ಇಂದಿರಾ ಕ್ಯಾಂಟೀನ್‍ನಲ್ಲಿ ಗುಣಮಟ್ಟದ ಸೇವೆಗೆ ಆದ್ಯತೆ: ಸಚಿವ ಡಿ.ಸಿ.ತಮ್ಮಣ್ಣ

Update: 2018-09-16 17:33 GMT

ಶಿವಮೊಗ್ಗ, ಸೆ.16: ಶಿವಮೊಗ್ಗ ನಗರದಲ್ಲಿ ಆರಂಭಿಸಲಾಗಿರುವ ಇಂದಿರಾ ಕ್ಯಾಂಟೀನ್‍ಗಳಲ್ಲಿ ಉತ್ತಮ ಗುಣಮಟ್ಟದ ಸೇವೆಗೆ ಆದ್ಯತೆ ನೀಡಲಾಗುವುದು ಎಂದು ರಾಜ್ಯ ಸಾರಿಗೆ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಡಿ.ಸಿ.ತಮ್ಮಣ್ಣ ಅವರು ಹೇಳಿದರು.

ಶನಿವಾರ ನಗರದ ಸಾರ್ವಜನಿಕ ಶಿಕ್ಷಣ ಇಲಾಖೆ ಉಪನಿರ್ದೇಶಕರ ಕಚೇರಿ ಆವರಣದಲ್ಲಿ ನೂತನವಾಗಿ ನಿರ್ಮಿಸಿರುವ ಇಂದಿರಾ ಕ್ಯಾಂಟೀನ್‍ನನ್ನು ಉದ್ಘಾಟಿಸಿ ಮಾತನಾಡಿದರು. ಜನಸಾಮಾನ್ಯರಿಗೆ ಅನುಕೂಲ ಮಾಡಿಕೊಡುವ ಸದುದ್ದೇಶದಿಂದಾಗಿ ನಗರದಲ್ಲಿ ಈವರೆಗೆ ಒಟ್ಟು 4 ಕ್ಯಾಂಟೀನ್‍ಗಳನ್ನು ಆರಂಭಿಸಲಾಗಿದ್ದು, ಗುಣಮಟ್ಟದ, ನಿಗಧಿಪಡಿಸಿದ ಪ್ರಮಾಣದಲ್ಲಿ ಆಹಾರವನ್ನು ರಿಯಾಯಿತಿ ದರದಲ್ಲಿ ಒದಗಿಸಲಾಗುವುದು ಎಂದರು. 

ಅಲ್ಲದೇ ಸ್ವಚ್ಚತೆ ಬಗೆಗೂ ಗಮನಹರಿಸಲಾಗುತ್ತಿದೆ. ಪಾತ್ರೆಗಳನ್ನು ಬಿಸಿ ನೀರಿನಲ್ಲಿ ತೊಳೆಯುವ ಅಗತ್ಯವಿದ್ದಲ್ಲಿ ಅದಕ್ಕೆ ಕ್ರಮ ವಹಿಸಲಾಗುವುದು ಎಂದ ಅವರು, ಹಿಂದಿನ ಸರ್ಕಾರದ ಮಹತ್ವಾಕಾಂಕ್ಷಿ ಯೋಜನೆ ನಗರ ಮತ್ತು ಪಟ್ಟಣ ಪ್ರದೇಶಗಳ ಉದ್ಯೋಗಿಗಳಿಗೆ, ಅಲ್ಪವೇತನದಲ್ಲಿ ಬದುಕು ಕಟ್ಟಿಕೊಳ್ಳಲು ನಗರಕ್ಕೆ ಬರುವ ಯುವಜನರ ಹಸಿವು ತಣಿಸುವಲ್ಲಿ ಈ ಕ್ಯಾಂಟೀನ್ ಪ್ರಮುಖ ಪಾತ್ರ ವಹಿಸಲಿದೆ ಎಂದು ನುಡಿದರು.

ಈ ಸಂದರ್ಭ ಶಾಸಕ ಹಾಗೂ ಮಾಜಿ ಉಪಮುಖ್ಯಮಂತ್ರಿ ಕೆ.ಎಸ್.ಈಶ್ವರಪ್ಪ, ಶಾಸಕರಾದ ಕುಮಾರ್ ಬಂಗಾರಪ್ಪ, ಹರತಾಳು ಹಾಲಪ್ಪ, ಆರ್.ಪ್ರಸನ್ನಕುಮಾರ್, ಜಿಲ್ಲಾಧಿಕಾರಿ ಕೆ.ಎ.ದಯಾನಂದ್ ಮತ್ತಿತರ ಗಣ್ಯರು ಉಪಸ್ಥಿತರಿದ್ದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News