ಕ್ರೀಡೆಗಳಲ್ಲಿ ಭಾಗವಹಿಸುವುದರಿಂದ ದೈಹಿಕ, ಮಾನಸಿಕ ಆರೋಗ್ಯ ಸದೃಢ: ದಾವಣಗೆರೆ ಜಿಲ್ಲಾಧಿಕಾರಿ ಡಿ.ಎಸ್.ರಮೇಶ್

Update: 2018-09-17 17:50 GMT

ದಾವಣಗೆರೆ,ಸೆ.17: ಕ್ರೀಡೆಗಳಲ್ಲಿ ಭಾಗವಹಿಸುವುದರಿಂದ ದೈಹಿಕವಾಗಿ ಮತ್ತು ಮಾನಸಿಕ ಆರೋಗ್ಯವಾಗಿ ಸದೃಢರಾಗಲು ಸಾಧ್ಯವಾಗುತ್ತದೆ ಎಂದು ಜಿಲ್ಲಾಧಿಕಾರಿ ಡಿ.ಎಸ್.ರಮೇಶ್ ತಿಳಿಸಿದರು. 

ಇಲ್ಲಿನ ಜಿಲ್ಲಾ ಕ್ರೀಡಾಂಗಣದಲ್ಲಿ ಪದವಿಪೂರ್ವ ಶಿಕ್ಷಣ ಇಲಾಖೆ ಪುಷ್ಪಶಾಮನೂರು ಮಹಾಲಿಂಗಪ್ಪ ಪದವಿಪೂರ್ವ ಕಾಲೇಜು ಆಶ್ರಯದಲ್ಲಿ ಜಿಲ್ಲಾ ಮಟ್ಟದ ಪದವಿಪೂರ್ವ ಕಾಲೇಜುಗಳ ಕ್ರೀಡಾಕೂಟ 2018-19ನೇ ಸಾಲಿನ ಸಮಾರಂಭವನ್ನು ಉದ್ಘಾಟಿಸಿ ಮಾತನಾಡಿದರು. ಕ್ರೀಡೆಯಲ್ಲಿ ಹೆಚ್ಚು ಭಾಗವಹಿಸುವುದರಿಂದ ಮನಸ್ಸು ಅರಳುವುದಕ್ಕೆ ಸಾಧ್ಯವಾಗುತ್ತದೆ. ಇದರಿಂದ ಎಲ್ಲಾ ವಿಚಾರಗಳು ಗ್ರಹಿಸುವುದಕ್ಕೆ ಸಹಕಾರಿಯಾಗಲಿದೆ. ಇಡೀ ಪ್ರಪಂಚದಲ್ಲಿ ಯಾವುದಾದರು ಜೀವಿ ಸಸ್ಯಲೋಕದಲ್ಲಿ ನೈಸರ್ಗಿಕವಾಗಿ ಜೀವನ ಹೇಗೆ ನಡೆಸುತ್ತಿದೆ ಎನ್ನುವುದನ್ನು ತಿಳಿದುಕೊಂಡರೆ ಕ್ರೀಡೆಯ ಮಹತ್ವವೆನ್ನೆಂಬುದನ್ನು ತಿಳಿದುಕೊಳ್ಳುವುದಕ್ಕೆ ಸಾಧ್ಯವಾಗುತ್ತದೆ ಎಂದರು.

ವಿದ್ಯಾರ್ಥಿಗಳು ದಿನನಿತ್ಯ ಎರಡು ಮೂರು ತಾಸು ಕ್ರೀಡೆಯಲ್ಲಿ ಭಾಗವಹಿಸುವುದರಿಂದ ಮಾನಸಿಕ ಬೆಳವಣಿಗೆಗೆ ಸಹಕಾರಿಯಾಗುತ್ತದೆ. ಓದುವುದಕ್ಕೆ ಶಾಂತಿಬೇಕಾಗಿದ್ದು, ಅದನ್ನು ಕ್ರೀಡೆಯಿಂದ ಪಡೆದುಕೊಳ್ಳಬಹುದು ಎಂದು ಹೇಳಿದರು.

ಜಿ.ಪಂ ಅಧ್ಯಕ್ಷೆ ಜಯಶೀಲಾ ಮಾತನಾಡಿ, ಕ್ರೀಡೆಯಲ್ಲಿ ಗ್ರಾಮೀಣ ಭಾಗದ ಮಕ್ಕಳು ಹೆಚ್ಚಾಗಿ ಭಾಗವಹಿಸುತ್ತಾರೆ. ವಲಯ ಮಟ್ಟದಲ್ಲಿ ಆಟದ ಮೈದಾನಗಳು ಇರುವುದಿಲ್ಲ. ಇದರ ಬಗ್ಗೆ ಹೆಚ್ಚು ಗಮನಹರಿಸಬೇಕು. ರಾಷ್ಟ್ರ, ಅಂತರಾಷ್ಟ್ರೀಯ ಮಟ್ಟದ ಕ್ರೀಡೆಯಲ್ಲಿ ಗ್ರಾಮೀಣ ಭಾಗದ ಕ್ರೀಡಾಪಟುಗಳು ಹೆಚ್ಚಾಗಿ ಭಾಗವಹಿಸುತ್ತಿರುವುದು ಸಂತಸದ ವಿಷಯ. ತೀರ್ಪುಗಾರರು ಪಕ್ಷಪಾತ ಮಾಡದೆ ಪ್ರತಿಭಾವಂತ ಕ್ರೀಡಾಪಟುಗಳನ್ನು ಆಯ್ಕೆಮಾಡಿ ಮುಂದಿನ ಹಂತಕ್ಕೆ ಕಳುಹಿಸಬೇಕೆಂದರು.

ಮೇಯರ್ ಶೋಭಾ ಪಲ್ಲಾಗಟ್ಟೆ ಮಾತನಾಡಿ, ಕ್ರೀಡೆಯಲ್ಲಿ ಸೋಲು-ಗೆಲುವು ಸಹಜ. ಕ್ರೀಡೆಯಲ್ಲಿ ಭಾಗವಹಿಸುವುದು ಮುಖ್ಯ. ಕ್ರೀಡೆಯ ಜೊತೆಗೆ ಓದಿನ ಕಡೆಗೆ ಶ್ರದ್ದೆವಹಿಸಬೇಕೆಂದು ಕರೆ ನೀಡಿದರು. 

ಈ ವೇಳೆ ಜಿಲ್ಲಾ ಪದವಿಪೂರ್ವ ಶಿಕ್ಷಣ ಇಲಾಖೆಯಿಂದ 2017-18ನೇ ಸಾಲಿನಲ್ಲಿ ಪಿಯುಸಿ ಪರೀಕ್ಷೆಯಲ್ಲಿ ಅತೀ ಹೆಚ್ಚು ಅಂಕಪಡೆದ ಆರು ವಿದ್ಯಾರ್ಥಿಗಳಿಗೆ ಲ್ಯಾಬ್ ಟಾಪ್ ಗಳನ್ನು ವಿತರಣೆ ಮಾಡಲಾಯಿತು. 

ಜಿಲ್ಲಾ ಪ್ರಾಚಾರ್ಯ ಸಂಘದ ಅಧ್ಯಕ್ಷ ಎಸ್.ಪ್ರದೀಪ್ ಕುಮಾರ್, ಮಮತಾ, ರಾಜಶೇಖರ್, ಮಲ್ಲಿಕಾರ್ಜುನಯ್ಯ, ಪರಮೇಶ್ವರಪ್ಪ ಇತರರು ಇದ್ದರು. 

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News