ಪಕ್ಷದ ಶಿಸ್ತು ಉಲ್ಲಂಘಿಸಿದರೆ ಸಹಿಸುವುದಿಲ್ಲ: ಉಸ್ತುವಾರಿ ವೇಣುಗೋಪಾಲ್ ಎಚ್ಚರಿಕೆ
ಬೆಂಗಳೂರು, ಸೆ. 23: ‘ಪಕ್ಷದ ಶಿಸ್ತು ಉಲ್ಲಂಘಿಸಿದರೆ ಯಾವುದೇ ಕಾರಣಕ್ಕೂ ಸಹಿಸಲು ಸಾಧ್ಯವಿಲ್ಲ. ಬ್ಲಾಕ್‌ಮೇಲ್ ತಂತ್ರಗಳನ್ನು ಯಾವುದೇ ಕಾರಣಕ್ಕೂ ಒಪ್ಪಲು ಆಗುವುದಿಲ್ಲ’ ಎಂದು ರಾಜ್ಯ ಕಾಂಗ್ರೆಸ್ ಉಸ್ತುವಾರಿ ಕೆ.ಸಿ.ವೆಣುಗೋಪಾಲ್ ಇಂದಿಲ್ಲಿ ಭಿನ್ನರಿಗೆ ಕಟ್ಟುನಿಟ್ಟಿನ ಎಚ್ಚರಿಕೆ ನೀಡಿದ್ದಾರೆ.
ರವಿವಾರ ಇಲ್ಲಿನ ಕೆಪಿಸಿಸಿ ಕಚೇರಿಯಲ್ಲಿ ಮಹಿಳಾ ಘಟಕದ ಲಾಂಚನ ಬಿಡುಗಡೆ ಮಾಡಿ ಮಾತನಾಡಿದ ಅವರು, ಪಕ್ಷದಲ್ಲಿ ಇದ್ದುಕೊಂಡೇ ಭಿನ್ನಮತ ಚಟುವಟಿಕೆಗಳನ್ನು ಮಾಡಿದರೆ ಸಹಿಸುವುದಿಲ್ಲ. ಒತ್ತಡ ತಂತ್ರಕ್ಕೆ ಮುಂದಾದರೆ ಕ್ರಮ ಕೈಗೊಳ್ಳಬೇಕಾಗುತ್ತದೆ ಎಂದು ಗುಡುಗಿದರು.
ರಾಜ್ಯದಲ್ಲಿನ ಮೈತ್ರಿ ಸರಕಾರ ಅಸ್ಥಿರಗೊಳಿಸಲು ಬಿಜೆಪಿಯವರು ಕೆಟ್ಟ ರಾಜಕೀಯ ಮಾಡುತ್ತಿದ್ದು, ಕಾಂಗ್ರೆಸ್ ಪಕ್ಷದ ಶಾಸಕರಿಗೆ ಮಾಜಿ ಸಿಎಂ ಹಾಗೂ ಬಿಜೆಪಿ ರಾಜ್ಯಾಧ್ಯಕ್ಷ ಯಡಿಯೂರಪ್ಪನವರೇ ಹಣದ ಆಮಿಷವೊಡ್ಡಿದ್ದಾರೆ. ಈ ರೀತಿಯ ರಾಜಕೀಯ ಸರಿಯಲ್ಲ ಎಂದು ವೇಣುಗೋಪಾಲ್ ಇದೇ ವೇಳೆ ಆಕ್ಷೇಪಿಸಿದರು.
ಕರ್ನಾಟಕ ರಾಜ್ಯದಲ್ಲಿ ಇಂತಹ ಬೆಳವಣಿಗೆಗಳು ನಡೆಯಲು ಸಾಧ್ಯವಿಲ್ಲ. ಇಲ್ಲಿನ ಜನರು ಇಂಥದ್ದಕ್ಕೆಲ್ಲಾ ಯಾವುದೇ ಕಾರಣಕ್ಕೂ ಅವಕಾಶ ನೀಡುವುದಿಲ್ಲ ಎಂದು ವಿಶ್ವಾಸ ವ್ಯಕ್ತಪಡಿಸಿದ ವೇಣುಗೋಪಾಲ್, ಕಾಂಗ್ರೆಸ್ ಪಕ್ಷದ ಯಾವೊಬ್ಬ ಶಾಸಕರೂ ಪಕ್ಷ ಬಿಡುವುದಿಲ್ಲ ಎಂದು ಸ್ಪಷ್ಟಣೆ ನೀಡಿದರು.
ಕಾರ್ಯಕ್ರಮದಲ್ಲಿ ಕೆಪಿಸಿಸಿ ಅಧ್ಯಕ್ಷ ದಿನೇಶ್ ಗುಂಡೂರಾವ್, ಕಾರ್ಯಾಧ್ಯಕ್ಷ ಈಶ್ವರ್ ಖಂಡ್ರೆ, ಕೆಪಿಸಿಸಿ ಮಹಿಳಾ ಘಟಕದ ಅಧ್ಯಕ್ಷೆ ಹಾಗೂ ಶಾಸಕಿ ಲಕ್ಷ್ಮೀ ಹೆಬ್ಬಾಳ್ಕರ್, ಮಾಜಿ ಸಚಿವೆ ಮೋಟಮ್ಮ ಸೇರಿದಂತೆ ಕಾಂಗ್ರೆಸ್ ಮುಖಂಡರು ಹಾಗೂ ಪದಾಧಿಕಾರಿಗಳು ಹಾಜರಿದ್ದರು.