ಸತತ ಪರಿಶ್ರಮದಿಂದ ಮಾತ್ರ ಸ್ಪರ್ಧಾತ್ಮಕ ಪರೀಕ್ಷೆಯಲ್ಲಿ ಯಶಸ್ಸು ಸಾಧ್ಯ: ಕೊಡಗು ಜಿಲ್ಲಾಧಿಕಾರಿ ಶ್ರೀವಿದ್ಯಾ

Update: 2018-09-20 18:54 GMT

ಮಡಿಕೇರಿ, ಸೆ.20 : ಸ್ಪರ್ಧಾತ್ಮಕ ಪರೀಕ್ಷೆಗಳಲ್ಲಿ ಯಶಸ್ಸುಗಳಿಸಲು ಹೆಚ್ಚಿನ ಅಧ್ಯಯನ ಮತ್ತು ಪರಿಶ್ರಮ ಮುಖ್ಯ ಎಂದು ಜಿಲ್ಲಾಧಿಕಾರಿ ಪಿ.ಐ.ಶ್ರೀವಿದ್ಯಾ ಅವರು ಕಿವಿಮಾತು ಹೇಳಿದ್ದಾರೆ.

ನಗರದ ಸರ್ಕಾರಿ ಪದವಿ ಪೂರ್ವ ಕಾಲೇಜಿನ ಸಭಾಂಗಣದಲ್ಲಿ ಉದ್ಯೋಗ ಮತ್ತು ತರಬೇತಿ ಇಲಾಖೆ ವತಿಯಿಂದ ಜಿಲ್ಲಾ ಉದ್ಯೋಗ ವಿನಿಮಯ ಕಚೇರಿ ಹಾಗೂ ಸ್ಪರ್ಧಾತ್ಮಕ ಪರೀಕ್ಷಾ ತರಬೇತಿ ಕೇಂದ್ರದ ವತಿಯಿಂದ ಗುರುವಾರ ನಡೆದ ಬ್ಯಾಂಕಿಂಗ್ ಪರೀಕ್ಷಾ ತರಬೇತಿ ಕಾರ್ಯಕ್ರಮಕ್ಕೆ ಚಾಲನೆ ನೀಡಿ ಅವರು ಮಾತನಾಡಿದರು. ಸ್ಪರ್ಧಾತ್ಮಕ ಪರೀಕ್ಷೆಯಲ್ಲಿ ಯಶಸ್ಸುಗಳಿಸುವ ನಿಟ್ಟಿನಲ್ಲಿ ಸತತ ಪ್ರಯತ್ನ ಇರಬೇಕು. ಪಠ್ಯದ ಜೊತೆಗೆ, ಪ್ರಶ್ನೆ ಪತ್ರಿಕೆಗಳ ಅಧ್ಯಯನ ಮಾಡುವಂತಾಗಬೇಕು ಎಂದು ಜಿಲ್ಲಾಧಿಕಾರಿ ಅವರು ಹೇಳಿದರು.   

ಯಾವುದೇ ನಾಗರಿಕ ಪರೀಕ್ಷೆ ತೆಗೆದುಕೊಂಡಲ್ಲಿ, ಹಲವು ಸ್ಪರ್ಧಾತ್ಮಕ ಪರೀಕ್ಷೆ ಎದುರಿಸಲು ಸಹಕಾರಿಯಾಗಲಿದೆ. ಇದರಿಂದ ಒಂದಲ್ಲ ಒಂದು ಉದ್ಯೋಗ ಗಿಟ್ಟಿಸಲು ಅನುಕೂಲವಾಗಲಿದೆ ಎಂದು ಅವರು ಅಭಿಪ್ರಾಯ ವ್ಯಕ್ತಪಡಿಸಿದರು.    

ಸ್ಪರ್ಧಾತ್ಮಕ ಪರೀಕ್ಷೆ ಸಂಬಂಧ ತರಬೇತಿ ಮತ್ತು ಮಾರ್ಗದರ್ಶನ ಪಡೆಯುವುದರಿಂದ ಪರೀಕ್ಷೆಯನ್ನು ಎದುರಿಸಲು ಸಹಕಾರಿಯಾಗಲಿದೆ ಎಂದು ಅವರು ತಿಳಿಸಿದರು. 

