ಜಾರಕಿಹೊಳಿ ಸಹೋದರರೊಂದಿಗೆ ಸಿಎಂ ಕುಮಾರಸ್ವಾಮಿ ಸಂಧಾನ

Update: 2018-09-18 13:21 GMT

ಬೆಂಗಳೂರು, ಸೆ. 18: ಪ್ರಸಕ್ತ ರಾಜಕೀಯ ಬೆಳವಣಿಗೆಗಳ ಹಿನ್ನೆಲೆಯಲ್ಲಿ ಅಸಮಾಧಾನಗೊಂಡಿದ್ದ ಜಾರಕಿಹೊಳಿ ಸಹೋದರರೊಂದಿಗೆ ಮುಖ್ಯಮಂತ್ರಿ ಕುಮಾರಸ್ವಾಮಿ ಸಮಾಲೋಚನೆ ನಡೆಸಿದ್ದು, ಸಂಧಾನ ಸಫಲವಾಗಿದೆ ಎಂದು ಗೊತ್ತಾಗಿದೆ.

ಮಂಗಳವಾರ ನಗರದ ಖಾಸಗಿ ಹೊಟೇಲ್‌ನಲ್ಲಿ ಸಚಿವ ರಮೇಶ್ ಜಾರಕಿಹೊಳಿ, ಮಾಜಿ ಸಚಿವ ಸತೀಶ್ ಜಾರಕಿಹೊಳಿ ಹಾಗೂ ಶಾಸನ ನಾಗೇಂದ್ರ ಅವರೊಂದಿಗೆ ಮುಖ್ಯಮಂತ್ರಿ ಕುಮಾರಸ್ವಾಮಿ ಚರ್ಚಿಸಿದರು. ಅಲ್ಲದೆ, ಸಮಸ್ಯೆ ಈಡೇರಿಸುವ ಭರವಸೆ ನೀಡಿದ್ದಾರೆಂದು ತಿಳಿದು ಬಂದಿದೆ.

ಡಿಸಿಎಂ ಹುದ್ದೆ ಕೇಳಿಲ್ಲ: ನಾವು ಡಿಸಿಎಂ ಹುದ್ದೆಗೆ ಬೇಡಿಕೆ ಇಟ್ಟಿಲ್ಲ, ನಾವು ಯಾವುದೇ ರೆಸಾರ್ಟ್ ರಾಜಕಾರಣವನ್ನೂ ಮಾಡುತ್ತಿಲ್ಲ. ಬಳ್ಳಾರಿ ಜಿಲ್ಲೆಯ ಎಸ್ಟಿ ಸಮುದಾಯಕ್ಕೆ ಸಚಿವ ಸ್ಥಾನ ನೀಡಬೇಕೆಂದು ಮನವಿ ಮಾಡಿದ್ದೇವೆ ಎಂದು ಶಾಸಕ ಸತೀಶ್ ಜಾರಕಿಹೊಳಿ ಹೇಳಿದರು.

ಜತೆಗೆ ಬೆಳಗಾವಿ ಜಿಲ್ಲೆಯ ರಾಜಕಾರಣದ ಬಗ್ಗೆಯೂ ಚರ್ಚಿಸಿದ್ದು, ಮುಂದೆ ಈ ರೀತಿಯ ಪರಿಸ್ಥಿತಿ ಎದುರಾಗದಂತೆ ನೋಡಿಕೊಳ್ಳುವಂತೆ ಮನವಿ ಮಾಡಲಾಗಿದೆ. ಅಲ್ಲದೆ, ಜಿಲ್ಲೆಯ ಅಧಿಕಾರಿಗಳ ವರ್ಗಾವಣೆಯಲ್ಲಿ ತಮ್ಮನ್ನು ಪರಿಗಣಿಸುವಂತೆಯೂ ಅವರಿಗೆ ತಿಳಿಸಲಾಗಿದೆ ಎಂದರು.

ನಾವು ಯಾವುದೇ ಬೇಡಿಕೆ ಇಟ್ಟಿಲ್ಲ, ಆದರೆ ನಮ್ಮ ಸಮಸ್ಯೆಗಳನ್ನು ಬಗೆಹರಿಸುವಂತೆ ಮನವಿ ಮಾಡಿದ್ದೇವೆ. ಸಿಎಂ ಬೇಡಿಕೆ ಈಡೇರಿಸುವ ಭರವಸೆ ನೀಡಿದ್ದಾರೆ ಎಂದ ಅವರು, ಕಾಂಗ್ರೆಸ್ ಹೈಕಮಾಂಡ್ ನಾಳೆ(ಸೆ.19) ಕರೆದಿರುವ ಸಭೆಗೆ ಭಾಗವಹಿಸಲು ಹೊಸದಿಲ್ಲಿಗೆ ತೆರಳಲಿದ್ದೇವೆ ಎಂದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News