ವಿವಿಧ ಬೇಡಿಕೆ ಈಡೇರಿಕೆಗೆ ಒತ್ತಾಯಿಸಿ ಕಬ್ಬು ಬೆಳೆಗಾರರಿಂದ ವಿಧಾನಸೌಧ ಮುತ್ತಿಗೆ

Update: 2018-09-18 16:26 GMT

ಬೆಂಗಳೂರು, ಸೆ.18: ಕಬ್ಬು ಬೆಳೆಗೆ ನಿಗದಿತ ಬೆಂಬಲ ಹಾಗೂ ಬಾಕಿ ಹಣ ಪಾವತಿಸುವುದು ಸೇರಿದಂತೆ ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಒತ್ತಾಯಿಸಿ ರಾಜ್ಯ ಕಬ್ಬು ಬೆಳೆಗಾರರ ಸಂಘದ ನೇತೃತ್ವದಲ್ಲಿ ವಿಧಾನಸೌಧ ಮುತ್ತಿಗೆ ಚಳುವಳಿ ನಡೆಸಲಾಯಿತು.

ಮಂಗಳವಾರ ನಗರದ ಸಿಟಿ ರೈಲ್ವೆ ನಿಲ್ದಾಣದಿಂದ ಫ್ರೀಡಂ ಪಾರ್ಕ್‌ವರೆಗೆ ಪ್ರತಿಭಟನಾ ಮೆರವಣಿಗೆ ನಡೆಸಿದ ಕಬ್ಬು ಬೆಳೆಗಾರರು, ರಾಜ್ಯ ಸರಕಾರ ತಮ್ಮ ಬೇಡಿಕೆಗಳನ್ನು ಈಡೇರಿಸಲು ಮುಂದಾಗಬೇಕೆಂದು ಒತ್ತಾಯಿಸಿದರು.

ಈ ಕುರಿತು ಸುದ್ದಿಗಾರರೊಂದಿಗೆ ಮಾತನಾಡಿದ ಸಂಘದ ರಾಜ್ಯಾಧ್ಯಕ್ಷ ಕುರುಬೂರು ಶಾಂತಕುಮಾರ್, ಕೇಂದ್ರ ಸರಕಾರ ಕಬ್ಬಿಗೆ 2,750 ರೂ. ಬೆಲೆ ನಿಗದಿ ಮಾಡಿದೆ. ರಾಜ್ಯ ಸರಕಾರ ಇದನ್ನು ತಿರಸ್ಕರಿಸಿ ಹೊಸ ದರ ನಿಗದಿ ಪಡಿಸಲು ಕ್ರಮಕೈಗೊಳ್ಳಬೇಕು. ಸಕ್ಕರೆ ಕಾರ್ಖಾನೆಗಳ ಮಹಾಮಂಡಳ ಸಂಘಕ್ಕೆ ರಾಜ್ಯ ಕಬ್ಬು ಬೆಳೆಗಾರರ ಸಂಘದ ಇಬ್ಬರಿಗೆ ಪ್ರಾತಿನಿಧ್ಯ ನೀಡಬೇಕು ಎಂದು ಆಗ್ರಹಿಸಿದರು.

ಅದೇ ರೀತಿ, ರಾಜ್ಯ ಸರಕಾರ ರಾಷ್ಟ್ರೀಕೃತ ಬ್ಯಾಂಕ್‌ಗಳಲ್ಲಿ 2 ಲಕ್ಷ ರೂ.ವರೆಗಿನ ಸುಸ್ತಿ ಸಾಲಮನ್ನಾ ಮಾಡಿರುವ ಆದೇಶವನ್ನು ಕೂಡಲೇ ಹೊರಡಿಸಬೇಕು ಎಂದ ಅವರು, ಕಬ್ಬು ಬೆಳೆಗಾರರು ಸಂಕಷ್ಟಕ್ಕೆ ಸಿಲುಕಿದ್ದರೂ, ಸರಕಾರ ಕ್ರಮ ಕೈಗೊಳ್ಳುತ್ತಿಲ್ಲ ಎಂದು ಆರೋಪಿಸಿದರು. ಬೆಳಗಾವಿ, ಬಾಗಲಕೋಟೆ, ಕಲಬುರಗಿ, ಬೀದರ್, ಮಂಡ್ಯ ಸೇರಿದಂತೆ ಹಲವು ಸಕ್ಕರೆ ಕಾರ್ಖಾನೆಗಳಲ್ಲಿ ಸುಮಾರು 500 ಕೋಟಿ ರೂ. ಬಾಕಿ ಉಳಿದುಕೊಂಡಿದೆ. ಕಾರ್ಖಾನೆಗಳಿಗೆ ಕಂದಾಯ ವಸೂಲಾತಿ ಬಾಕಿ ಆದೇಶ ಹೊರಡಿಸಿ ಸಕ್ಕರೆ ಮುಟ್ಟುಗೋಲು ಹಾಕಿ ಮಾರಾಟ ಮಾಡಿ, ರೈತರ ಹಣ ಕೊಡಿಸಬೇಕು ಎಂದು ಒತ್ತಾಯಿಸಿದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News