ಬನ್ನೇರುಘಟ್ಟ ಉದ್ಯಾನವನ ಸೂಕ್ಷ್ಮ ವಲಯದಲ್ಲಿ ಅಕ್ರಮ ಗಣಿಗಾರಿಕೆಗೆ ಅವಕಾಶ: ಆರೋಪ

Update: 2018-09-26 14:59 GMT

ಬೆಂಗಳೂರು, ಸೆ.26: ರಾಷ್ಟ್ರೀಯ ಉದ್ಯಾನವನಗಳಲ್ಲಿನ ಸೂಕ್ಷ್ಮ ವಲಯದಲ್ಲಿ ಯಾವುದೇ ಅಭಿವೃದ್ಧಿ ಚಟುವಟಿಕೆಗಳಿಗೆ ಅವಕಾಶ ನೀಡಬಾರದು ಎಂಬ ಸುಪ್ರೀಂಕೋರ್ಟ್‌ನ ಆದೇಶವನ್ನು ಧಿಕ್ಕರಿಸಿ ಬನ್ನೇರುಘಟ್ಟ ರಾಷ್ಟ್ರೀಯ ಉದ್ಯಾನವನದ ಸೂಕ್ಷ್ಮ ವಲಯದಲ್ಲಿ ಅಕ್ರಮವಾಗಿ ಗಣಿಗಾರಿಕೆಗೆ ಅನುಮತಿ ನೀಡಲಾಗಿದೆ ಎಂದು ಯುನೈಟೆಡ್ ಬೆಂಗಳೂರು ಸಂಸ್ಥೆ ಆರೋಪಿಸಿದೆ.

ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಸಂಸ್ಥೆಯ ಮಾರ್ಗದರ್ಶಿ ಹಾಗೂ ಸ್ವಾತಂತ್ರ ಹೋರಾಟಗಾರ ಎಚ್.ಎಸ್.ದೊರೆಸ್ವಾಮಿ, ರಾಷ್ಟ್ರೀಯ ಉದ್ಯಾನವನದ ಸುತ್ತಮುತ್ತಲಿನ ಪ್ರದೇಶದಲ್ಲಿ ಸುಮಾರು 10 ಕಿಲೋಮೀಟರ್ ವ್ಯಾಪ್ತಿಯನ್ನು ಬಫರ್‌ರೆನ್ ಆಗಿದೆ. ಈ ಪ್ರದೇಶದಲ್ಲಿ ರಸ್ತೆ ಅಗಲೀಕರಣ ಹಾಗೂ ಗಣಿಗಾರಿಕೆಯಂತಹ ಚಟುವಟಿಕೆಗಳು ನಡೆಯಬಾರದು ಎಂಬ ನಿರ್ಬಂಧವಿದೆ. ಆದರೂ ಸುಪ್ರೀಂಕೋರ್ಟ್ ನಿರ್ದೇಶನಗಳನ್ನು ಉಲ್ಲಂಘಿಸಿ ಅಕ್ರಮವಾಗಿ ಗಣಿಗಾರಿಕೆ ನಡೆಯುತ್ತಿದೆ ಎಂದು ದೂರಿದರು.

ರಾಷ್ಟ್ರೀಯ ಉದ್ಯಾನವನಗಳ ಸಂರಕ್ಷಣೆಯಲ್ಲಿ ರಾಜ್ಯ ಸರಕಾರ ಸಂಪೂರ್ಣ ವಿಫಲವಾಗಿದೆ. ಶಕ್ತಿ ಕೇಂದ್ರಕ್ಕೆ ಹತ್ತಿರದಲ್ಲಿರುವ ಬನ್ನೇರುಘಟ್ಟದಲ್ಲಿ ರಾಷ್ಟ್ರೀಯ ಉದ್ಯಾನವನದಲ್ಲಿ ಅಕ್ರಮಕ್ಕೆ ಅವಕಾಶ ನೀಡಲಾಗಿದೆ. ಇಲ್ಲಿ ಅಕ್ರಮವಾಗಿ ಸಿಡಿಮದ್ದುಗಳನ್ನು ಸಿಡಿಸಲಾಗುತ್ತಿದೆ. ಇದರಿಂದಾಗಿ ಕಾಡಿನಲ್ಲಿರಬೇಕಾದ ಪ್ರಾಣಿಗಳು ನಾಡಿಗೆ ಬರುತ್ತಿವೆ. ಆದರೂ ಅರಣ್ಯ ಇಲಾಖೆ ಯಾವುದೇ ಕ್ರಮಕ್ಕೂ ಮುಂದಾಗಿಲ್ಲ. ಈ ವಿಚಾರದಲ್ಲಿ ಸರಕಾರ ತಕ್ಷಣ ಮಧ್ಯಪ್ರವೇಶಿಸಬೇಕು ಎಂದು ಅವರು ಮನವಿ ಮಾಡಿದರು.

