ಸಮಾಜಕ್ಕೆ ಉತ್ತಮ ವಿದ್ಯಾರ್ಥಿಗಳನ್ನು ನೀಡುವ ಜವಾಬ್ದಾರಿ ಶಿಕ್ಷಕರ ಮೇಲಿದೆ: ಶಾಸಕ ಆರ್.ನರೇಂದ್ರ

Update: 2018-09-18 17:13 GMT

ಹನೂರು,ಸೆ.18: ಮಕ್ಕಳಿಗೆ ಉತ್ತಮ ಶಿಕ್ಷಣವನ್ನು ನೀಡುವ ಮೂಲಕ ಸಮಾಜಕ್ಕೆ ಉತ್ತಮ, ಸಂಸ್ಕಾರಯುತ ವಿದ್ಯಾರ್ಥಿಗಳನ್ನು ಕೊಡುಗೆಯಾಗಿ ನೀಡುವ ಮಹತ್ತರವಾದ ಜವಾಬ್ದಾರಿ ಶಿಕ್ಷಕರ ಮೇಲಿದೆ ಎಂದು ಶಾಸಕ ಆರ್.ನರೇಂದ್ರರಾಜುಗೌಡ ತಿಳಿಸಿದರು 

ಪಟ್ಟಣದ ಗೌರಿ ಶಂಕರ ಕಲ್ಯಾಣ ಮಂಟಪದಲ್ಲಿ ಜಿಲ್ಲಾ ಪಂಚಾಯತ್ ಚಾಮರಾಜನಗರ ಹಾಗೂ ಸಾರ್ವಜನಿಕ ಶಿಕ್ಷಣ ಇಲಾಖೆ, ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಚೇರಿಯ ಸಂಯುಕ್ತ ಆಶ್ರಯದಲ್ಲಿ ಆಯೋಜಿಸಿದ್ದ ಶಿಕ್ಷಕರ ದಿನಾಚರಣೆ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ಶಿಕ್ಷಕರಾದವರು ಸಾಮಾಜಿಕ ನ್ಯಾಯದಡಿ ಎಲ್ಲಾ ವರ್ಗದ ಮಕ್ಕಳಿಗೆ ಗುಣಮಟ್ಟದ ಶಿಕ್ಷಣ ನೀಡುವ ಮೂಲಕ ಸಮಾಜಮುಖಿಯಾಗಿ ಕೆಲಸ ಮಾಡುವಂತೆ ಪ್ರೇರೇಪಿಸಬೇಕು ಎಂದರು.

ಹನೂರು ಕ್ಷೇತ್ರ ಗುಡ್ಡ ಪ್ರದೇಶಗಳಿಂದ ಕೂಡಿದ್ದರೂ ಇಲ್ಲಿ ಕರ್ತವ್ಯ ನಿರ್ವಹಿಸುತ್ತಿರುವ ಶಿಕ್ಷಕರು ತಮ್ಮ ಶಿಸ್ತಿನ ಮೂಲಕ ಮಕ್ಕಳಿಗೆ ಗುಣಮಟ್ಟ ಶಿಕ್ಷಣ ನೀಡಿ  ಜಿಲ್ಲೆಯ ಇನ್ನಿತರ ತಾಲ್ಲೂಕಿಗೆ ಮಾದರಿಯಾಗಿದ್ದಾರೆ. ಆದ್ದರಿಂದಲೇ ಹನೂರು ಎಸ್‍ಎಸ್‍ಎಲ್‍ಸಿ ಪರೀಕ್ಷೆಯಲ್ಲಿ ಕಳೆದ ಮೂರು ವರ್ಷಗಳಿಂದಲೂ ಸತತವಾಗಿ ಜಿಲ್ಲೆಗೆ ಪ್ರಥಮ ಸ್ಥಾನಗಳಿಸಿ ರಾಜ್ಯಮಟ್ಟದಲ್ಲಿಯೂ ಕೀರ್ತಿ ಪತಾಕಿಯನ್ನು ಹಾರಿಸಿದೆ. ಈ ನಿಟ್ಟಿನಲ್ಲಿ ನಮ್ಮ ಶಿಕ್ಷಕರಿಗೆ ಗಿರಿ ಭತ್ಯೆ ನೀಡುವ ವಿಚಾರವಾಗಿ ಸದನದಲ್ಲಿ ಈಗಾಗಲೇ ದ್ವನಿ ಎತ್ತಿದ್ದೇನೆ ಎಂದರು.

