ಸಿದ್ದರಾಮಯ್ಯ ನಿವಾಸಕ್ಕೆ ಮುಖ್ಯಮಂತ್ರಿ ಎಚ್‌ಡಿಕೆ ಭೇಟಿ

Update: 2018-09-21 13:55 GMT

ಬೆಂಗಳೂರು, ಸೆ.21: ಅನಿರೀಕ್ಷಿತ ಬೆಳವಣಿಗೆಯೊಂದರಲ್ಲಿ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ, ಶುಕ್ರವಾರ ಬೆಳಗ್ಗೆ ಮಾಜಿ ಮುಖ್ಯಮಂತ್ರಿ ಹಾಗೂ ಸಮನ್ವಯ ಸಮಿತಿ ಅಧ್ಯಕ್ಷ ಸಿದ್ದರಾಮಯ್ಯನವರ ಸರಕಾರಿ ನಿವಾಸ ಕಾವೇರಿಗೆ ದಿಢೀರ್ ಭೇಟಿ ನೀಡಿದ್ದು ಕುತೂಹಲಕ್ಕೆ ಕಾರಣವಾಗಿತ್ತು.

ಇದೇ ಮೊದಲ ಬಾರಿಗೆ ಕುಮಾರಸ್ವಾಮಿ, ಸಿದ್ದರಾಮಯ್ಯ ನಿವಾಸಕ್ಕೆ ಭೇಟಿ ನೀಡಿದ್ದು, ಈ ವೇಳೆ ಹಲವಾರು ಮಹತ್ವದ ವಿಷಯಗಳ ಕುರಿತು ಚರ್ಚೆ ನಡೆಸಲಾಗಿದೆ. ಸುಮಾರು ಒಂದು ಗಂಟೆಗೂ ಹೆಚ್ಚು ಕಾಲ ನಡೆದ ಈ ಚರ್ಚೆಯಲ್ಲಿ ಉಪ ಮುಖ್ಯಮಂತ್ರಿ ಡಾ.ಜಿ.ಪರಮೇಶ್ವರ್, ಕೆಪಿಸಿಸಿ ಕಾರ್ಯಾಧ್ಯಕ್ಷ ದಿನೇಶ್‌ ಗುಂಡೂರಾವ್, ಕಾರ್ಯಾಧ್ಯಕ್ಷ ಈಶ್ವರ್‌ಖಂಡ್ರೆ, ಜಲಸಂಪನ್ಮೂಲ ಸಚಿವ ಡಿ.ಕೆ.ಶಿವಕುಮಾರ್ ಪಾಲ್ಗೊಂಡಿದ್ದರು.

ಆಪರೇಷನ್ ಕಮಲ, ಬಿಜೆಪಿ ವಿರುದ್ಧ ದಂಗೆ ಏಳುವಂತೆ ಕರೆ ನೀಡಿವುದಾಗಿ ಮುಖ್ಯಮಂತ್ರಿ ನೀಡಿದ ಹೇಳಿಕೆ, ರಾಜ್ಯ ಸರಕಾರವನ್ನು ಅಸ್ಥಿರಗೊಳಿಸಲು ಪ್ರತಿಪಕ್ಷ ಬಿಜೆಪಿ ನಡೆಸುತ್ತಿರುವ ತಂತ್ರಗಳಿಗೆ ಪ್ರತಿತಂತ್ರ ರೂಪಿಸಿ ಸರಕಾರವನ್ನು ಉಳಿಸಿಕೊಳ್ಳಲು ಅನುಸರಿಸಬೇಕಾದ ಕ್ರಮಗಳ ಕುರಿತು ಈ ಭೇಟಿ ವೇಳೆ ಚರ್ಚಿಸಲಾಗಿದೆ ಎಂದು ತಿಳಿದು ಬಂದಿದೆ.

ಬಿಜೆಪಿಯವರು ಆಪರೇಷನ್ ಕಮಲಕ್ಕೆ ಮುಂದಾದರೆ, ನಾವು ಕೂಡ ಆಪರೇಷನ್ ಕಾಂಗ್ರೆಸ್, ಜೆಡಿಎಸ್ ಮಾಡಲು ಸಿದ್ಧತೆ ಮಾಡಿಕೊಳ್ಳಬೇಕು. ಸರಕಾರವನ್ನು ಅಸ್ಥಿರಗೊಳಿಸಲು ಯಾವುದೇ ಕಾರಣಕ್ಕೂ ಅವಕಾಶ ನೀಡಬಾರದು. ಎಲ್ಲ ಮುಖಂಡರು ಎಚ್ಚರಿಕೆ ನಡೆಯನ್ನು ಅನುಸರಿಸಬೇಕು ಎಂದು ಸಿದ್ದರಾಮಯ್ಯ ಸಲಹೆ ನೀಡಿದ್ದಾರೆ ಎನ್ನಲಾಗಿದೆ.

ಮುಖ್ಯಮಂತ್ರಿ ಕುಮಾರಸ್ವಾಮಿ ನಿನ್ನೆ ಹಾಸನದಲ್ಲಿ ನೀಡಿದ ‘ದಂಗೆ’ ಹೇಳಿಕೆ ಕುರಿತು ಸಭೆಯಲ್ಲಿ ಚರ್ಚಿಸಲಾಗಿದೆ. ಈ ಹೇಳಿಕೆಯನ್ನು ಬಳಸಿಕೊಂಡು ಬಿಜೆಪಿಯವರು ಮಾಡುತ್ತಿರುವ ಪ್ರತಿಭಟನೆ, ರಾಜ್ಯಪಾಲರ ಭೇಟಿ ಎಲ್ಲ ವಿಚಾರಗಳ ಬಗ್ಗೆಯೂ ಸಭೆಯಲ್ಲಿ ಚರ್ಚಿಸಲಾಗಿದೆ ಎಂದು ಹೇಳಲಾಗಿದೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News