ರಫೇಲ್ ಹಗರಣದ ವಿರುದ್ಧ ಉಡುಪಿಯಲ್ಲಿ ಕಾಂಗ್ರೆಸ್ ಧರಣಿ: ಪ್ರತಿಭಟನಾ ಮೆರವಣಿಗೆಯಲ್ಲಿ ಲಾಠಿ ಪ್ರದರ್ಶನ

Update: 2018-09-18 09:47 GMT

ಉಡುಪಿ, ಸೆ.18: ನರೇಂದ್ರ ಮೋದಿ ನೇತೃತ್ವದ ಕೇಂದ್ರ ಬಿಜೆಪಿ ಸರಕಾರದ 41 ಸಾವಿರ ಕೋಟಿ ರೂ. ಮೊತ್ತದ ರಪೇಲ್ ಯುದ್ಧ ವಿಮಾನ ಹಗರಣದ ಬಗ್ಗೆ ಸೂಕ್ತ ತನಿಖೆ ನಡೆಸುವಂತೆ ಆಗ್ರಹಿಸಿ ಉಡುಪಿ ಜಿಲ್ಲಾ ಕಾಂಗ್ರೆಸ್ ನೇತೃತ್ವ ದಲ್ಲಿ ಮಂಗಳವಾರ ಉಡುಪಿ ಜಿಲ್ಲಾಧಿಕಾರಿ ಕಚೇರಿ ಎದುರು ಧರಣಿ ಹಮ್ಮಿಕೊಳ್ಳಲಾಗಿತ್ತು.

ಮಣಿಪಾಲ ಟೈಗರ್ ಸರ್ಕಲ್‌ನಿಂದ ಜಿಲ್ಲಾಧಿಕಾರಿ ಕಛೇರಿಯವರೆಗೆ ನಡೆದ ಪ್ರತಿಭಟನಾ ಮೆರವಣಿಗೆಯಲ್ಲಿ ನರೇಂದ್ರ ಮೋದಿ ವಿರುದ್ಧ ಘೋಷಣೆಗಳನ್ನು ಕೂಗುತ್ತ 200ಕ್ಕೂ ಅಧಿಕ ಕಾರ್ಯಕರ್ತರ ಲಾಠಿಗಳನ್ನು ಪ್ರದರ್ಶಿಸಿ ಆಕ್ರೋಶ ವ್ಯಕ್ತಪಡಿಸಿದರು. ಮೆರವಣಿಗೆಯಲ್ಲಿ ಸಾವಿರಾರು ಸಂಖ್ಯೆಯಲ್ಲಿ ಮುಖಂಡರು ಹಾಗೂ ಕಾರ್ಯಕರ್ತರು ಪಾಲ್ಗೊಂಡಿದ್ದರು.

ಬಳಿಕ ಜಿಲ್ಲಾಧಿಕಾರಿ ಕಚೇರಿ ಎದುರು ಸಮಾವೇಶಗೊಂಡ ಧರಣಿನಿರತರನ್ನುದ್ದೇಶಿಸಿ ಮಾತನಾಡಿದ ಮಾಜಿ ಸಚಿವ ವಿನಯ ಕುಮಾರ್ ಸೊರಕೆ, ರಫೇಲ್ ಯುದ್ಧ ವಿಮಾನ ಹಗರಣದಿಂದ ದೇಶಕ್ಕೆ 41 ಸಾವಿರ ಕೋಟಿ ರೂ. ನಷ್ಟ ಉಂಟಾಗಿದೆ. ಇದು ಈ ಶತಮಾನದ ಅತ್ಯಂತ ದೊಡ್ಡ ಭ್ರಷ್ಟಾಚಾರವಾಗಿದೆ. ಇದರಲ್ಲಿ ನೇರವಾಗಿ ಪ್ರಧಾನಿ ನರೇಂದ್ರ ಮೋದಿ ಕೈವಾಡ ಇರುವುದರಿಂದ ಈ ಬಗ್ಗೆ ಎಲ್ಲ ಪಕ್ಷಗಳನ್ನು ಒಳಗೊಂಡ ಜಂಟಿ ಸಂಸದೀಯ ಸಮಿತಿಯಿಂದ ತನಿಖೆ ನಡೆಸಬೇಕು ಎಂದು ಒತ್ತಾಯಿಸಿದರು.