ಹನೂರು ತಾಲೂಕಿನ ಶಿಕ್ಷಕರ ಸಮಸ್ಯೆ ಪರಿಹರಿಸಲು ಬಿನ್ನವತ್ತಳಿಕೆ ಪತ್ರವನ್ನು ಓದಿ ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ಅಧ್ಯಕ್ಷ ಜಾನ್ ಬ್ರೀಟೋ ಶಾಸಕರಿಗೆ ಮನವಿ ಸಲ್ಲಿಸಿದರು 

ಈ ವೇಳೆ ತಾಲೂಕಿನ ವಿವಿಧ ಶಾಲೆಗಳಲ್ಲಿ ಕರ್ತವ್ಯ ನಿರ್ವಹಿಸಿ ವಯೋನಿವೃತ್ತಿ ಹೊಂದಿದ್ದ 15 ಶಿಕ್ಷಕರು ಮತ್ತು ತಾಲ್ಲೂಕಿನ ಉತ್ತಮ ಶಿಕ್ಷಕರನ್ನು ಗೌರವಿಸಲಾಯಿತು. ಈ ವೇಳೆ ಶಿಕ್ಷಕರಿಗೆ ಆಯೋಜಿಸಿದ್ದ ಸಾಂಸ್ಕೃತಿಕ ಚಟುವಟಿಕೆ, ಕ್ರೀಡಾ ಚಟುವಟಿಕೆ ಮತ್ತು ಕ್ರೀಡಾಕೂಟದಲ್ಲಿ ವಿಜೇತರಾದ ಶಿಕ್ಷಕರಿಗೆ ಬಹುಮಾನ ನೀಡಲಾಯಿತು. ಅಲ್ಲದೇ, ಕಳೆದ ಸಾಲಿನ ಎಸ್‍ಎಸ್‍ಎಲ್‍ಸಿ ಪರಿಕ್ಷೇಯಲ್ಲಿ ಶೇ.100 ಫಲಿತಾಂಶ ಪಡೆದ ಶಾಲೆಯ ಶಿಕ್ಷಕರನ್ನು ಸಹ ಸನ್ಮಾನಿಸಲಾಯಿತು.

ಈ ಸಂದರ್ಭದಲ್ಲಿ ಶಿವಮ್ಮಕೃಷ್ಣ, ಸದಸ್ಯರಾದ ಬಸವರಾಜು ಮರಗದಮಣಿ, ಲೇಖಾ, ಇರ್ಷಾದ್‍ ಭಾನು, ಮಂಗಳರಂಗಸ್ವಾಮಿ, ತಾಲೂಕು ಸ್ಥಾಯಿ ಸಮಿತಿ ಅಧ್ಯಕ್ಷ ಜವಾದ್‍ ಅಹಮದ್, ಸದಸ್ಯರಾದ ಶಿವಮ್ಮ, ನಟರಾಜು, ರಾಜೇಂದ್ರ, ಲೊಕೇಶ್, ಪಪಂ ಅಧ್ಯಕ್ಷ ಮಮತಾ, ಉಪಾಧ್ಯಕ್ಷ ಬಸವರಾಜು, ಮಂಜುನಾಥ್ ಬಿಇಒ ಟಿ.ಆರ್ ಸ್ವಾಮಿ ಇನ್ನಿತರರು ಹಾಜರಿದ್ದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News