ಅಭಿವೃದ್ಧಿ ಪರ್ವವನ್ನು ಮುಂದುವರೆಸಲಿರುವ ಮೈತ್ರಿ ಸರಕಾರ: ಮುಖ್ಯಮಂತ್ರಿ ಕುಮಾರಸ್ವಾಮಿ

Update: 2018-09-17 13:51 GMT

ಕಲಬುರಗಿ, ಸೆ.17: ರಾಜ್ಯದಲ್ಲಿ ಆಡಳಿತ ನಡೆಸುತ್ತಿರುವ ನಮ್ಮ ಮೈತ್ರಿ ಸರಕಾರವು ಅಭಿವೃದ್ಧಿಯ ಪರ್ವವನ್ನು ಮುಂದುವರೆಸಲಿದೆ. ಹೈದರಾಬಾದ್ ಕರ್ನಾಟಕ ಪ್ರದೇಶಾಭಿವೃದ್ಧಿ ಮಂಡಳಿಯನ್ನು ಬಲಪಡಿಸುವ ಮೂಲಕ ಸಂವಿಧಾನ ತಿದ್ದುಪಡಿಯ ಆಶಯವನ್ನು ಸಾಕಾರಗೊಳಿಸಲು ಸರಕಾರ ಕಾರ್ಯನಿರ್ವಹಿಸಲಿದೆ ಎಂದು ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಹೇಳಿದರು.

ಸೋಮವಾರ ನಗರದ ಪೊಲೀಸ್ ಪರೇಡ್ ಮೈದಾನದಲ್ಲಿ ಆಯೋಜಿಸಲಾಗಿದ್ದ ಹೈದರಾಬಾದ್-ಕರ್ನಾಟಕ ವಿಮೋಚನಾ ದಿನಾಚರಣೆ ಅಂಗವಾಗಿ ಧ್ವಜಾರೋಹಣ ನೆರವೇರಿಸಿ ಭಾಷಣ ಮಾಡಿದ ಅವರು, ನಮ್ಮ ಸರಕಾರದ ಮಿತ್ರ ಪಕ್ಷ ಕಾಂಗ್ರೆಸ್ ತನ್ನ ಅಧಿಕಾರಾವಧಿಯಲ್ಲಿ ಸಾಕಷ್ಟು ಕೆಲಸ ಮಾಡಿದೆ ಎಂದರು.

ಜಯದೇವ ಹೃದ್ರೋಗ ಸಂಸ್ಥೆಯನ್ನು ಸ್ಥಾಪಿಸಿ ಈ ಭಾಗದ ಬಡ ರೋಗಿಗಳಿಗೆ ಅನುಕೂಲ ಕಲ್ಪಿಸಿದೆ. ನಂದೂರು-ಕೆಸರಟಗಿ ಕೈಗಾರಿಕಾ ಪ್ರದೇಶದಲ್ಲಿ 230 ಮಹಿಳಾ ಉದ್ದಿಮೆದಾರರಿಗೆ ನಿವೇಶನ ಹಂಚಿಕೆ ಮಾಡಿದೆ. ಕೌಶಲ್ಯ, ಅಭಿವೃದ್ಧಿ, ವಸತಿ, ಮೂಲಸೌಕರ್ಯ ಸೇರಿದಂತೆ ವಿವಿಧ ವಲಯಗಳಲ್ಲಿ ಸಾಕಷ್ಟು ಉತ್ತಮ ಕೆಲಸಗಳಾಗಿವೆ ಎಂದು ಮುಖ್ಯಮಂತ್ರಿ ಹೇಳಿದರು.

ಕಲಬುರಗಿ ವಿಮಾನ ನಿಲ್ದಾಣವು ಶೀಘ್ರವೇ ಹೈದರಾಬಾದ್ ಕರ್ನಾಟಕದ ಅಭಿವೃದ್ಧಿಗೆ ಹೆಬ್ಬಾಗಿಲು ಆಗಲಿದೆ. ಮುಂದಿನ ದಿನಗಳಲ್ಲಿ ಪ್ರವಾಸೋದ್ಯಮ, ವಾಣಿಜ್ಯೋದ್ಯಮ, ರಫ್ತು ಉದ್ಯಮಗಳ ಬೆಳವಣಿಗೆಗೆ ಇದು ಪೂರಕವಾಗಲಿದೆ ಎಂದು ಕುಮಾರಸ್ವಾಮಿ ವಿಶ್ವಾಸ ವ್ಯಕ್ತಪಡಿಸಿದರು.

