ಸೆ.22: ಹಾಸನದಲ್ಲಿ ಜೆಡಿಎಸ್ ಶಾಸಕಾಂಗ ಪಕ್ಷದ ಸಭೆ

Update: 2018-09-21 16:22 GMT

ಬೆಂಗಳೂರು, ಸೆ. 21: ರಾಜ್ಯದಲ್ಲಿನ ಪ್ರಸಕ್ತ ರಾಜಕೀಯ ಬೆಳವಣಿಗೆಗಳ ಬಗ್ಗೆ ಸಮಾಲೋಚನೆ ನಡೆಸಲು ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿಯವರು ನಾಳೆ(ಸೆ.22) ಸಂಜೆ ಹಾಸನದಲ್ಲಿ ಪಕ್ಷದ ಶಾಸಕಾಂಗ ಪಕ್ಷದ ಸಭೆ ಕರೆದಿದ್ದಾರೆ.

ಆಪರೇಷನ್ ಕಮಲದ ಭೀತಿ ಹಿನ್ನೆಲೆಯಲ್ಲಿ ಶಾಸಕರನ್ನು ಹಿಡಿದಿಟ್ಟುಕೊಳ್ಳಲು ಶಾಸಕಾಂಗ ಪಕ್ಷದ ಸಭೆ ಕರೆಯಲಾಗಿದೆ. ಈ ಸಭೆಗೆ ವಿಧಾನಸಭೆ ಮತ್ತು ವಿಧಾನ ಪರಿಷತ್ ಸದಸ್ಯರನ್ನು ಆಹ್ವಾನಿಸಲಾಗಿದೆ. ಹಾಸನದ ಹೊಯ್ಸಳ ಹೊಟೇಲ್‌ನಲ್ಲಿ ಸಭೆ ನಡೆಯಲಿದೆ ಎಂದು ಗೊತ್ತಾಗಿದೆ.

ವಿಧಾನ ಪರಿಷತ್ ಚುನಾವಣೆ ಹಿನ್ನೆಲೆಯಲ್ಲಿ ಅಭ್ಯರ್ಥಿ ಆಯ್ಕೆ ಮಾಡುವ ಸಂಬಂಧ ಚರ್ಚಿಸಲಿದ್ದಾರೆ. ಅಲ್ಲದೆ, ಈ ಹಿಂದೆ ಸಿದ್ದರಾಮಯ್ಯ ಸರಕಾರದ ಅವಧಿಯಲ್ಲಿ ಪಕ್ಷದ 7ಶಾಸಕರು ರಾಜ್ಯಸಭೆ ಮತ್ತು ಪರಿಷತ್ ಚುನಾವಣೆಯಲ್ಲಿ ಪಕ್ಷದ ವಿಪ್ ಉಲ್ಲಂಘಿಸಿ ಅಡ್ಡ ಮತದಾನ ಮಾಡಿದ್ದರು.

ಈ ಬಾರಿ ಯಾವುದೇ ಶಾಸಕರು ಅಂತಹ ಸಾಹಸಕ್ಕೆ ಕೈಹಾಕದೇ ಇರಲು ಪಕ್ಷದ ಶಾಸಕರಿಗೆ ಕಟ್ಟುನಿಟ್ಟಿನ ಸೂಚನೆ ನೀಡಲು ಸಭೆ ಕರೆಯಲಾಗಿದೆ. ಸಿಎಂ ಶನಿವಾರ ಮತ್ತು ರವಿವಾರ, ಹಾಸನ ಹಾಗೂ ಚಿಕ್ಕಮಗಳೂರು ಜಿಲ್ಲೆಗಳಲ್ಲಿ ಪ್ರವಾಸ ಕೈಗೊಳ್ಳಲಿದ್ದಾರೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News