ಪರಿಷತ್ ಉಪಚುನಾವಣೆ: ನಸೀರ್ ಅಹ್ಮದ್, ಎಂ.ಸಿ.ವೇಣುಗೋಪಾಲ್ ಕಾಂಗ್ರೆಸ್ ಅಭ್ಯರ್ಥಿಗಳಾಗಿ ಸ್ಪರ್ಧೆ

Update: 2018-09-23 15:43 GMT
ನಸೀರ್ ಅಹ್ಮದ್, ಎಂ.ಸಿ.ವೇಣುಗೋಪಾಲ್

ಬೆಂಗಳೂರು, ಸೆ. 23: ವಿಧಾನಸಭೆಯಿಂದ ವಿಧಾನ ಪರಿಷತ್ತಿನ ಮೂರು ಸ್ಥಾನಗಳಿಗೆ ಅ.4ರಂದು ನಡೆಯಲಿರುವ ಉಪ ಚುನಾವಣೆಗೆ ಕಾಂಗ್ರೆಸ್ ಅಭ್ಯರ್ಥಿಗಳಾಗಿ ಹಿರಿಯ ಮುಖಂಡರಾದ ನಸೀರ್ ಅಹ್ಮದ್ ಹಾಗೂ ಎಂ.ಸಿ.ವೇಣುಗೋಪಾಲ್ ಅವರನ್ನು ಹೆಸರನ್ನು ಅಂತಿಮಗೊಳಿಸಲಾಗಿದೆ.

ನಾಮಪತ್ರ ಸಲ್ಲಿಸಲು ನಾಳೆ(ಸೆ.24) ಕೊನೆಯ ದಿನವಾಗಿದ್ದು, ಕಾಂಗ್ರೆಸ್ ಉಸ್ತುವಾರಿ ಕೆ.ಸಿ.ವೇಣುಗೋಪಾಲ್ ನೇತೃತ್ವದಲ್ಲಿ ನಡೆದ ಮುಖಂಡರ ಸಭೆಯಲ್ಲಿ ನಸೀರ್ ಅಹ್ಮದ್ ಹಾಗೂ ಎಂ.ಸಿ.ವೇಣುಗೋಪಾಲ್ ಅವರುಗಳ ಹೆಸರನ್ನು ಅಂತಿಮಗೊಳಿಸಿದ್ದಾರೆ.

ಕೆಪಿಸಿಸಿ ಅಧ್ಯಕ್ಷ ದಿನೇಶ್ ಗುಂಡೂರಾವ್, ಉಪ ಮುಖ್ಯಮಂತ್ರಿ ಡಾ.ಜಿ. ಪರಮೇಶ್ವರ್ ಹಾಗೂ ಸಮನ್ವಯ ಸಮಿತಿ ಅಧ್ಯಕ್ಷ ಹಾಗೂ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಸೇರಿದಂತೆ ಇನ್ನಿತರ ಮುಖಂಡರ ಉಪಸ್ಥಿತಿಯಲ್ಲಿ ನಾಳೆ ನಾಮಪತ್ರ ಸಲ್ಲಿಸಲಿದ್ದಾರೆಂದು ಗೊತ್ತಾಗಿದೆ.

ರಾಜ್ಯದಲ್ಲಿ ಕಾಂಗ್ರೆಸ್-ಜೆಡಿಎಸ್ ಮೈತ್ರಿ ಸರಕಾರವಿದ್ದು, ವಿಧಾನ ಪರಿಷತ್ ಚುನಾವಣೆಯಲ್ಲಿ ಮೈತ್ರಿ ಮುಂದುವರಿಯಲಿದೆ ಎಂದು ಮುಖಂಡರು ಈಗಾಗಲೇ ಘೋಷಿಸಿದ್ದು, 3 ಸ್ಥಾನಗಳ ಪೈಕಿ ಕಾಂಗ್ರೆಸ್‌ನಿಂದ ಇಬ್ಬರು ಹಾಗೂ ಜೆಡಿಎಸ್‌ನಿಂದ ಒಬ್ಬರು ಸ್ಪರ್ಧಿಸಲಿದ್ದಾರೆಂದು ಹೇಳಲಾಗಿದೆ.

ಸೆ.25ಕ್ಕೆ ನಾಮಪತ್ರ ಪರಿಶೀಲನೆ ನಡೆಸಲಿದ್ದು, ಸೆ.27ಕ್ಕೆ ಉಮೇದುವಾರಿಕೆ ಹಿಂಪಡೆಯಲು ಕೊನೆಯ ದಿನ. ಅಕ್ಟೋಬರ್ 4ರ ಬೆಳಗ್ಗೆ 9ರಿಂದ ಸಂಜೆ 4ರ ವರೆಗೆ ಮತದಾನ ನಡೆಯಲಿದ್ದು, ಅದೇ ದಿನ ಸಂಜೆ 5ಗಂಟೆಗೆ ಫಲಿತಾಂಶ ಪ್ರಕಟಗೊಳ್ಳುವ ಸಾಧ್ಯತೆಗಳಿವೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News