‘ಕ್ರೀಡಾ ಹಬ್’ ನಿರ್ಮಾಣಕ್ಕೆ ನೆರವು ನೀಡಲು ಡಿಸಿಎಂ ಡಾ.ಜಿ.ಪರಮೇಶ್ವರ್ ಮನವಿ

Update: 2018-09-19 14:14 GMT

ಹೊಸದಿಲ್ಲಿ/ಬೆಂಗಳೂರು, ಸೆ. 19: ಕೆಂಪೇಗೌಡ ಅಂತರ್‌ರಾಷ್ಟ್ರೀಯ ವಿಮಾನ ನಿಲ್ದಾಣ ಸಮೀಪದ ವಿದ್ಯಾನಗರದಲ್ಲಿ ಸ್ಪೋಟ್ಸ್ ಹಬ್ ನಿರ್ಮಾಣಕ್ಕೆ 70 ಕೋಟಿ ರೂ. ಹಾಗೂ ರಾಜ್ಯದ ಕ್ರೀಡಾ ಅಭಿವೃದ್ಧಿಗೆ ಹೆಚ್ಚಿನ ನೆರವು ನೀಡಬೇಕೆಂದು ಉಪ ಮುಖ್ಯಮಂತ್ರಿ ಡಾ.ಜಿ.ಪರಮೇಶ್ವರ್, ಕೇಂದ್ರ ಕ್ರೀಡಾ ಸಚಿವ ರಾಜವರ್ಧನ್ ಸಿಂಗ್ ರಾಥೋಡ್‌ಗೆ ಮನವಿ ಮಾಡಿದ್ದಾರೆ.

ಬುಧವಾರ ಹೊಸದಿಲ್ಲಿಯಲ್ಲಿ ಕೇಂದ್ರ ಕ್ರೀಡಾ ಸಚಿವರನ್ನು ಭೇಟಿ ಮಾಡಿದ ಪರಮೇಶ್ವರ್, ಕ್ರೀಡಾ ಅಭಿವೃದ್ಧಿ ವಿಚಾರವಾಗಿ ಚರ್ಚೆ ನಡೆಸಿದರು. ಬೆಂಗಳೂರಿನ ಜಯಪ್ರಕಾಶ ನಾರಾಯಣ ರಾಷ್ಟ್ರೀಯ ಯುವ ಕೇಂದ್ರದಲ್ಲಿ ಅಂತರ್‌ರಾಷ್ಟ್ರೀಯ ಮಟ್ಟದ ಕ್ರೀಡಾಹಬ್ ನಿರ್ಮಾಣಕ್ಕೆ ಯೋಜನೆ ಸಿದ್ಧಪಡಿಸಲಾಗಿದೆ. 70 ಕೋಟಿ ರೂ. ವೆಚ್ಚ ಅಂದಾಜಿಸಲಾಗಿದೆ. ಹೀಗಾಗಿ ಖೇಲೋ ಇಂಡಿಯಾ ಯೋಜನೆಯಡಿ ಈ ಕಾರ್ಯಕ್ರಮಕ್ಕೆ ಅನುದಾನ ನೀಡುವಂತೆ ಕೇಂದ್ರ ಸಚಿವರಿಗೆ ಮನವಿ ಸಲ್ಲಿಸಿದರು. ಇದರ ಜೊತೆಗೆ, ರಾಜ್ಯದಲ್ಲಿ ಕ್ರೀಡಾ ಅಭಿವೃದ್ಧಿ ನಿಟ್ಟಿನಲ್ಲಿ ಸಾಕಷ್ಟು ಯೋಜನೆ ಕೈಗೆತ್ತಿಕೊಳ್ಳಲಾಗಿದ್ದು, ಅದಕ್ಕೂ ಕೇಂದ್ರ ಕ್ರೀಡಾ ಇಲಾಖೆಯಿಂದ ಅನುದಾನ ನೀಡುವಂತೆಯೂ ಪ್ರಸ್ತಾವನೆ ಸಲ್ಲಿಸಿದರು. ಶೀಘ್ರವೇ ಅನುದಾನ ಬಿಡುಗಡೆಗೆ ಮನವಿ ಮಾಡಿದರು.

ಉಪ ಮುಖ್ಯಮಂತ್ರಿ ಡಾ.ಜಿ.ಪರಮೇಶ್ವರ್ ಅವರ ಮನವಿಗೆ ಕೇಂದ್ರ ಸಚಿವ ರಾಜವರ್ಧನ್ ಸಿಂಗ್ ರಾಠೋಡ್ ಸಕಾರಾತ್ಮಕವಾಗಿ ಸ್ಪಂದಿಸಿದ್ದಾರೆ ಎಂದು ಪ್ರಕಟಣೆ ತಿಳಿಸಿದೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News