ಎಸ್ಟಿ ಮೀಸಲಾತಿ ಪ್ರಮಾಣ ಹೆಚ್ಚಳಕ್ಕೆ ಸಿಎಂಗೆ ಮನವಿ: ಸಚಿವ ರಮೇಶ್ ಜಾರಕಿಹೊಳಿ

Update: 2018-09-19 13:50 GMT

ಬೆಂಗಳೂರು, ಸೆ.19: ಎಸ್ಟಿ ಮೀಸಲಾತಿ ಪ್ರಮಾಣವನ್ನು ಹೆಚ್ಚಳ ಮಾಡುವಂತೆ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿಗೆ ಮನವಿ ಸಲ್ಲಿಸಲಾಗಿದ್ದು, ಅವರು ಸಕಾರಾತ್ಮಕವಾಗಿ ಸ್ಪಂದಿಸಿದ್ದಾರೆ ಎಂದು ಪೌರಾಡಳಿತ ಸಚಿವ ರಮೇಶ್ ಜಾರಕಿಹೊಳಿ ತಿಳಿಸಿದರು.

ಬುಧವಾರ ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ನಮ್ಮ ಸಮುದಾಯಕ್ಕೆ ಮೀಸಲಾತಿ ಪ್ರಮಾಣ ಹೆಚ್ಚಿಸಬೇಕು ಎಂಬ ಬೇಡಿಕೆಗೆ ಮುಖ್ಯಮಂತ್ರಿ ಸಹಮತಿ ಸೂಚಿಸಿದ್ದಾರೆ. ಅಲ್ಲದೆ, ನಮ್ಮ ಸಮುದಾಯದ ಒಬ್ಬರಿಗೆ ವಿಧಾನಪರಿಷತ್ ಸ್ಥಾನ ನೀಡಬೇಕು ಎಂದು ಕೋರಲಾಗಿದೆ ಎಂದರು.

ರಾಜ್ಯ ಲೋಕಸೇವಾ ಆಯೋಗ(ಕೆಪಿಎಸ್ಸಿ)ಕ್ಕೆ ವಾಲ್ಮೀಕಿ ಸಮುದಾಯದವರನ್ನು ಸದಸ್ಯರನ್ನಾಗಿ ನೇಮಕ ಮಾಡಬೇಕು. ನಾವು ನಮ್ಮ ಸಮುದಾಯದವಲ್ಲದೆ ಅಹಿಂದ ಸಮುದಾಯದ ಪರವಾಗಿ ಕೆಲಸ ಮಾಡುತ್ತಿದ್ದೇವೆ ಎಂದು ರಮೇಶ್ ಜಾರಕಿಹೊಳಿ ಹೇಳಿದರು.

ಅಹಿಂದ ಸಮುದಾಯದ ಶಾಸಕರು ನನ್ನನ್ನು ಭೇಟಿಯಾಗುತ್ತಿದ್ದಾರೆ. ಅವರ ಬೇಡಿಕೆಗಳ ಬಗ್ಗೆ ನನ್ನ ಬಳಿ ಚರ್ಚೆ ನಡೆಸುತ್ತಿದ್ದಾರೆ ಅಷ್ಟೇ. ನಾನು ಯಾವುದೇ ಕಾರಣಕ್ಕ್ಕೂ ಬಿಜೆಪಿಗೆ ಹೋಗುವುದಿಲ್ಲ. ಕೆಲ ವಿಚಾರಗಳ ಬಗ್ಗೆ ಸಿಟ್ಟು ಇತ್ತು. ಈಗ ಅವೆಲ್ಲ ಮುಗಿದಿದೆ ಎಂದು ಅವರು ತಿಳಿಸಿದರು.

ಕೆಲವು ಆಂತರಿಕ ವಿಷಯಗಳನ್ನು ಬಹಿರಂಗವಾಗಿ ಹೇಳಲು ಸಾಧ್ಯವಿಲ್ಲ. ನಮ್ಮಿಂದ ಸಮ್ಮಿಶ್ರ ಸರಕಾರಕ್ಕೆ ಯಾವುದೇ ತೊಂದರೆಯಾಗುವುದಿಲ್ಲ. ಮುಖ್ಯಮಂತ್ರಿಯ ಭೇಟಿ ಬಳಿಕ ನಮ್ಮ ಎಲ್ಲ ಸಮಸ್ಯೆಗಳು ಬಗೆಹರಿದಿವೆ. ಅಧಿಕಾರಿಗಳ ವರ್ಗಾವಣೆ ಬಗ್ಗೆ ಜಾರಕಿಹೊಳಿ ಕುಟುಂಬ ತಲೆ ಕೆಡಿಸಿಕೊಳ್ಳುವುದಿಲ್ಲ. ಶಾಸಕಿ ಲಕ್ಷ್ಮಿಹೆಬ್ಬಾಳ್ಕರ್ ಬಗ್ಗೆ ನಾನು ಮಾತನಾಡುವುದಿಲ್ಲ ಎಂದು ರಮೇಶ್ ಜಾರಕಿಹೊಳಿ ಹೇಳಿದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News