ರಾಜ್ಯದಲ್ಲಿ ಹೊಸ ಸರಕಾರ ರಚನೆ ಮಾಡಿದ ಸಂದರ್ಭದಲ್ಲಿ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಹಾಗು ನಗರಾಭಿವೃದ್ಧಿ ಸಚಿವ ಉಪ ಮುಖ್ಯಮಂತ್ರಿ ಡಾ.ಜಿ.ಪರಮೇಶ್ವರ್ ಅವರಿಗೆ ಪತ್ರ ಬರೆದಿದ್ದು, ನಗರದ ಸಮಸ್ಯೆಗಳ ಬಗ್ಗೆ ಚರ್ಚೆ ನಡೆಸುವುದಕ್ಕೆ ಮನವಿ ಮಾಡಲಾಗಿತ್ತು. ಆದರೆ, ಚರ್ಚೆಗೆ ಮುಂದಾಗಿಲ್ಲ. ವಾರ್ಡ್ ಸಮಿತಿಗಳು ಸ್ವಾತಂತ್ರವಾಗಿ ಕಾರ್ಯನಿರ್ವಹಿಸಲು ಅವಕಾಶ ಕಲ್ಪಿಸಬೇಕು ಎಂದು ಅವರು ಆಗ್ರಹಿಸಿದರು.

ಯುನೈಟೆಡ್ ಬೆಂಗಳೂರು ಸಂಸ್ಥೆಯ ಸಂಚಾಲಕ ಸುರೇಶ್ ಮಾತನಾಡಿ, ಬನ್ನೇರುಘಟ್ಟ ರಾಷ್ಟ್ರೀಯ ಉದ್ಯಾನವನದ ಸುತ್ತಲ 1 ಕಿಲೋಮೀಟರ್ ಪ್ರದೇಶವನ್ನು ಸೂಕ್ಷ್ಮ ಮತ್ತು 10 ಕಿಲೋಮೀಟರ್ ವ್ಯಾಪ್ತಿಯನ್ನು ನಿಷೇಧಿತ ಪ್ರದೇಶ ಎಂದು ಗುರುತಿಸಿದ್ದು, ಯಾವುದೇ ಅಭಿವೃದ್ಧಿ ಚಟುವಟಿಕೆಗಳು ನಡೆಯಬಾದರು ಎಂದು ನಿರ್ದೇಶನವಿದೆ. ಆದರೂ ಪರಿಸರ ಇಲಾಖೆಯ ಅನುಮತಿ ಪಡೆಯದೇ ಗಣಿಗಾರಿಕೆಗೆ ಅವಕಾಶ ಕೊಡಲಾಗಿದೆ. ಇದರಿಂದ ಪರಿಸರ ಸಂಕುಲಕ್ಕೆ ಧಕ್ಕೆತರುವ ಕೆಲಸ ನಡೆಯುತ್ತಿದೆ ಎಂದರು.

ಅಕ್ರಮ ಗಣಿಗಾರಿಕೆಗೆ ಸಂಬಂಧಿಸಿದಂತೆ ಅರಣ್ಯ ಇಲಾಖೆಯ ಕಿರಿಯ ಅಧಿಕಾರಿಗಳು ಹಾಗೂ ಹಿರಿಯ ಅಧಿಕಾರಿಗಳು ನೀಡುವ ಮಾಹಿತಿಯಲ್ಲಿ ಗೊಂದಲಕರವಾಗಿದೆ. ಈ ಬಗ್ಗೆ ಮುಖ್ಯಮಂತ್ರಿಗಳು, ಉಪ ಮುಖ್ಯಮತ್ರಿ ಮತ್ತು ಅರಣ್ಯ ಇಲಾಖೆ ಸಚಿವರು ತಕ್ಷಣ ಕ್ರಮಕ್ಕೆ ಮುಂದಾಗುವ ಅಗತ್ಯ ಕ್ರಮಕ್ಕೆ ಮುಂದಾಗಬೇಕು ಎಂದು ಅವರು ಆಗ್ರಹಿಸಿದರು.

ಸೆ.29 ರಂದು ಸಭೆ: ಬನ್ನೇರುಘಟ್ಟ ರಾಷ್ಟ್ರೀಯ ಉದ್ಯಾನವನಕ್ಕೆ ಸಂಬಂಧಿಸಿದಂತೆ ಸೆ.29 ರಂದು ಇಂದಿರಾ ನಗರದ ಕನ್ವೆನ್ಷನ್ ಹಾಲ್‌ನಲ್ಲಿ ಸಾರ್ವಜನಿಕ ಸಭೆ ಏರ್ಪಡಿಸಲಾಗಿದೆ. ಈ ಸಭೆಗೆ ಬೆಂಗಳೂರು ನಗರಾಭಿವೃದ್ದಿ ಸಚಿವ ಹಾಗೂ ಉಪ ಮುಖ್ಯಮಂತ್ರಿ ಡಾ.ಜಿ.ಪರಮೇಶ್ವರ್ ಬರಬೇಕು. ಜನರ ಸಮಸ್ಯೆಗಳನ್ನು ಆಲಿಸಿ ಅದಕ್ಕೆ ಪರಹಾರ ಕಂಡುಕೊಳ್ಳಬೇಕು ಎಂದು ದೊರೆಸ್ವಾಮಿ ಮನವಿ ಮಾಡಿದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News