ಸೆ. 10: ಬಾಲವನದಲ್ಲಿ ಡಾ.ಶಿವರಾಮ ಕಾರಂತ ಜನ್ಮದಿನಾಚರಣೆ

Update: 2018-09-25 13:46 GMT

ಪುತ್ತೂರು,ಸೆ.25 : ಕಡಲ ತಡಿಯ ಭಾರ್ಗವ, ಜ್ಞಾನ ಪೀಠ ಪ್ರಶಸ್ತಿ ಪುರಸ್ಕೃತ ಸಾಹಿತಿ ಡಾ.ಶಿವರಾಮ ಕಾರಂತ ಅವರ 125ನೇ ಜನ್ಮ ದಿನಾಚರಣೆ ಕಾರ್ಯಕ್ರಮ ಕಾರಂತರ ಕರ್ಮಭೂಮಿಯಾದ ಪುತ್ತೂರಿನ ಪರ್ಲಡ್ಕದಲ್ಲಿರುವ ಬಾಲವನದಲ್ಲಿ ಅ. 10ರಂದು ನಡೆಯಲಿದ್ದು, ಕಾರ್ಯಕ್ರಮದಲ್ಲಿ ಯಕ್ಷಗಾನ ಕಲಾವಿದ ಸಂಜೀವ ಸುವರ್ಣ ಅವರಿಗೆ ಡಾ.ಶಿವರಾಮ ಕಾರಂತ ಪ್ರಶಸ್ತಿ ನೀಡಿ ಗೌರವಿಸಲು ತೀರ್ಮಾನಿಸಲಾಗಿದೆ. 

ಪುತ್ತೂರು ಉಪವಿಭಾಗಾಧಿಕಾರಿ ಎಚ್.ಕೆ. ಕೃಷ್ಣಮೂರ್ತಿ ಅವರ ಅಧ್ಯಕ್ಷತೆಯಲ್ಲಿ ಮಂಗಳವಾರ ಉಪವಿಭಾಗಾಧಿಕಾರಿ ಕಚೇರಿಯ ಸಭಾಂಗಣದಲ್ಲಿ ನಡೆದ ಸಮಾಲೋಚನಾ ಸಭೆಯಲ್ಲಿ ಕಾರ್ಯಕ್ರಮದ ರೂಪುರೇಷೆಗಳ ಬಗ್ಗೆ ಚರ್ಚಿಸಿ ಅಂತಿಮ ತೀರ್ಮಾನ ಕೈಗೊಳ್ಳಲಾಯಿತು. 

ಪೂವಾಹ್ನ ಜಿಲ್ಲಾ ಉಸ್ತುವಾರಿ ಸಚಿವ ಯು.ಟಿ.ಖಾದರ್ ಅವರು ಕಾರ್ಯಕ್ರಮವನ್ನು ಉದ್ಘಾಟಿಸಲಿದ್ದಾರೆ. ನಿವೃತ್ತ ಕುಲಪತಿ ಡಾ.ವಿವೇಕ್ ರೈ ಅಧ್ಯಕ್ಷತೆ ವಹಿಸಲಿದ್ದಾರೆ. ಸಂಜೆ ನಡೆಯುವ ಸಮಾರೋಪ ಸಮಾರಂಭದಲ್ಲಿ ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಚಿವೆ ಜಯಮಾಲ ಅವರು ಡಾ.ಶಿವರಾಮ ಕಾರಂತ ಪ್ರಶಸ್ತಿ ಪ್ರದಾನ ಮಾಡಲಿದ್ದಾರೆ. ಸರ್ಕಾರಿ ಪ್ರೊಟೋಕಾಲ್ ಪ್ರಕಾರವೇ ಶಾಸಕರು ಹಾಗೂ ಜನಪ್ರತಿನಿಧಿಗಳನ್ನು ಆಮಂತ್ರಿಸಿ ಕಾರ್ಯಕ್ರಮ ನಡೆಸಲಾಗುವುದು ಎಂದು ಉಪವಿಭಾಗಾಧಿಕಾರಿ ಎಚ್.ಕೆ.ಕೃಷ್ಣಮೂರ್ತಿ ಮಾಹಿತಿ ನೀಡಿದರು. 

ಕಾರ್ಯಕ್ರಮದ ಕುರಿತು ಸಭೆಯಲ್ಲಿ ವ್ಯಕ್ತವಾದ ಸಲಹೆಗಳನ್ನು ಆಲಿಸಿದ ಉಪವಿಭಾಗಾಧಿಕಾರಿಗಳು ಉದ್ಘಾಟನಾ ಸಮಾರಂಭದ ಬಳಿಕ 'ಕಾರಂತರ ಸೃಷ್ಠಿಶೀಲತೆ' ಎಂಬ ವಿಚಾರದಲ್ಲಿ ವಿಚಾರಗೋಷ್ಠಿ ನಡೆಯಲಿದೆ. ಬಳಿಕ ಆಸುಪಾಸಿನ ಶಾಲಾ- ಕಾಲೇಜು ವಿದ್ಯಾರ್ಥಿಗಳಿಂದ ಸಾಂಸ್ಕೃತಿಕ ಕಾರ್ಯಕ್ರಮ ನಡೆಯಲಿದೆ. ಕನ್ನಡ ಕವಿಗಳ ಭಾವಗೀತೆಗಳ ನೃತ್ಯ ರೂಪಕವನ್ನು ಮೂಕಾಂಬಿಕಾ ಕಲ್ಚರಲ್ ಅಕಾಡೆಮಿ ವತಿಯಿಂದ ಹಮ್ಮಿಕೊಳ್ಳಲಾಗುವುದು. 

