ಉಡುಪಿ ಜಿಲ್ಲಾಸ್ಪತ್ರೆ ಮೇಲ್ದರ್ಜೆಗೇರಿಸಲು ತಕ್ಷಣವೇ ಕ್ರಮ: ಸಚಿವ ಶಿವಾನಂದ ಪಾಟೀಲ್
ಉಡುಪಿ, ಸೆ. 29: ಉಡುಪಿ ಜಿಲ್ಲಾ ಸರಕಾರಿ ಆಸ್ಪತ್ರೆಯು ಪ್ರಸ್ತುತ ತುಂಬಾ ಉತ್ತಮ ಸೇವೆ ನೀಡುತ್ತಿದೆ. ಈ ಆಸ್ಪತ್ರೆಯನ್ನು ಮೇಲ್ದರ್ಜೆಗೇರಿಸುವ ಬಗ್ಗೆ ತಕ್ಷಣವೇ ಕ್ರಮ ತೆಗೆದುಕೊಳ್ಳಲು ಪ್ರಾಮಾಣಿಕ ಪ್ರಯತ್ನ ಮಾಡಲಾಗುವುದು ಎಂದು ರಾಜ್ಯ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವ ಶಿವಾನಂದ ಎಸ್.ಪಾಟೀಲ್ ಭರವಸೆ ನೀಡಿದ್ದಾರೆ.
ಅಜ್ಜರಕಾಡುವಿನಲ್ಲಿರುವ ಜಿಲ್ಲಾಸ್ಪತ್ರೆಗೆ ಶನಿವಾರ ಭೇಟಿ ನೀಡಿ ಪರಿಶೀಲನೆ ನಡೆಸಿದ ಬಳಿಕ ಅವರು ಮಾಧ್ಯಮದವರೊಂದಿಗೆ ಮಾತನಾಡುತಿದ್ದರು. ಈ ಹಿಂದಿನವರು ಪ್ರಯತ್ನ ಮಾಡಿದರೂ ಅದು ಯಾಕೆ ಆಗಿಲ್ಲ ಎಂಬುದರ ಬಗ್ಗೆ ಪರಿಶೀಲನೆ ನಡೆಸಲಾಗುವುದು. ಆದರೆ ನಾನು ಈ ವಿಚಾರದಲ್ಲಿ ಶೇ.100ರಷ್ಟು ಪ್ರಾಮಾಣಿಕ ಪ್ರಯತ್ನ ಮಾಡುತ್ತೇನೆ ಎಂದರು.
ಸದ್ಯಕ್ಕೆ ಜಿಲ್ಲಾಸ್ಪತ್ರೆಯಲ್ಲಿ ಯಾವುದೇ ವೈದ್ಯರು ಹಾಗೂ ಸಿಬ್ಬಂದಿಗಳ ಕೊರತೆ ಇಲ್ಲ. ಆದರೆ ಆಸ್ಪತ್ರೆ ಮೇಲ್ದರ್ಜೆಗೇರದೇ ಹೊಸ ಹುದ್ದೆ ಸೃಷ್ಠಿ ಮಾಡಲು ಸಾಧ್ಯವಿಲ್ಲ. ಆದುದರಿಂದ ಮೊದಲು ಆಸ್ಪತ್ರೆಯನ್ನು ಮೇಲ್ದರ್ಜೆಗೇರಿಸುವ ಕೆಲಸ ಮಾಡಲಾಗುವುದು. ಇದರಿಂದ ಹೊಸ ಹುದ್ದೆ ಸೃಷ್ಠಿಯಾಗಿ ವೈದ್ಯರು ಹಾಗೂ ಸಿಬ್ಬಂದಿಗಳ ಕೊರತೆ ಎದುರಾಗುವುದಿಲ್ಲ ಎಂದು ಅವರು ಹೇಳಿದರು.
