ಜನಪರ ಸರಕಾರ ಪತನಕ್ಕೆ ಬಿಜೆಪಿ ಷಡ್ಯಂತ್ರ: ಕೆಪಿಸಿಸಿ ಕಾರ್ಯಾಧ್ಯಕ್ಷ ಈಶ್ವರ್ ಖಂಡ್ರೆ

Update: 2018-09-20 12:18 GMT

ಬೆಂಗಳೂರು, ಸೆ.20: ರಾಜ್ಯದಲ್ಲಿ ಸಮ್ಮಿಶ್ರ ಸರಕಾರ ಸುಭದ್ರವಾಗಿದೆಯೆಂದು ಬಿಜೆಪಿಗೂ ಗೊತ್ತು. ಆದರೆ, ಸರಕಾರವನ್ನು ಏರುಪೇರು ಮಾಡುವ ಮೂಲಕ ಜನರಲ್ಲಿ ಸರಕಾರದ ಬಗ್ಗೆ ನಕಾರಾತ್ಮಕ ಭಾವನೆ ಮೂಡಿಸಲು ಪ್ರಯತ್ನಿಸುತ್ತಿದ್ದಾರೆ ಎಂದು ಕೆಪಿಸಿಸಿ ಕಾರ್ಯಾಧ್ಯಕ್ಷ ಈಶ್ವರ್ ಖಂಡ್ರೆ ಆರೋಪಿಸಿದ್ದಾರೆ.

ಗುರುವಾರ ನಗರದ ಕೆಪಿಸಿಸಿ ಕಚೇರಿಯಲ್ಲಿ ಸುದ್ದಿಗೋಷ್ಟಿಯಲ್ಲಿ ಮಾತನಾಡಿದ ಅವರು, ಕಳೆದ ಒಂದು ತಿಂಗಳಿನಿಂದ ಸಮ್ಮಿಶ್ರ ಸರಕಾರ ಪತನಗೊಳ್ಳಲಿದೆಯೆಂಬ ಸುಳ್ಳು ಸುದ್ದಿಯನ್ನು ಹಬ್ಬಿಸುತ್ತಾ ತಿರುಗಾಡುತ್ತಿದ್ದಾರೆ. ಆ ಮೂಲಕ ಜನಪರ ಸರಕಾರದ ಕಾರ್ಯಕ್ರಮಗಳಿಗೆ ಅಡ್ಡಿಪಡಿಸುತ್ತಿದ್ದಾರೆ ಎಂದು ತಿಳಿಸಿದರು.

ಕಾಂಗ್ರೆಸ್‌ನ ಒಬ್ಬ ಶಾಸಕನೂ ಬಿಜೆಪಿಗೆ ಹೋಗುವುದಿಲ್ಲ. ಆದರೂ ಬಿಜೆಪಿ ನಾಯಕರು ಆಮಿಷ ಒಡ್ಡುವುದು, ಬೆದರಿಕೆ ಹಾಕುವುದನ್ನು ನಿಲ್ಲಿಸುತ್ತಿಲ್ಲ. ಬಿಜೆಪಿಯ ಜನವಿರೋಧಿ ನಡವಳಿಕೆಗಳನ್ನು ಜನತೆ ಸೂಕ್ಷ್ಮವಾಗಿ ಗಮನಿಸುತ್ತಿದ್ದು, ಮುಂದಿನ ದಿನಗಳಲ್ಲಿ ಸೂಕ್ತ ಪಾಠ ಕಲಿಸಲಿದ್ದಾರೆ ಎಂದು ಅವರು ಎಚ್ಚರಿಕೆ ನೀಡಿದರು.

ಕಾಂಗ್ರೆಸ್‌ನ ಯಾವೊಬ್ಬ ಶಾಸಕನೂ ಮಹಾರಾಷ್ಟ್ರಕ್ಕೆ ಹೋಗಿಲ್ಲ. ಸರಕಾರಕ್ಕೆ ಕೆಟ್ಟ ಹೆಸರು ತರಲು ಇಂತಹ ವದಂತಿಗಳನ್ನು ಹಬ್ಬಿಸಲಾಗುತ್ತಿದೆ. ನಾನು ಕೆಲವು ಶಾಸಕರೊಂದಿಗೆ ಮಾತನಾಡಿದ್ದೇನೆ. ಎಲ್ಲ ಶಾಸಕರೂ ತಮ್ಮ ತಮ್ಮ ಕ್ಷೇತ್ರಗಳಲ್ಲಿ ಇದ್ದಾರೆ. ಕೆಲವರು ವೈಯಕ್ತಿಕ ಕೆಲಸಗಳಿಗೆ ಮತ್ತೆ ಕೆಲವರು ಕುಟುಂಬದೊಂದಿಗೆ ಬೇರೆ ಕಡೆ ಪ್ರವಾಸಕ್ಕೆ ಹೋಗಿದ್ದಾರೆ. ಆದರೆ ಯಾರು ಕೂಡ ಬಿಜೆಪಿಯೊಂದಿಗೆ ಹೋಗಿಲ್ಲ ಎಂದು ಅವರು ಸ್ಪಷ್ಟಪಡಿಸಿದರು.

ಸಚಿವ ಡಿ.ಕೆ.ಶಿವಕುಮಾರ್ ಮೇಲೆ ಆದಾಯ ತೆರಿಗೆ ಇಲಾಖೆ ಅಧಿಕಾರಿಗಳು ನಡೆಸಿದ ದಾಳಿಯ ಬಗ್ಗೆ ಬಿಜೆಪಿ ವಕ್ತಾರ ಸಂಬ್ರೀತ್ ಪಾತ್ರ ಸುದ್ದಿಗೋಷ್ಠಿ ನಡೆಸಿ ದಾಖಲೆಗಳನ್ನು ಪ್ರದರ್ಶಿಸಿದ್ದಾರೆ. ಸ್ವಾಯತ್ತ ಸಂಸ್ಥೆಗಳಾದ ಆದಾಯ ತೆರಿಗೆ ಮತ್ತು ಜಾರಿ ನಿರ್ದೇಶನಾಲಯದ ದಾಖಲೆಗಳು ಅವರ ಬಳಿ ಹೇಗೆ ಬಂದವು ಎಂಬುದನ್ನು ಅವರು ಸ್ಪಷ್ಟಪಡಿಸಬೇಕು. ಹಾಗೂ ಡಿ.ಕೆ.ಶಿವಕುಮಾರ್ ಮೇಲೆ ರಾಜಕೀಯ ಕಾರಣಗಳಿಗಾಗಿ ಐಟಿ ದಾಳಿ ನಡೆದಿದೆ. ಅವರು ಅದನ್ನು ಕಾನೂನಾತ್ಮಕವಾಗಿಯೇ ಎದುರಿಸಲಿದ್ದಾರೆ.

ಈಶ್ವರ್ ಖಂಡ್ರೆ, ಕಾರ್ಯಾಧ್ಯಕ್ಷ, ಕೆಪಿಸಿಸಿ

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News