ಮೇಯರ್ ಆಯ್ಕೆ ಕುರಿತು ಸೆ.26 ರಂದು ಕಾಂಗ್ರೆಸ್ ಶಾಸಕರ ಸಭೆ: ಡಾ.ಜಿ.ಪರಮೇಶ್ವರ್

Update: 2018-09-25 15:26 GMT

ಬೆಂಗಳೂರು, ಸೆ.25: ಬಿಬಿಎಂಪಿ ಮೇಯರ್ ಆಯ್ಕೆಗೆ ಸಂಬಂಧಿಸಿದಂತೆ ಸೆ.28 ರಂದು ಚುನಾವಣೆ ನಡೆಯಲಿದ್ದು, ಸೆ.26 ರಂದು ಕಾಂಗ್ರೆಸ್ ಪಕ್ಷದ ಬೆಂಗಳೂರು ನಗರ ವ್ಯಾಪ್ತಿಯ ಶಾಸಕರ ಸಭೆಯನ್ನು ಕರೆಯಲಾಗಿದೆ ಎಂದು ಉಪ ಮುಖ್ಯಮಂತ್ರಿ ಹಾಗೂ ಬೆಂಗಳೂರು ನಗರಾಭಿವೃದ್ಧಿ ಸಚಿವ ಡಾ.ಜಿ.ಪರಮೇಶ್ವರ್ ಹೇಳಿದ್ದಾರೆ.

ಇಂದು ನಡೆಯಲಿರುವ ಸಭೆಯಲ್ಲಿ ಯಾರನ್ನು ಮೇಯರ್ ಆಗಿ ಆಯ್ಕೆ ಮಾಡಬೇಕು ಎಂಬುದರ ಕುರಿತು ಚರ್ಚೆ ನಡೆಸಲಾಗುತ್ತದೆ. ಅನಂತರ ಎಲ್ಲರ ಒಪ್ಪಿಗೆ ಪಡೆದು ಅಭ್ಯರ್ಥಿಯನ್ನು ಅಂತಿಮ ಮಾಡಲಾಗುತ್ತದೆ ಎಂದು ಅವರು ಸುದ್ದಿಗಾರರಿಗೆ ತಿಳಿಸಿದ್ದಾರೆ.

ಜೆಡಿಎಸ್‌ನಿಂದ ವೆುೀಯರ್ ಸ್ಥಾನಕ್ಕಾಗಿ ಒತ್ತಡ ಹೇರಿದ್ದಾರೆ ಎಂಬ ವಿಷಯ ನನಗೆ ತಿಳಿದಿಲ್ಲ. ಮೇಯರ್ ಆಯ್ಕೆ ಸಂಬಂಧ ಜೆಡಿಎಸ್ ನಾಯಕರ ಜತೆಗೆ ಚರ್ಚೆ ನಡೆಸಲಾಗುತ್ತದೆ. ಇಂದು ಸಭೆಯಲ್ಲಿ ಮೇಯರ್ ಚುನಾವಣೆ ಸೇರಿದಂತೆ ಮತ್ತಿತರೆ ಗಂಭೀರವಾದ ವಿಚಾರಗಳನ್ನು ಚರ್ಚೆ ಮಾಡಲಾಗುತ್ತದೆ ಎಂದು ಹೇಳಿದರು.

ವಿಧಾನಪರಿಷತ್ ಚುನಾವಣೆಯಲ್ಲಿ ಬಿಜೆಪಿ ಹಿಂದೆ ಸರಿದ ವಿಚಾರದ ಬಗ್ಗೆ ಪ್ರಸ್ತಾಪಿಸಿದ ಪರಮೇಶ್ವರ್, ಬಿಜೆಪಿ ತಂತ್ರಗಾರಿಕೆ ಏನಿದೆಯೋ ಗೊತ್ತಿಲ್ಲ. ನೀವು ಬಿಜೆಪಿ ನಾಯಕರನ್ನೇ ಕೇಳಿ ಎಂದು ಮಾಧ್ಯಮದವರಿಗೆ ಮರು ಪ್ರಶ್ನಿಸಿದರು.

ನಗರದಲ್ಲಿ ಎಲ್ಲೆಲ್ಲಿ ರಾಜಕಾಲುವೆ ಒತ್ತುವರಿ ಮಾಡಿಕೊಳ್ಳಲಾಗಿದೆಯೋ ಅದರ ಬಗ್ಗೆ ಸರ್ವೆ ನಡೆಸುವಂತೆ ಸೂಚಿಸಲಾಗಿದೆ. ಅಕ್ರಮವಾಗಿ ಒತ್ತುವರಿ ಮಾಡಿಕೊಂಡಿರುವವರ ಮೇಲೆ ಕಠಿಣ ಕಾನೂನು ಕ್ರಮ ಕೈಗೊಳ್ಳಲಾಗುತ್ತದೆ. ರಾಜಕಾಲುವೆ ಒತ್ತುವರಿ ಬಗ್ಗೆ ಪಾಲಿಕೆಯಲ್ಲಿ ಸರ್ವೆ ಮಾಡುವವರ ಸಂಖ್ಯೆ ಕಡಿಮೆ ಇದೆ. ಕಂದಾಯ ಇಲಾಖೆಯಿಂದ ತಾತ್ಕಾಲಿಕವಾಗಿ ಸರ್ವೆ ಮಾಡುವವರನ್ನು ನೇಮಕ ಮಾಡಿಕೊಳ್ಳಲಾಗಿದೆ ಎಂದು ಅವರು ಮಾಹಿತಿ ನೀಡಿದರು.