ಕೃಷಿ ಮತ್ತು ತೋಟಗಾರಿಕೆಯಲ್ಲಿ ಇಸ್ರೇಲ್ ಮಾದರಿ ಕೃಷಿ ಪದ್ಧತಿಯನ್ನು ಅಳವಡಿಸುವ ಯೋಜನೆಯನ್ನು ಮೊದಲ ಹಂತದಲ್ಲಿ 8 ಜಿಲ್ಲೆಗಳಲ್ಲಿ ಜಾರಿಗೊಳಿಸಲಾಗುತ್ತಿದ್ದು, ಹೈದರಾಬಾದ್ ಕರ್ನಾಟಕದ ಕೊಪ್ಪಳ ಮತ್ತು ಯಾದಗಿರಿ ಜಿಲ್ಲೆಗಳಲ್ಲಿಯೂ ಈ ಕಾರ್ಯಕ್ರಮವನ್ನು ಜಾರಿಗೊಳಿಸಲಾಗುತ್ತಿದೆ ಎಂದು ಮುಖ್ಯಮಂತ್ರಿ ಹೇಳಿದರು.

ಸರಕಾರಿ ಶಾಲೆಗಳ ಮೂಲಸೌಕರ್ಯ ಅಭಿವೃದ್ಧಿ ಹಾಗೂ ಶಿಕ್ಷಣದ ಗುಣಮಟ್ಟ ಹೆಚ್ಚಿಸಲು ಸರಕಾರ ಹೆಚ್ಚಿನ ಆದ್ಯತೆ ನೀಡುತ್ತಿದೆ. ಈ ಭಾಗದ ಜನತೆಗೂ ಇದರಿಂದ ಅನುಕೂಲವಾಗಲಿದೆ. ಹೈದರಾಬಾದ್ ಕರ್ನಾಟಕ ಭಾಗದಲ್ಲಿ ಮರಾಠಿ, ತೆಲುಗು ಹಾಗೂ ಉರ್ದು ಪ್ರಭಾವದಿಂದಾಗಿ ವಿಶಿಷ್ಟ ಸಂಸ್ಕೃತಿ ಮೇಳೈಸಿದೆ. ಐತಿಹಾಸಿಕವಾಗಿಯೂ ಬೌದ್ಧ, ಇಸ್ಲಾಮಿಕ್, ಜೈನ ಸ್ಮಾರಕಗಳು, ಕೋಟೆ ಕೊತ್ತಲಗಳು, ಯಾತ್ರಾಸ್ಥಳಗಳು ಇಲ್ಲಿರುವುದರಿಂದ ಪ್ರವಾಸೋದ್ಯಮ ಅಭಿವೃದ್ಧಿಗೆ ವಿಫುಲ ಅವಕಾಶಗಳಿವೆ ಎಂದು ಅವರು ಹೇಳಿದರು.

ಹಂಪಿಯಲ್ಲಿ ಪ್ರವಾಸೋದ್ಯಮ ವಿವಿ ಸ್ಥಾಪನೆ ಮಾಡುವ ಬಗ್ಗೆ ಬಜೆಟ್‌ನಲ್ಲಿ ಘೋಷಿಸಲಾಗಿದೆ. ಈ ಭಾಗದ ಎಸ್ಸಿ-ಎಸ್ಟಿ ಪದವೀಧರರಿಗೆ ಕಲಬುರಗಿ ನಗರದಲ್ಲಿ ಖಾಸಗಿ ಸಂಸ್ಥೆಗಳ ಸಹಯೋಗದೊಂದಿಗೆ ಯುಪಿಎಸ್ಸಿ, ಕೆಪಿಎಸ್ಸಿ, ಬ್ಯಾಂಕಿಂಗ್ ಮತ್ತಿತರ ಸ್ಪರ್ಧಾತ್ಮಕ ಪರೀಕ್ಷೆಗಳಿಗೆ ತರಬೇತಿ ನೀಡಲಾಗುವುದು. ಇದಲ್ಲದೆ, ಸಮಾಜ ಕಲ್ಯಾಣ ವಸತಿ ಶಿಕ್ಷಣ ಸಂಸ್ಥೆಗಳು, ವಿದ್ಯಾರ್ಥಿ ನಿಲಯಗಳಲ್ಲಿ ಸೌಲಭ್ಯಗಳನ್ನು ಉತ್ತಮಗೊಳಿಸಲು ಸರಕಾರ ಉನ್ನತಮಟ್ಟದ ಸಮಿತಿ ರಚಿಸಿದೆ ಎಂದು ಅವರು ತಿಳಿಸಿದರು.