ರಾಜ್ಯದಲ್ಲಿ ಇದೀಗ 400 ವೈದ್ಯರನ್ನು ಮತ್ತು 1600 ನರ್ಸ್‌ಗಳನ್ನು ಹೊಸ ದಾಗಿ ನೇಮಕಾತಿ ಮಾಡಲಾಗಿದೆ. ಒಂದು ತಿಂಗಳೊಳಗೆ ಹೊಸ ಅಂಬ್ಯುಲೆನ್ಸ್ ಗಳು ರಸ್ತೆಗೆ ಇಳಿಯಲಿವೆ. ಇದರಲ್ಲಿ ಜಿಲ್ಲಾಧಿಕಾರಿಗಳ ಕೋರಿಕೆಯಂತೆ ಉಡುಪಿ ಜಿಲ್ಲೆಗೂ ಅಂಬ್ಯುಲೆನ್ಸ್‌ಗಳನ್ನು ನೀಡಲಾಗುವುದು ಎಂದರು.
ಈ ಸಂದರ್ಭದಲ್ಲಿ ಉಡುಪಿ ಶಾಸಕ ಕೆ.ರಘುಪತಿ ಭಟ್, ಜಿಲ್ಲಾ ಸರ್ಜನ್ ಡಾ.ಮಧುಸೂದನ್ ನಾಯಕ್, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಅಧಿಕಾರಿ ಡಾ.ರೋಹಿಣಿ ಮೊದಲಾದವರು ಉಪಸ್ಥಿತರಿದ್ದರು.
ಹಾಜಿ ಅಬ್ದುಲ್ಲಾ ಮಹಿಳಾ ಮತ್ತು ಮಕ್ಕಳ ಆಸ್ಪತ್ರೆಯ ವೈದ್ಯರು ಹಾಗೂ ನರ್ಸ್ ಸೇರಿದಂತೆ ಎಲ್ಲ ಸಿಬ್ಬಂದಿಗಳನ್ನು ಜಿಲ್ಲಾಸ್ಪತ್ರೆಗೆ ವರ್ಗಾವಣೆ ಮಾಡಿ ಇಲ್ಲಿಯೇ ಅವರನ್ನು ಹೆಚ್ಚುವರಿ ಸಿಬ್ಬಂದಿಗಳಾಗಿ ಖಾಯಂ ಮಾಡಲು ಕ್ರಮ ತೆಗೆದುಕೊಳ್ಳಲಾಗುವುದು ಎಂದು ಸಚಿವ ಶಿವಾನಂದ ಪಾಟೀಲ್ ತಿಳಿಸಿದರು.
ಮಹಿಳಾ ಮತ್ತು ಮಕ್ಕಳ ಸರಕಾರಿ ಆಸ್ಪತ್ರೆಯನ್ನು ಖಾಸಗಿ ಅವರಿಗೆ ನೀಡುವ ಬಗ್ಗೆ ಸರಕಾರ ಈಗಾಗಲೇ ನಿರ್ಧಾರ ತೆಗೆದುಕೊಂಡಿರುವುದರಿಂದ ನನಗೆ ಏನು ಮಾಡಲು ಆಗಲ್ಲ. ಆದರೆ ಕಮಿಟಿಯಲ್ಲಿರುವ ಸ್ಥಳೀಯ ಜನಪ್ರತಿನಿಧಿಗಳು ಹಾಗೂ ಉಸ್ತುವಾರಿ ಸಚಿವರು ನೀಡುವ ಸಲಹೆ ಸೂಚನೆಗಳನ್ನು ಬಿ.ಆರ್. ಶೆಟ್ಟಿ ಆಸ್ಪತ್ರೆಯವರು ಪಾಲಿಸಬೇಕು. ಈ ಆಸ್ಪತ್ರೆಯಲ್ಲಿರುವ ಸಮಸ್ಯೆಗಳನ್ನು ಪರಿಶೀಲಿಸಿ ಮುಂದಿನ ಕ್ರಮ ಜರಗಿಸಲಾಗುವುದು ಎಂದರು.