ಸೆಪ್ಟಂಬರ್‌ನಲ್ಲಿ ನಿರೀಕ್ಷೆಗೂ ಮೀರಿದ ಮಳೆ

ಸೆಪ್ಟಂಬರ್‌ನಲ್ಲಿ ನಿರೀಕ್ಷೆಗೂ ಮೀರಿದ ಮಳೆಯಾಗಿದ್ದು, ಮುನ್ನೆಚ್ಚರಿಕೆ ಕ್ರಮ ತೆಗೆದುಕೊಳ್ಳಲಾಗಿದೆ. ಈಗಾಗಲೆ ಸುಮಾರು 300 ಮರಗಳು ಧರೆಗುರುಳಿದ್ದು, ಶೀಘ್ರವೇ ತೆರವುಗೊಳಿಸುವ ಕೆಲಸ ಮಾಡುತ್ತಿದೆ ಎಂದು ತಿಳಿಸಿದರು.

ಮರಗಳನ್ನು ತೆರವುಗೊಳಿಸುವ ಕೆಲಸಕ್ಕಾಗಿ ಪ್ರತ್ಯೇಕ ತಂಡ ರಚಿಸಲಾಗಿದೆ. ತಗ್ಗು ಪ್ರದೇಶದಲ್ಲಿ ನೀರು ನಿಲ್ಲದಂತೆ ನೋಡಿಕೊಳ್ಳಲು ವಲಯವಾರು ತಂಡಗಳು ಕೆಲಸ ಮಾಡುತ್ತಿವೆ ಎಂದರು.

ರಸ್ತೆ ಗುಂಡಿ ಮುಚ್ಚಲು ಹೈಕೋರ್ಟ್ ಆದೇಶ ನೀಡಿದ್ದು, ಈ ಕೆಲಸವೂ ತ್ವರಿತವಾಗಿ ನಡೆಯುತ್ತಿದೆ. ಆದರೆ, ಮಳೆಯಿಂದ ತೊಂದರೆಯಾಗುತ್ತಿದೆ. ರಾಜಕಾಲುವೆ ಒತ್ತುವರಿಗೆ ಕಠಿಣ ಕ್ರಮಕೈಗೊಂಡಿದ್ದು, ಸರ್ವೆ ಮಾಡಲು ಸೂಚನೆ ನೀಡಲಾಗಿದೆ. ಸರ್ವೆ ಮಾಡುವವರ ಕೊರತೆಯಿಂದ ಕಂದಾಯ ಇಲಾಖೆಯಿಂದ ತಾತ್ಕಾಲಿಕವಾಗಿ ಸರ್ವೆ ಮಾಡುವವರನ್ನು ನೇಮಕ ಮಾಡಲಾಗಿದೆ ಎಂದು ಪರಮೇಶ್ವರ್ ತಿಳಿಸಿದರು.

 ಬೆಳ್ಳಂದೂರು ಕೆರೆಯಲ್ಲಿ ಮತ್ತೆ ನೊರೆ ಕಾಣಿಸಿಕೊಂಡಿರುವುದು ನಮ್ಮ ಗಮನಕ್ಕೆ ಬಂದಿದೆ. ನಾನೂ ಈ ಹಿಂದೆ ಒಮ್ಮೆ ಅಲ್ಲಿಗೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದೆ. ನೊರೆ ಸಮಸ್ಯೆಗೆ ಶಾಶ್ವತ ಪರಿಹಾರ ಕಂಡುಕೊಳ್ಳಲು ಗಂಭೀರವಾಗಿ ಕ್ರಮ ಕೈಗೊಳ್ಳಲಾಗುತ್ತಿದೆ. ಇದಕ್ಕಾಗಿ ಬಜೆಟ್‌ನಲ್ಲಿ 50 ಕೋಟಿ ರೂ.ಮೀಸಲಿಡಲಾಗಿದೆ. ಈ ಸಮಸ್ಯೆ ಬಗೆಹರಿಸಲು ಇತರೆ ಮಾರ್ಗ ಕಂಡುಕೊಳ್ಳಲಾಗುವುದು ಎಂದು ಅವರು ಭರವಸೆ ನೀಡಿದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News