ಸ್ಥಳೀಯ ಸಂಪನ್ಮೂಲ ಬಳಸಿಕೊಂಡು ಕೈಗಾರಿಕೆ ಸ್ಥಾಪಿಸಿ, ಸ್ಥಳೀಯವಾಗಿ ಹೆಚ್ಚಿನ ಉದ್ಯೋಗಾವಕಾಶ ಕಲ್ಪಿಸುವ ಚೀನಾದೊಂದಿಗೆ ಆರೋಗ್ಯಕರ ಸ್ಪರ್ಧೆ ಎಂಬ ಯೋಜನೆಯಡಿ ರಾಜ್ಯದ 9 ಕೈಗಾರಿಕಾ ಕ್ಲಸ್ಟರ್ ಸ್ಥಾಪಿಸಲು ಸಚಿವ ಸಂಪುಟ ಅನುಮೋದನೆ ನೀಡಿದೆ. ಇದರಲ್ಲಿ ಬೀದರ್‌ನಲ್ಲಿ ಕೃಷಿ ಯಂತ್ರೋಪಕರಣಗಳ ತಯಾರಿಕೆ, ಕಲಬುರಗಿಯಲ್ಲಿ ಸೋಲಾರ್ ಉಪಕರಣಗಳ ತಯಾರಿಕೆ, ಕೊಪ್ಪಳದಲ್ಲಿ ಎಲೆಕ್ಟ್ರಾನಿಕ್ ಆಟಿಕೆಗಳ ತಯಾರಿಕೆ ಹಾಗೂ ಬಳ್ಳಾರಿಯಲ್ಲಿ ವಸ್ತ್ರೋದ್ಯಮದ ಕ್ಲಸ್ಟರ್‌ಗಳನು ಸ್ಥಾಪಿಸಲಾಗುವುದು ಎಂದು ಕುಮಾರಸ್ವಾಮಿ ಹೇಳಿದರು.

‘Manpower without unity is not a strength unless it is harmonized, united properly, it becomes a spiritual power’ ಎಂದು ಹೈದರಾಬಾದ್ ಕರ್ನಾಟಕಕ್ಕೆ ಸ್ವಾತಂತ್ರ ದೊರಕಿಸಿದ ಸರ್ದಾರ್ ಪಟೇಲ್ ಹೇಳಿದ್ದಾರೆ. ನಾವೆಲ್ಲರೂ ಒಂದಾಗಿ ಕೆಲಸ ಮಾಡಿದರೆ ಮಾತ್ರ ಅಜ್ಞಾನ, ಅನರಕ್ಷತೆ, ಬಡತನ, ಅನಾರೋಗ್ಯ, ಅಪೌಷ್ಟಿಕತೆಗಳಿಂದ ವಿಮೋಚನೆ ಪಡೆಯಲು ಸಾಧ್ಯ ಎಂದು ಮುಖ್ಯಮಂತ್ರಿ ತಿಳಿಸಿದರು. ಕಾರ್ಯಕ್ರಮದಲ್ಲಿ ಕಲಬುರಗಿ ಜಿಲ್ಲಾ ಉಸ್ತುವಾರಿ ಸಚಿವ ಪ್ರಿಯಾಂಕ್ ಖರ್ಗೆ, ವೈದ್ಯಕೀಯ ಶಿಕ್ಷಣ ಸಚಿವ ಡಿ.ಕೆ.ಶಿವಕುಮಾರ್, ತೋಟಗಾರಿಕೆ ಸಚಿವ ಎಂ.ಸಿ.ಮನಗೂಳಿ, ಶಾಸಕ ಡಾ.ಅಜಯ್‌ಸಿಂಗ್ ಸೇರಿದಂತೆ ಇನ್ನಿತರರು ಭಾಗವಹಿಸಿದ್ದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News