ಉಡುಪಿ ಮಹಿಳಾ ಮಕ್ಕಳ ಆಸ್ಪತ್ರೆಯ ಸಿಬ್ಬಂದಿಗಳನ್ನು ಜಿಲ್ಲಾಸ್ಪತ್ರೆಗೆ ನಿಯೋಜಿಸಲು ಒತ್ತಾಯ

Update: 2018-09-24 18:21 GMT

ಉಡುಪಿ, ಸೆ.24: ಈಗಾಗಲೇ ಮುಚ್ಚುಗಡೆಗೆ ಆದೇಶಿಸಲಾದ ಉಡುಪಿ ಸರಕಾರಿ ಮಹಿಳಾ ಮತ್ತು ಮಕ್ಕಳ ಆಸ್ಪತ್ರೆಯ ಸಿಬ್ಬಂದಿಗಳನ್ನು ಬೇರೆ ಜಿಲ್ಲೆಗಳಿಗೆ ವರ್ಗಾಯಿಸದೆ ಸಿಬ್ಬಂದಿಗಳ ಕೊರತೆ ಎದುರಿಸುತ್ತಿರುವ ಅಜ್ಜರಕಾಡು ಜಿಲ್ಲಾ ಆಸ್ಪತ್ರೆಯಲ್ಲಿ ವಿಲೀನಗೊಳಿಸಲು ಸೂಕ್ತ ಕ್ರಮಕೈಗೊಳ್ಳಬೇಕು ಎಂದು ಸಾಮಾಜಿಕ ಕಾರ್ಯಕರ್ತವಿಶು ಶೆಟ್ಟಿ ಅಂಬಲಪಾಡಿ ಆಗ್ರಹಿಸಿದ್ದಾರೆ.

ಉಡುಪಿಯಲ್ಲಿಂದು ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಮಹಿಳಾ ಮತ್ತು ಮಕ್ಕಳ ಆಸ್ಪತ್ರೆಯನ್ನು ಆಯುಕ್ತರು ತಕ್ಷಣದಿಂದ ಮುಚ್ಚುವಂತೆ ಆದೇಶ ನೀಡಿದ್ದು, ಕೇವಲ ಇಬ್ಬರು ಮಕ್ಕಳ ತಜ್ಞರು ಮತ್ತು ಇಬ್ಬರು ಪ್ರಸೂತಿ ತಜ್ಞರನ್ನು ಎರಡು ತಿಂಗಳ ಕಾಲ ಹೊಸ ಕೂಸಮ್ಮ ಶಂಭು ಶೆಟ್ಟಿ ಆಸ್ಪತ್ರೆಗೆ ನಿಯೋಜಿಸಲಾಗಿದೆ. ಆದರೆ ಉಳಿದ ಸಿಬ್ಬಂದಿಗಳಿಗೆ ಸರಕಾರ ಹಾಗೂ ಖಾಸಗಿ ಸಹಭಾಗಿತ್ವದಲ್ಲಿ ಸರಕಾರಿ ಜಾಗದಲ್ಲಿ ನಿರ್ಮಿಸಿರುವ ಆಸ್ಪತ್ರೆಯಲ್ಲಿ ಕೆಲಸ ಮಾಡಲು ಅವಕಾಶ ಇಲ್ಲದಿರುವುದು ಯಾವ ನೀತಿ ಎಂದು ಪ್ರಶ್ನಿಸಿದರು.

ಅಜ್ಜರಕಾಡು ಜಿಲ್ಲಾಸ್ಪತ್ರೆಯಲ್ಲಿ ಶುಶ್ರೂಷಕರ ಮತ್ತು ಅರೆವೈದ್ಯಕೀಯ ಸಿಬ್ಬಂದಿಗಳ ಕೊರತೆ ಇದ್ದು, ಈ ಹಿನ್ನೆಲೆಯಲ್ಲಿ ಮಹಿಳಾ ಮತ್ತು ಮಕ್ಕಳ ಆಸ್ಪತ್ರೆಯ ಸಿಬ್ಬಂದಿಗಳನ್ನು ಜಿಲ್ಲಾಸ್ಪತ್ರೆಗೆ ವರ್ಗಾಯಿಸಬೇಕು. ಅದು ಬಿಟ್ಟು ಅವರನ್ನು ಬೇರೆ ಜಿಲ್ಲೆಗಳಿಗೆ ವರ್ಗಾವಣೆ ಮಾಡುವುದು ಸರಿಯಲ್ಲ. ಆದುದರಿಂದ ಉಡುಪಿಯ ಸಿಬ್ಬಂದಿಗಳನ್ನು ಉಡುಪಿಯಲ್ಲೇ ಉಳಿಸಿಕೊಳ್ಳುವ ನಿಟ್ಟಿನಲ್ಲಿ ಸಂಬಂಧಪಟ್ಟವರು ಕ್ರಮ ತೆಗೆದುಕೊಳ್ಳಬೇಕು ಎಂದು ಅವರು ಒತ್ತಾಯಿಸಿದರು.
ಸುದ್ದಿಗೋಷ್ಠಿಯಲ್ಲಿ ಸಾಮಾಜಿಕ ಕಾರ್ಯಕರ್ತ ತಾರನಾಥ ಮೇಸ್ತ ಉಪಸ್ಥಿತರಿದ್ದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News