ಸೆ.29, 30ಕ್ಕೆ ಉದ್ಯೋಗ ಮೇಳ: ಕಂದಾಯ ಸಚಿವ ಆರ್.ವಿ.ದೇಶಪಾಂಡೆ

Update: 2018-09-28 15:35 GMT

ಬೆಂಗಳೂರು, ಸೆ. 28: ನಗರದ ಬಸವನಗುಡಿಯ ನ್ಯಾಷನಲ್ ಕಾಲೇಜು ಮೈದಾನದಲ್ಲಿ ನಾಳೆ(ಸೆ.29) ಮತ್ತು ನಾಡಿದ್ದು (ಸೆ.30) ಎರಡು ದಿನಗಳ ಉದ್ಯೋಗ ಮೇಳ ನಡೆಯಲಿದೆ ಎಂದು ಕಂದಾಯ ಮತ್ತು ಕೌಶಲ್ಯಾಭಿವೃದ್ಧಿ ಸಚಿವ ಆರ್.ವಿ. ದೇಶಪಾಂಡೆ ಹೇಳಿದ್ದಾರೆ.

ಶನಿವಾರ (ಸೆ.29) ಬೆಳಗ್ಗೆ 11ಗಂಟೆಗೆ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಈ ಮೇಳವನ್ನು ಉದ್ಘಾಟಿಸಲಿದ್ದು, ಬೆಂಗಳೂರು ಮತ್ತು ಸುತ್ತಮುತ್ತಲಿನ 12ಸಾವಿರಕ್ಕೂ ಹೆಚ್ಚು ಉದ್ಯೋಗಾಕಾಂಕ್ಷಿಗಳು ಪಾಲ್ಗೊಳ್ಳುವ ನಿರೀಕ್ಷೆ ಇದೆ ಎಂದು ಅವರು ತಿಳಿಸಿದ್ದಾರೆ.

ಮೇಳದಲ್ಲಿ ವಾಹನೋದ್ಯಮ, ಬ್ಯಾಂಕಿಂಗ್, ಹಣಕಾಸು, ಚಿಲ್ಲರೆ ವಹಿವಾಟು ಮುಂತಾದ ವಲಯಗಳಿಗೆ ಸಂಬಂಧಿಸಿದ 100ಕ್ಕೂ ಹೆಚ್ಚು ಅಗ್ರಪಂಕ್ತಿಯ ಕಂಪೆನಿಗಳು ಪಾಲ್ಗೊಳ್ಳಲಿದ್ದು, ಅಂದಾಜು 6ಸಾವಿರಕ್ಕೂ ಹೆಚ್ಚು ಉದ್ಯೋಗಾಕಾಂಕ್ಷಿಗಳಿಗೆ ಉದ್ಯೋಗಾವಕಾಶವನ್ನು ಒದಗಿಸಿ ಕೊಡಲಾಗುವುದು ಎಂದು ಅವರು ಹೇಳಿದ್ದಾರೆ.

ಕೌಶಲ್ಯ ತರಬೇತಿ ಹೊಂದಿದ ಪ್ರತಿಯೊಬ್ಬರಿಗೂ ಕೆನರಾ ಬ್ಯಾಂಕ್‌ನಲ್ಲಿ ಉಚಿತವಾಗಿ ಬ್ಯಾಂಕ್ ಖಾತೆ ತೆರೆದು, ಎಟಿಎಂ ಕಾರ್ಡ್ ಮತ್ತು ನೆಟ್ ಬ್ಯಾಂಕಿಂಗ್ ಸೌಲಭ್ಯವನ್ನು ಒದಗಿಸಲಾಗುವುದು.

ಉದ್ಯೋಗಾಕಾಂಕ್ಷಿಗಳಿಗೆ ವಿಶಿಷ್ಟವಾದ ಕೌಶಲ್ ಕ್ಯಾಶ್ ಕಾರ್ಡ್ ನೀಡುವ ಮೂಲಕ ಡಿಜಿಟಲ್ ಸಬಲೀಕರಣ ಮಾಡಲಾಗುವುದು. ಮೇಳದ ಮೊದಲನೇ ದಿನವಾದ ಶನಿವಾರ ಮುಖ್ಯಮಂತ್ರಿ ಕುಮಾರಸ್ವಾಮಿ ಈ ಕಾರ್ಡನ್ನು ಲೋಕಾರ್ಪಣೆ ಮಾಡಲಿದ್ದಾರೆ ಎಂದು ದೇಶಪಾಂಡೆ ಮಾಹಿತಿ ನೀಡಿದ್ದಾರೆ.

ಉದ್ಯೋಗ ಮೇಳದಲ್ಲಿ ಉದ್ಯೋಗಾಕಾಂಕ್ಷಿಗಳು ಮತ್ತು ಉದ್ಯೋಗದಾತರ ಅಗತ್ಯಗಳನ್ನು ಗಮನಕ್ಕೆ ತೆಗೆದುಕೊಳ್ಳಲಾಗುವುದು. www.kaushalkar.com ನಲ್ಲಿ ತಮ್ಮ ಹೆಸರನ್ನು ನೋಂದಾಯಿಸಿ ಕೊಂಡಿರುವವರು ಮತ್ತು ಸಿಎಂ ‘ಜನಸ್ಪಂದನ’ ಕಾರ್ಯಕ್ರಮದಲ್ಲಿ ಅರ್ಜಿಗಳನ್ನು ಕೊಟ್ಟಿರುವವರಿಗೆ ಆದ್ಯತೆ ನೀಡಲಾಗುವುದು. ಮುಂಬರುವ ದಿನಗಳಲ್ಲಿ ರಾಜ್ಯದ ವಿವಿಧೆಡೆಗಳಲ್ಲಿ ಇಂತಹ ಉದ್ಯೋಗ ಮೇಳಗಳನ್ನು ಆಯೋಜಿಸಲಾಗುವುದು ಎಂದು ಹೇಳಿದ್ದಾರೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News