ಸಿಎಲ್‌ಪಿ ಸಭೆಯಲ್ಲಿ ನನ್ನ ವಿರುದ್ಧ ಯಾರೂ ಅಸಮಾಧಾನ ವ್ಯಕ್ತಪಡಿಸಿಲ್ಲ: ಡಿಸಿಎಂ ಪರಮೇಶ್ವರ್

Update: 2018-09-26 12:43 GMT

ಬೆಂಗಳೂರು, ಸೆ.26: ಕಾಂಗ್ರೆಸ್ ಪಕ್ಷದ ಶಾಸಕಾಂಗ ಸಭೆಯಲ್ಲಿ ಶಾಸಕರು ನನ್ನ ಮೇಲೆ ಬೇಸರ ವ್ಯಕ್ತಪಡಿಸಿ, ಆಕ್ರೋಶ ವ್ಯಕ್ತಪಡಿಸಿದರು ಎನ್ನುವ ಮಾತುಗಳು ಸುಳ್ಳು ಎಂದು ಉಪಮುಖ್ಯಮಂತ್ರಿ ಜಿ.ಪರಮೇಶ್ವರ್ ಇಂದಿಲ್ಲಿ ಹೇಳಿದರು.

ಬುಧವಾರ ನಗರದ ಮಿಲ್ಲರ್ಸ್ ರಸ್ತೆಯ ಜಂಕ್ಷನ್‌ನಲ್ಲಿ ಕೊಡವ ಸಮಾಜ ಹಾಗೂ ಬಿಬಿಎಂಪಿ ಸಹಯೋಗದಲ್ಲಿ ನಿರ್ಮಿಸಿರುವ ಫೀಲ್ಡ್ ಮಾರ್ಷಲ್ ಕಾರಿಯಪ್ಪ ಅವರ ಪ್ರತಿಮೆ ಅನಾವರಣ ಕಾರ್ಯಕ್ರಮದಲ್ಲಿ ಪಾಲ್ಗೊಂಡ ಬಳಿಕ ಅವರು ಸುದ್ದಿಗಾರರೊಂದಿಗೆ ಮಾತನಾಡಿದರು.

ಮಂಗಳವಾರ ಸಂಜೆ ನಡೆದ ಕಾಂಗ್ರೆಸ್ ಶಾಸಕಾಂಗ ಸಭೆಯಲ್ಲಿ ಯಾವ ಶಾಸಕರೂ ನನ್ನ ವಿರುದ್ಧ ಅಸಮಾಧಾನ ವ್ಯಕ್ತಪಡಿಸಿಲ್ಲ. ಇದು ಕೇವಲ ಮಾಧ್ಯಮಗಳ ಸೃಷ್ಟಿಯಾಗಿದ್ದು, ಎಲ್ಲ ಶಾಸಕರು ತಮ್ಮ ಸಮಸ್ಯೆಗಳನ್ನು ಹೇಳಿಕೊಂಡಿದ್ದಾರೆ. ಮುಖ್ಯಮಂತ್ರಿ ಅವರನ್ನು ನೇರ ಭೇಟಿಯಾಗಲು ಸಾಧ್ಯವಾಗದಿದ್ದರೆ ನನ್ನನ್ನು ಸಂಪರ್ಕಿಸಿ, ನಿಮ್ಮ ಪ್ರತಿನಿಧಿಯಾಗಿ ಅವರನ್ನು ಭೇಟಿ ಮಾಡಿ ನಿಮ್ಮ ಬೇಡಿಕೆ ಅವರಿಗೆ ಸಲ್ಲಿಸುವೆ ಎಂದು ಶಾಸಕರಿಗೆ ಹೇಳಿರುವುದಾಗಿ ತಿಳಿಸಿದರು.

ಫೀಲ್ಡ್ ಮಾರ್ಷಲ್ ಕಾರಿಯಪ್ಪ ಅವರು ಈ ದೇಶಕ್ಕಾಗಿ ಸಾಕಷ್ಟು ಸೇವೆ ಸಲ್ಲಿಸಿದವರು, ಅವರ ಪರಿಶ್ರಮ ಅಪಾರ. ಇಂದಿನ ಯುವಪೀಳಿಗೆಗೆ ಮಾದರಿಯಾಗಿದ್ದಾರೆ ಎಂದು ಕಾರಿಯಪ್ಪ ಹೆಸರನ್ನು ವಸಂತನಗರ ಜಂಕ್ಷನ್‌ಗೆ ನಾಮಕರಣ ಮಾಡುವ ಪ್ರಸ್ತಾವನೆ ಸಲ್ಲಿಸಿದ್ದಾರೆ. ಈ ಬಗ್ಗೆ ಶೀಘ್ರದಲ್ಲಿಯೇ ನಿರ್ಧಾರ ಕೈಗೊಳ್ಳುವುದಾಗಿ ಪರಮೇಶ್ವರ್ ತಿಳಿಸಿದರು.

ಈ ಸಂದರ್ಭದಲ್ಲಿ ಬಿಬಿಎಂಪಿ ಮೇಯರ್ ಸಂಪತ್ ರಾಜ್ ಸೇರಿದಂತೆ ಪ್ರಮುಖರು ಉಪಸ್ಥಿತರಿದ್ದರು.

ತೀರ್ಪು ಕೈಸೇರಿಲ್ಲ

ಭಡ್ತಿ ಮೀಸಲಾತಿ ಸಂಬಂಧ ಸುಪ್ರೀಂ ಕೋರ್ಟ್ ನೀಡಿರುವ ಆದೇಶದ ಪ್ರತಿ ಇನ್ನೂ ಕೈಸೇರಿಲ್ಲ. ಆದೇಶದ ಪ್ರತಿ ಪರಿಶೀಲಿಸಿದ ಬಳಿಕ ಪ್ರತಿಕ್ರಿಯೆ ನೀಡುವೆ.

-ಜಿ.ಪರಮೇಶ್ವರ್, ಉಪಮುಖ್ಯಮಂತ್ರಿ

ನಿಮಗೇಕೆ ಹೊಟ್ಟೆಯುರಿ?

ರಾಜ್ಯದಲ್ಲಿ ಮುಖ್ಯಮಂತ್ರಿಗಳು, ಗಣ್ಯವ್ಯಕ್ತಿ, ರಾಜ್ಯಪಾಲರು ಹಾಗೂ ಗೃಹ ಸಚಿವರಿಗೂ ಸಹ ಝಿರೋ ಟ್ರಾಫಿಕ್ ಅವಕಾಶ ನೀಡಲಾಗಿದೆ. ಹೀಗಾಗಿ, ಇದನ್ನು ನಾನು ಬಳಸಿಕೊಳ್ಳುತ್ತಿದ್ದೇನೆ. ಈ ಹಿಂದಿನ ಗೃಹ ಸಚಿವರು ಬೇಡ ಎಂದಿದ್ದರು. ಹಾಗಂತ ನಾನು ಸಹ ಬೇಡ ಎನ್ನಬೇಕಿಲ್ಲ. ಝಿರೋ ಟ್ರಾಫಿಕ್ ತೆಗೆದುಕೊಳ್ಳುವುದು ನಿಮಗೇಕೆ(ಪತ್ರಕರ್ತರಿಗೆ) ಹೊಟ್ಟೆಯುರಿ?

-ಜಿ.ಪರಮೇಶ್ವರ್ ಉಪಮುಖ್ಯಮಂತ್ರಿ

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News