ಸಂಜೆ ನಡೆಯುವ ಸಮಾರೋಪ ಸಮಾರಂಭದಲ್ಲಿ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತ ಯಕ್ಷಗಾನ ಕಲಾವಿದ, ಉಡುಪಿ ಯಕ್ಷಗಾನ ಕೇಂದ್ರದ ನಿರ್ದೇಶಕ,ಪದವಿ ತರಗತಿಗಳಿಗೆ ಪಠ್ಯವಾಗಿ ಕಾಣಿಸಿಕೊಂಡ, ಡಾ.ಕಾರಂತರ ನಿಕಟವರ್ತಿಯೂ ಆಗಿರುವ ಬನ್ನಂಜೆ ಸಂಜೀವ ಸುವರ್ಣ ಅವರಿಗೆ ಕಾರಂತ ಪ್ರಶಸ್ತಿ ನೀಡಿ ಗೌರವಿಸಲಾಗುವುದು. ಡಾ.ಕಾರಂತರದ್ದೇ ಆದ 'ನಳ ಕಾರ್ಕೋಟಕ' ಯಕ್ಷಗಾನ ಪ್ರದರ್ಶನ ಹಮ್ಮಿಕೊಳ್ಳಲಾಗುವುದು ಎಂದು ತಿಳಿಸಿ, ಸಭೆಯ ಒಪ್ಪಿಗೆ ಪಡೆದುಕೊಂಡರು. 

ಶಿವರಾಮ ಕಾರಂತರು ವಿಜ್ಞಾನ ಕ್ಷೇತ್ರದಲ್ಲಿಯೂ ಗುರುತಿಸಿಕೊಂಡಿದ್ದ ಹಿನ್ನೆಲೆಯಲ್ಲಿ ಇಬ್ಬರು ಯುವ ವಿಜ್ಞಾನಿಗಳನ್ನು ಗುರುತಿಸುವುದು ಸಮಂಜಸ ಎಂಬ ಅಭಿಪ್ರಾಯ ಸಭೆಯಲ್ಲಿ ವ್ಯಕ್ತವಾಯಿತು. ಯುವ ವಿಜ್ಞಾನಿ ವಿದ್ಯಾರ್ಥಿಗಳಾದ ರಾಕೇಶ್‍ಕೃಷ್ಣ ಕೆ. ಹಾಗೂ ಮಹಮ್ಮದ್ ಸುಹೈಲ್ ಅವರನ್ನು ಪೂರ್ವಾಹ್ನದ ಸಭಾ ಕಾರ್ಯಕ್ರಮದಲ್ಲಿ ಗೌರವಿಸುವುದೆಂದು ತೀರ್ಮಾನಿಸಲಾಯಿತು. 

ತಹಶೀಲ್ದಾರ್ ಅನಂತಶಂಕರ, ಚಿಂತಕ ಲಕ್ಷ್ಮೀಶ ತೋಳ್ಪಾಡಿ, ಸವಣೂರು ವಿದ್ಯಾರಶ್ಮಿ ಸಮೂಹ ಶಿಕ್ಷಣ ಸಂಸ್ಥೆಗಳ ಸಂಚಾಲಕ ಕೆ.ಸೀತಾರಾಮ ರೈ ಸವಣೂರು, ಪುತ್ತೂರು ತಾಲೂಕು ಕನ್ನಡ ಸಾಹಿತ್ಯ ಪರಿಷತ್ ಅಧ್ಯಕ್ಷ ಐತ್ತಪ್ಪ ನಾಯ್ಕ್, ಗೌರವ ಪ್ರಧಾನ ಕಾರ್ಯದರ್ಶಿ ಎಚ್.ಜಿ.ಶ್ರೀಧರ್, ರಂಗಕರ್ಮಿ ಐ.ಕೆ.ಬೊಳುವಾರು, ಮೂಕಾಂಬಿಕಾ ಕಲ್ಚರಲ್ ಅಕಾಡೆಮಿಯ ನಿರ್ದೇಶಕ ಭವಾನಿ ಶಂಕರ್, ತಾಲೂಕು ಪಂಚಾಯತ್ ಕಾರ್ಯನಿರ್ವಹಣಾಧಿಕಾರಿ ಜಗದೀಶ್, ಪೌರಾಯುಕ್ತೆ ರೂಪಾ ಶೆಟ್ಟಿ, ಕ್ಷೇತ್ರ ಶಿಕ್ಷಣಾಧಿಕಾರಿ ಸುಕನ್ಯಾ ಡಿ.ಎನ್, ಪುತ್ತೂರಿನ ಪ್ರಥಮ ದರ್ಜೆ ಮಹಿಳಾ ಕಾಲೇಜಿನ ಪ್ರಾಂಶುಪಾಲ ಝೇವಿಯರ್ ಡಿ.ಸೋಜಾ, ತಾಲೂಕು ಅಕ್ಷರ ದಾಸೋಹ ಯೋಜನಾಧಿಕಾರಿ ಸುರೇಶ್, ಶಿಶು ಅಭಿವೃದ್ಧಿ ಯೋಜನಾಧಿಕಾರಿ ಶಾಂತಿ ಹೆಗ್ಡೆ, ಯುವ ಸಬಲೀಕರಣ ಇಲಾಖೆಯ ಮಾಮಚ್ಚನ್, ಶಿಕ್ಷಣ ಇಲಾಖೆಯ ತನುಜಾ, ಹಿರಿಯ ಆರೋಗ್ಯ ನಿರೀಕ್ಷಕಿ ಧರಣಿ, ಮಾಸ್ಟರ್ ಪ್ಲಾನರಿಯ ಎಸ್.ಕೆ. ಆನಂದ್ ಮತ್ತಿತರರು ಉಪಸ್ಥಿತರಿದ್ದರು. 

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News