ದಕ್ಷಿಣ ಒಳನಾಡಿನಲ್ಲಿ ಚುರುಕು ಮುಟ್ಟಿಸಿದ ನೈಋತ್ಯ ಮುಂಗಾರು

Update: 2018-09-25 17:12 GMT
ಸಾಂದರ್ಭಿಕ ಚಿತ್ರ

ಬೆಂಗಳೂರು, ಸೆ.25: ಸೆಪ್ಟೆಂಬರ್ ತಿಂಗಳಿನಲ್ಲಿ ಬೆಂಗಳೂರು ನಗರ ಸೇರಿದಂತೆ ದಕ್ಷಿಣ ಒಳನಾಡಿನ ಜಿಲ್ಲೆಗಳು ವಾಡಿಕೆ ಮಳೆ ಎದುರಿಸುತ್ತಿದ್ದವು. ಆದರೆ, ಇದೀಗ ನೈಋತ್ಯ ಮುಂಗಾರು ಚುರುಕಾಗಿದ್ದು, ರವಿವಾರದಿಂದ ಬಹುತೇಕ ಜಿಲ್ಲೆಗಳಲ್ಲಿ ನಿರಂತರವಾಗಿ ಮಳೆ ಸುರಿಯುತ್ತಿದೆ.

ದಕ್ಷಿಣ ಒಳನಾಡಿನ ಜಿಲ್ಲೆಗಳಲ್ಲಿ ರವಿವಾರ ಆರಂಭಗೊಂಡ ಮಳೆಯು 6.4 ಮಿ.ಮೀ ಮಳೆಯಾಗಬೇಕಿತ್ತಾದರೂ, ಸುಮಾರು 12.9 ಮಿ.ಮೀ ಮಳೆಯಾಗಿದೆ. ಇದು ವಾಡಿಕೆ ಮಳೆಗಿಂತ ಶೇ.101 ರಷ್ಟು ಅಧಿಕ ಮಳೆಯಾಗಿದೆ ಎಂದು ಹವಾಮಾನ ಇಲಾಖೆ ಹೇಳಿದೆ.

ದಕ್ಷಿಣ ಕನ್ನಡ, ಉಡುಪಿ, ಉತ್ತರ ಕನ್ನಡ, ಕೊಡಗು, ಹಾಸನ, ಶಿವಮೊಗ್ಗ, ಚಿಕ್ಕಮಗಳೂರು, ಬೆಂಗಳೂರು ಗ್ರಾಮಾಂತರ ಮತ್ತು ನಗರ, ಚಾಮರಾಜನಗರ, ಕೋಲಾರ, ಚಿಕ್ಕಬಳ್ಳಾಪುರ, ಚಿತ್ರದುರ್ಗ, ದಾವಣಗೆರೆ, ರಾಮನಗರ, ತುಮಕೂರು, ಮೈಸೂರು, ಮಂಡ್ಯ ಜಿಲ್ಲೆಗಳಲ್ಲಿ ಈ ತಿಂಗಳ ಅಂತ್ಯದವರೆಗೂ ಭಾರಿ ಮಳೆಯಾಗುವ ನಿರೀಕ್ಷೆ ಇದೆ ಎಂದು ಇಲಾಖೆ ಎಚ್ಚರಿಕೆ ನೀಡಿದೆ.

ದಕ್ಷಿಣ ಒಳನಾಡಿನಲ್ಲಿ ಮಳೆಯಾಗುತ್ತಿದ್ದರೂ, ಉತ್ತರ ಕರ್ನಾಟಕದಲ್ಲಿ ಮಳೆಯ ಕೊರತೆ ಎದ್ದು ಕಾಣುತ್ತಿದೆ. ಗದಗ, ಧಾರವಾಡ, ಹಾವೇರಿ, ಕೊಪ್ಪಳ, ರಾಯಚೂರು, ಬಳ್ಳಾರಿ ಜಿಲ್ಲೆಗಳಲ್ಲಿ ಸೆ.26-27 ರಂದು ಭಾರಿ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮಾಹಿತಿ ನೀಡಿದೆ.

ಎಲ್ಲೆಲ್ಲಿ ಅಧಿಕ ಮಳೆ: ಕಳೆದ ಎರಡು ದಿನಗಳಿಂದ ಮಳೆ ನಿರಂತರವಾಗಿ ಸುರಿದಿದ್ದು, ತುಮಕೂರು ಜಿಲ್ಲೆಯ ಕೊರಟಗೆರೆಯಲ್ಲಿ 7 ಸೆ.ಮೀ. ಭಾರಿ ಮಳೆಯಾಗಿದ್ದರೆ, ಮಂಡ್ಯ ಜಿಲ್ಲೆಯಲ್ಲಿ 7 ಸೆ.ಮೀ., ಬೆಂಗಳೂರು ನಗರ, ನೆಲಮಂಗಲ ಹಾಗೂ ರಾಮನಗರದಲ್ಲಿ ತಲಾ 5 ಸೆ.ಮೀ. ಮಳೆ ಪ್ರಮಾಣ ದಾಖಲಾಗಿದೆ ಎಂದು ಇಲಾಖೆ ತಿಳಿಸಿದೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News