ನಾಡಪ್ರಭು ಕೆಂಪೇಗೌಡ ಪ್ರಶಸ್ತಿ: ಹೈಕೋರ್ಟ್‌ಗೆ ಪಿಐಎಲ್ ಸಲ್ಲಿಕೆ

Update: 2018-09-30 16:17 GMT

ಬೆಂಗಳೂರು, ಸೆ.30: ಬಿಬಿಎಂಪಿಯು ವಿವಿಧ ಕ್ಷೇತ್ರದಲ್ಲಿ ಸಾಧನೆ ಮಾಡಿದವರಿಗೆ ಪ್ರದಾನಿಸುವ ನಾಗರೀಕ ಪುರಸ್ಕಾರವಾದ ನಾಡಪ್ರಭು ಕೆಂಪೇಗೌಡ ಪ್ರಶಸ್ತಿಯ ವಿರುದ್ಧ ಹೈಕೋರ್ಟ್‌ಗೆ ಸಾರ್ವಜನಿಕ ಹಿತಾಸಕ್ತಿ ಅರ್ಜಿ ಸಲ್ಲಿಸಲಾಗಿದೆ.

ಬಿಬಿಎಂಪಿಯು ಇತ್ತೀಚೆಗೆ ಯಾವುದೇ ನಿರ್ದಿಷ್ಟ ಮಾನದಂಡಗಳಿಲ್ಲದೆ 500ಕ್ಕೂ ಹೆಚ್ಚು ಜನರಿಗೆ ಕೆಂಪೇಗೌಡ ಪ್ರಶಸ್ತಿ ನೀಡಿದ ಹಿನ್ನೆಲೆಯಲ್ಲಿ ಬೆಂಗಳೂರಿನ ಜೆ.ಪಿ.ನಗರ 2ನೇ ಹಂತದ ನಿವಾಸಿ ಕೆ.ಅನಿಲ್ ಕುಮಾರ್ ಶೆಟ್ಟಿ ಹೈಕೋರ್ಟ್‌ಗೆ ಸಾರ್ವಜನಿಕ ಹಿತಾಸಕ್ತಿ ಅರ್ಜಿ ಸಲ್ಲಿಸಿದ್ದಾರೆ.

ವಿವಿಧ ಕ್ಷೇತ್ರದಲ್ಲಿ ಸಾಧನೆ ಮಾಡಿದವರನ್ನು ಗುರುತಿಸಿ, ಕೆಂಪೇಗೌಡ ಪ್ರಶಸ್ತಿಗೆ ಅರ್ಹರಾದವರ ಹೆಸರು ಪರಿಶೀಲಿಸಿ ಪಟ್ಟಿ ನೀಡಲು ನ್ಯಾಯಾಧೀಶರ ಹಾಗೂ ಭಾರತ ಸರಕಾರ ನೀಡುವ ನಾಗರೀಕ ಪುರಸ್ಕಾರದ ಆಯ್ಕೆ ಸಮಿತಿಯಲ್ಲಿ ಕೆಲಸ ಮಾಡಿದ ಸದಸ್ಯರನ್ನು ಒಳಗೊಂಡ ಪರಿಶೀಲನಾ ಸಮಿತಿ ರಚಿಸಬೇಕು. ಅಲ್ಲದೆ, ಪ್ರಶಸ್ತಿ ಆಯ್ಕೆಗೆ ನಿರ್ದಿಷ್ಟ ಮಾನದಂಡ ರೂಪಿಸಲು ಬಿಬಿಎಂಪಿಗೆ ಆದೇಶಿಸಬೇಕು ಎಂದು ಅರ್ಜಿದಾರರು ಕೋರಿದ್ದಾರೆ.

ಈ ಅರ್ಜಿಯಲ್ಲಿ ಬೃಹತ್ ಬೆಂಗಳೂರು ಮಹಾನಗರ ಪಾಲಿಕೆಯನ್ನು ಪ್ರತಿವಾದಿಯಾಗಿ ಸೇರ್ಪಡೆ ಮಾಡಲಾಗಿದೆ. ಅರ್ಜಿಯು ಶೀಘ್ರ ಮುಖ್ಯ ನ್ಯಾಯಮೂರ್ತಿ ಅವರ ನೇತೃತ್ವದ ವಿಭಾಗೀಯ ಪೀಠದ ಮುಂದೆ ವಿಚಾರಣೆಗೆ ಬರುವ ಸಾಧ್ಯತೆ ಇದೆ. 2017-18ನೆ ಸಾಲಿನ ಕೆಂಪೇಗೌಡ ಪ್ರಶಸ್ತಿ ಮೊದಲಿಗೆ 328 ಸಾಧಕರನ್ನು ಆಯ್ಕೆ ಮಾಡಿ ಪಟ್ಟಿ ಬಿಡುಗಡೆ ಮಾಡಿದ್ದ ಬಿಬಿಬಿಎಂಪಿ, ಸೆ.1ರಂದು ಬಿಬಿಎಂಪಿಯಲ್ಲಿ ಪ್ರಶಸ್ತಿ ಪ್ರದಾನ ಮಾಡಲಾಯಿತು. ಈ ವೇಳೆ 500ಕ್ಕೂ ಹೆಚ್ಚು ಜನರಿಗೆ ಪ್ರಶಸ್ತಿ ಪ್ರದಾನ ಮಾಡಲಾಯಿತು. ಪ್ರಶಸ್ತಿ ಪ್ರದಾನ ಕಾರ್ಯಕ್ರಮದ ಮಧ್ಯೆಯೇ ಹಲವು ಜನರ ಹೆಸರು ಪ್ರಶಸ್ತಿ ಆಯ್ಕೆ ಪಟ್ಟಿಗೆ ಹೆಸರು ಸೇರಿಸಲಾಯಿತು ಎಂದು ಅರ್ಜಿಯಲ್ಲಿ ತಿಳಿಸಲಾಗಿದೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News