ಬಿಜೆಪಿ ಜನರ ದಿಕ್ಕು ತಪ್ಪಿಸುತ್ತಿದೆ: ಎಐಸಿಸಿ ಕಾರ್ಯದರ್ಶಿ ಸೂರಜ್ ಹೆಗಡೆ ಆರೋಪ

Update: 2018-09-23 15:04 GMT

ಬೆಂಗಳೂರು, ಸೆ.23: ಹಿಂದಿನ ಯುಪಿಎ ಸರಕಾರದ ಯೋಜನೆಗಳ ಹೆಸರು ಬದಲಿಸಿ ಇಂದಿನ ಕೇಂದ್ರ ಸರಕಾರ ತಮ್ಮ ಯೋಜನೆಗಳು ಎಂದು ಬಿಂಬಿಸಿ ಜನರನ್ನು ದಿಕ್ಕು ತಪ್ಪಿಸುತ್ತಿದೆ ಎಂದು ಎಐಸಿಸಿ ಕಾರ್ಯದರ್ಶಿ ಹಾಗೂ ಕಾಂಗ್ರೆಸ್ ಶಕ್ತಿ ಸದಸ್ಯತ್ವದ ರಾಜ್ಯ ಸಂಚಾಲಕ ಸೂರಜ್ ಹೆಗಡೆ ಆರೋಪಿಸಿದ್ದಾರೆ.

ರವಿವಾರ ರಾಜರಾಜೇಶ್ವರಿ ನಗರ ವಿಧಾನಸಭಾ ಕ್ಷೇತ್ರದ ವ್ಯಾಪ್ತಿಯಲ್ಲಿ ಕಾಂಗ್ರೆಸ್ ಸಮಿತಿ ವತಿಯಿಂದ ಆಯೋಜಿಸಿದ್ದ ಶಕ್ತಿ ಸದಸ್ಯತ್ವ ನೋಂದಣಿ ಅಭಿಯಾನಕ್ಕೆ ಚಾಲನೆ ನೀಡಿ ಮಾತನಾಡಿದ ಅವರು, ಹಿಂದೆ ಕೇಂದ್ರದಲ್ಲಿ ಅಧಿಕಾರದಲ್ಲಿದ್ದ ಯುಪಿಎ ಸರಕಾರ ಹಲವಾರು ಜನಪರ ಯೋಜನೆಗಳನ್ನು ಜಾರಿ ಮಾಡಲಾಗಿತ್ತು. 2014 ರಲ್ಲಿ ಅಧಿಕಾರಕ್ಕೆ ಬಂದ ಬಿಜೆಪಿ ಸರಕಾರ, ಹೆಸರು ಬದಲಿಗೆ ನಮ್ಮ ಯೋಜನೆಗಳು ಎಂದು ಬಿಂಬಿಸುತ್ತಿವೆ. ಇದರ ವಿರುದ್ಧ ಜನಜಾಗೃತಿ ಮೂಡಿಸಬೇಕಾದ ಅಗತ್ಯವಿದೆ ಎಂದರು.

ಕಾಂಗ್ರೆಸ್ ನೇತೃತ್ವದ ಯುಪಿಎ ಸರಕಾರ ಹಲವಾರು ಯೋಜನೆಗಳನ್ನು ಅನುಷ್ಠಾನ ಮಾಡಿದ್ದರೂ, 2014 ರಲ್ಲಿ ನಡೆದ ಲೋಕಸಭಾ ಚುನಾವಣೆ ಸಂದರ್ಭದಲ್ಲಿ ಸರಿಯಾದ ಪ್ರಚಾರ ಹಾಗೂ ಜಾಗೃತಿ ಮೂಡಿಸಲು ಸಾಧ್ಯವಾಗದ ಹಿನ್ನೆಲೆಯಲ್ಲಿ ಮತದಾರರ ಮನಸ್ಸು ಗೆಲ್ಲಲು ಸಾಧ್ಯವಾಗಿಲ್ಲ. ಹೀಗಾಗಿ, 2019 ರಲ್ಲಿ ನಡೆಯಲಿರುವ ಲೋಕಸಭಾ ಚುನಾವಣೆ ವೇಳೆಗೆ ಪಕ್ಷವನ್ನು ಸದೃಡಗೊಳಿಸಲು ಪ್ರತಿಯೊಬ್ಬ ಕಾರ್ಯಕರ್ತರೂ ಕೆಲಸ ಮಾಡಬೇಕು ಎಂದು ಕರೆ ನೀಡಿದರು.

ಪಕ್ಷದ ಕಾರ್ಯಕರ್ತರು ಮನೆ ಮನೆಗೆ ತೆರಳಿ ಸರಕಾರದ ಯೋಜನೆಗಳನ್ನು ಜನರಿಗೆ ಮನದಟ್ಟು ಮಾಡಿಕೊಡಬೇಕು. ಜತೆಗೆ, ಆಧುನಿಕ ತಂತ್ರಜ್ಞಾನವನ್ನು ಬಳಸಿಕೊಂಡು ಪೇಸ್‌ಬುಕ್, ವಾಟ್ಸಾಪ್, ಟ್ವಿಟರ್ ಸೇರಿದಂತೆ ಸಾಮಾಜಿಕ ಜಾಲತಾಣಗಳನ್ನು ಬಳಸಿಕೊಂಡು ಹೆಚ್ಚು ಪ್ರಚಾರ ಮಾಡಬೇಕು ಎಂದು ಸಲಹೆ ನೀಡಿದರು.

ಬೆಂಗಳೂರು ಉತ್ತರ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಎಂ.ರಾಜಕುಮಾರ್ ಮಾತನಾಡಿ, ಶಕ್ತಿ ಸದಸ್ಯತ್ವ ಹೊಂದಿರುವವರು ನೇರವಾಗಿ ಕೇಂದ್ರದ ನಾಯಕರ ಜೊತೆ ಸಂವಾದ ನಡೆಸಬಹುದಾಗಿದೆ. ತಮ್ಮ ಅನಿಸಿಕೆಗಳನ್ನು ನೇರವಾಗಿ ಹಂಚಿಕೊಳ್ಳಬಹುದು ಎಂದು ಹೇಳಿದರು.

ಕಾರ್ಯಕ್ರಮದಲ್ಲಿ ಬಿಬಿಎಂಪಿ ಸದಸ್ಯ ಜಿ.ಮೋಹನ್, ವೇಲುನಾಯ್ಕರ್, ಶ್ರೀನಿವಾಸಮೂರ್ತಿ, ಅಭಿಯಾನ ರಾಜ್ಯ ಉಪಸಂಚಾಲಕ ವಿಜಯ್ ಮತ್ತಿಕಟ್ಟೆ ಸೇರಿದಂತೆ ಹಲವರು ಉಪಸ್ಥಿತರಿದ್ದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News