ಮಾಜಿ ಶಾಸಕ ಗೋಪಾಲ ಭಂಡಾರಿ ಮಾತನಾಡಿ, ಪರಸ್ಪರ ಅಪನಂಬಿಕೆ, ಗೊಂದಲಗಳಿಂದ ದೇಶದಲ್ಲಿ ಒಗ್ಗಟ್ಟು ಕಾಣಲು ಸಾಧ್ಯವಿಲ್ಲ. ನಾವೆಲ್ಲ ಜಾತ್ಯತೀತತೆ, ಸಹೋದರತೆ ಹಾಗೂ ಸೌಹಾರ್ದದಿಂದ ಒಟ್ಟಿಗೆ ಸಾಗಬೇಕು. ಆದರೆ ಬಿಜೆಪಿಯವರು ಧರ್ಮದ ಹೆಸರಿನಲ್ಲಿ ವಿಭಜನೆ ಮಾಡಿ, ಪರಸ್ಪರ ಅಪ ನಂಬಿಕೆ ಸೃಷ್ಟಿಸಿ, ಜನರನ್ನು ಭಾವನಾತ್ಮಕವಾಗಿ ಕೆರಳಿಸಿ ಅಧಿಕಾರಕ್ಕೆ ಬಂದಿದ್ದಾರೆ. ಇದರಿಂದ ದೇಶದ ಸ್ಥಿತಿ ಈ ಮಟ್ಟಕ್ಕೆ ತಲುಪುವಂತಾಗಿದೆ ಎಂದು ಟೀಕಿಸಿದರು.

ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಜನಾರ್ದನ ತೋನ್ಸೆ, ವಿಧಾನ ಪರಿಷತ್ ಸದಸ್ಯ ಕೆ.ಪ್ರತಾಪಚಂದ್ರ ಶೆಟ್ಟಿ, ಮಾಜಿ ಶಾಸಕ ಗೋಪಾಲ ಪೂಜಾರಿ, ರಾಜ್ಯ ಇಂಟಕ್ ಅಧ್ಯಕ್ಷ ರಾಕೇಶ್ ಮಲ್ಲಿ, ಕೆಪಿಸಿಸಿ ಪ್ರಧಾನ ಕಾರ್ಯದರ್ಶಿಗಳಾದ ಜಿ.ಎ. ಬಾವಾ, ಎಂ.ಎ.ಗಫೂರ್, ಮುಖಂಡರಾದ ಮಮತಾ ಗಟ್ಟಿ, ದೇವಿಪ್ರಸಾದ್ ಶೆಟ್ಟಿ, ವರೋನಿಕಾ ಕರ್ನೆಲಿಯೋ, ರಾಜು ಪೂಜಾರಿ, ಅಮೃತ್ ಶೆಣೈ, ಹರಿಯಣ್ಣ, ನೀರೆ ಕೃಷ್ಣ ಶೆಟ್ಟಿ, ನವೀನ್‌ಚಂದ್ರ ಶೆಟ್ಟಿ ಮೊದಲಾದವರು ಉಪಸ್ಥಿತರಿದ್ದರು.

ಬಳಿಕ ಈ ಕುರಿತ ಮನವಿಯನ್ನು ಅಪರ ಜಿಲ್ಲಾಧಿಕಾರಿ ವಿದ್ಯಾ ಕುಮಾರಿ ಮೂಲಕ ಜಿಲ್ಲಾಧಿಕಾರಿಗೆ ಸಲ್ಲಿಸಲಾಯಿತು.

Full View

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News