ಬೆಂಗಳೂರು: ಪತ್ನಿಯ ಹತ್ಯೆಗೈದು ಆತ್ಮಹತ್ಯೆಗೆ ಯತ್ನ
Update: 2018-10-02 19:32 IST
ಬೆಂಗಳೂರು, ಅ.2: ಪತ್ನಿಯನ್ನು ಕೊಲೆಗೈದು ಪತಿ ಆತ್ಮಹತ್ಯೆಗೆ ಯತ್ನಿಸಿದ ಘಟನೆ ಇಲ್ಲಿನ ಕೋಣನಕುಂಟೆ ಪೊಲೀಸ್ ಠಾಣಾ ವ್ಯಾಪ್ತಿ ನಡೆದಿದೆ.
ಕೋಣನಕುಂಟೆ ರಾಯಲ್ ಕೌಂಟಿ ಅಪಾರ್ಟ್‌ಮೆಂಟ್ ನಿವಾಸಿ ಗೀತಾ ಕೊಲೆಯಾದ ಮಹಿಳೆಯಾಗಿದ್ದು, ಈಕೆಯ ಪತಿ ಕುಮಾರ್ ಈ ಕೃತ್ಯವೆಸಗಿ, ಆತ್ಮಹತ್ಯೆಗೆ ಯತ್ನಿಸಿ, ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವುದಾಗಿ ತಿಳಿದುಬಂದಿದೆ.
ಭದ್ರತಾ ಸಿಬ್ಬಂದಿ ಕೆಲಸ ಮಾಡುತ್ತಿದ್ದ ಕುಮಾರ್ ಮತ್ತು ಗೀತಾ ನಡುವೆ ಜಗಳ ನಡೆಯುತ್ತಿತ್ತು. ಸೋಮವಾರ ಕ್ಷುಲ್ಲಕ ವಿಚಾರಕ್ಕೆ ಜಗಳ ನಡೆದಾಗ ಕೋಪಗೊಂಡ ಕುಮಾರ್ ಪತ್ನಿಯನ್ನು ಚಾಕುವಿನಿಂದ ಇರಿದು ಕೊಲೆ ಮಾಡಿ, ತಾನೂ ಆತ್ಮಹತ್ಯೆಗೆ ಯತ್ನಿಸಿದ್ದಾನೆ.
ಸದ್ಯ ಪ್ರಾಣಾಪಾಯದಿಂದ ಪಾರಾಗಿರುವ ಕುಮಾರ್‌ನನ್ನು ವಿಕ್ಟೋರಿಯಾ ಆಸ್ಪತ್ರೆಗೆ ದಾಖಲಿಸಲಾಗಿದೆ. ಈ ಸಂಬಂಧ ಕೋಣನಕುಂಟೆ ಪೊಲೀಸರು ಪ್ರಕರಣ ದಾಖಲಿಸಿಕೊಂಡು ತನಿಖೆ ಕೈಗೊಂಡಿದ್ದಾರೆ.