಉಮಾ ಪ್ರಶಾಂತ್ ಹಾಗೂ ಮಂಗಳೂರು ದಕ್ಷಿಣ ಉಪವಿಭಾಗದ ಸಹಾಯಕ ಪೊಲೀಸ್ ಆಯುಕ್ತ ರಾಮರಾವ್ ಮಾರ್ಗದರ್ಶನದಲ್ಲಿ ಕಂಕನಾಡಿ ನಗರ ಪೊಲೀಸ್ ಠಾಣೆಯ ಪೊಲೀಸ್ ನಿರೀಕ್ಷಕರಾದ ರವೀಶ್ ನಾಯಕ್, ಕಾನೂನು ಸುವ್ಯವಸ್ಥೆಯ ಪೊಲೀಸ್ ಉಪನಿರೀಕ್ಷಕರಾದ ಪ್ರದೀಪ ಟಿ.ಆರ್., ಅಪರಾಧ ಪತ್ತೆ ವಿಭಾಗದ ಪೊಲೀಸ್ ಉಪ ನಿರೀಕ್ಷಕರಾದ ಜಾನಕಿ ಹಾಗೂ ಸಿಬ್ಬಂದಿ ಸಂತೋಷ್, ಮದನ್, ವಿನೋದ್, ರಾಜೇಶ್, ನೂತನ್, ಸತೀಶ್, ಸಂದೀಪ್, ಜೀವನ್, ಮೇಘರಾಜ್ ಕಾರ್ಯಾಚರಣೆಯಲ್ಲಿ ಭಾಗವಹಿಸಿದ್ದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News