ಜಿ.ಪಂ.ಸಿಇಓ ಪ್ರಶಾಂತ್ ಕುಮಾರ್ ಮಿಶ್ರ ಅವರು ಮಾತನಾಡಿ ಬ್ಯಾಂಕಿಂಗ್ ಪರೀಕ್ಷೆಯು ಸಂಪೂರ್ಣ ಕಂಪ್ಯೂಟರೀಕರಣದಲ್ಲಿ ಇರುತ್ತದೆ. ಆನ್‍ಲೈನ್ ಮೂಲಕ ಪರೀಕ್ಷೆ ಎದುರಿಸಬೇಕಾಗುತ್ತದೆ ಎಂದು ಅವರು ಹೇಳಿದರು. ದಿನದ ಮೂರು ನಾಲ್ಕು ಗಂಟೆಯಾದರೂ ನಿರಂತರ ಅಧ್ಯಯನ ಮಾಡಬೇಕು. ಸಮಯ ಪ್ರಜ್ಞೆ ಇದ್ದಲ್ಲಿ ಸ್ಪರ್ಧಾತ್ಮಕ ಪರೀಕ್ಷೆಯನ್ನು ಎದುರಿಸಲು ಅನುಕೂಲವಾಗುತ್ತದೆ ಎಂದು ಅವರು ತಿಳಿಸಿದರು. 

ವಾಣಿಜ್ಯ ತೆರಿಗೆ ಇಲಾಖೆಯ ಸಹಾಯಕ ಆಯುಕ್ತರಾದ ರಮೇಶ್ ನರಸಯ್ಯ ಅವರು ಮಾತನಾಡಿ ಬ್ಯಾಂಕಿಂಗ್ ಪರೀಕ್ಷೆಯಲ್ಲಿ ಪ್ರಾಥಮಿಕ, ಮುಖ್ಯ ಪರೀಕ್ಷೆ ನಂತರ ಸಂದರ್ಶನ ನಡೆಯಲಿದ್ದು, ಇವುಗಳಿಗೆ ಅಗತ್ಯ ಪೂರ್ವ ಸಿದ್ಧತೆಗಳನ್ನು ಮಾಡಿಕೊಳ್ಳಬೇಕು ಎಂದು ಅವರು ಹೇಳಿದರು. 

ವಿವಿಧ ರಾಷ್ಟ್ರೀಕೃತ ಬ್ಯಾಂಕ್‍ಗಳಲ್ಲಿ ಖಾಲಿ ಇರುವ 3,562 ಹುದ್ದೆಗಳಿಗೆ ಅರ್ಜಿ ಆಹ್ವಾನಿಸಲಾಗಿದ್ದು, 20 ಲಕ್ಷ ಮಂದಿ ಅರ್ಜಿ ಸಲ್ಲಿಸಿದ್ದಾರೆ. ಆದ್ದರಿಂದ ಪರೀಕ್ಷೆಯನ್ನು ಗಂಭೀರವಾಗಿ ಪರಿಗಣಿಸಬೇಕು ಎಂದರು.  

ಜಿಲ್ಲಾ ಉದ್ಯೋಗ ವಿನಿಮಯ ಅಧಿಕಾರಿ ಸಿ.ಜಗನ್ನಾಥ್ ಅವರು ಮಾತನಾಡಿ ಉದ್ಯೋಗ ಮತ್ತು ತರಬೇತಿ ಇಲಾಖೆ ವತಿಯಿಂದ ಪರೀಕ್ಷಾ ಪೂರ್ವ ತರಬೇತಿ ಮತ್ತು ನೇಮಕಾತಿ ಪರೀಕ್ಷೆಗಳಿಗೆ ಉಚಿತ ತರಬೇತಿ ನೀಡಲಾಗುತ್ತಿದೆ. ಈ ಅವಕಾಶವನ್ನು ಬಳಸಿಕೊಳ್ಳುವಂತಾಗಬೇಕು ಎಂದು ಅವರು ಹೇಳಿದರು.  

ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ಪ್ರಾಂಶುಪಾಲರಾದ ವೈ.ಚಿತ್ರಾ, ಮಹಾಂತೇಶ್, ಸರ್ಕಾರಿ ಪ್ರೌಢಶಾಲೆಯ ಮುಖ್ಯೋಪಾಧ್ಯಾಯರಾದ ಗುರುರಾಜ್, ಹಾಕತ್ತೂರು ಪ್ರೌಢಶಾಲೆಯ ಮುಖ್ಯೋಪಾಧ್ಯಾಯರಾದ ರಾಮಚಂದ್ರ ಇತರರು ಹಾಜರಿದ್ದರು. 

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News