×
Ad

ಅ.5ಕ್ಕೆ ಬಹರೇನ್‌ನಲ್ಲಿ ಪ್ರಥಮ ಅಂತರ್‌ರಾಷ್ಟ್ರೀಯ ಕನ್ನಡ ಸಾಹಿತ್ಯ ಸಮ್ಮೇಳನ

Update: 2018-10-02 20:48 IST
ಸಾಂದರ್ಭಿಕ ಚಿತ್ರ

ಬೆಂಗಳೂರು, ಅ. 2: ಕನ್ನಡ ಸಾಹಿತ್ಯ ಪರಿಷತ್ತು, ಕನ್ನಡ ವಿಶ್ವವಿದ್ಯಾಲಯ ಹಂಪಿ ಹಾಗೂ ಕನ್ನಡ ಸಂಘದ ಆಶ್ರಯದಲ್ಲಿ ಇದೇ ಮೊದಲ ಬಾರಿಗೆ ಬಹರೇನ್‌ನಲ್ಲಿ ಅಂತರ್‌ರಾಷ್ಟ್ರೀಯ ಕನ್ನಡ ಸಾಹಿತ್ಯ ಸಮ್ಮೇಳನವನ್ನು ಅ.5ರಿಂದ ಎರಡು ದಿನಗಳವರೆಗೆ ಹಮ್ಮಿಕೊಂಡಿರುವುದಾಗಿ ಕನ್ನಡ ಸಾಹಿತ್ಯ ಪರಿಷತ್ತು ತಿಳಿಸಿದೆ.

ಕನ್ನಡ ಸಂಸ್ಕೃತಿ ಹಾಗೂ ಮಹಿಳಾ, ಮಕ್ಕಳ ಅಭಿವೃದ್ಧಿ ಸಚಿವೆ ಡಾ.ಜಯಮಾಲ ಕಾರ್ಯಕ್ರಮವನ್ನು ಉದ್ಘಾಟಿಸಲಿದ್ದು, ಕನ್ನಡ ಸಾಹಿತ್ಯ ಪರಿಷತ್ತಿನ ಅಧ್ಯಕ್ಷ ಡಾ.ಮನು ಬಳಿಗಾರ್ ಅಧ್ಯಕ್ಷತೆ ವಹಿಸಲಿದ್ದಾರೆ. ಅಲ್ಲದೆ, ಸಾಹಿತಿ ಎಚ್.ಎಸ್. ವೆಂಕಟೇಶಮೂರ್ತಿ, ಕನ್ನಡ ಅಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಎಸ್.ಜಿ.ಸಿದ್ದರಾಮಯ್ಯ, ಹಂಪಿ ಕನ್ನಡ ವಿಶ್ವವಿದ್ಯಾಲಯದ ಕುಲಪತಿ ಡಾ.ಮಲ್ಲಿಕಾ ಘಂಟಿ, ಬಹರೇನ್ ಕನ್ನಡ ಸಂಘದ ಅಧ್ಯಕ್ಷ ಪ್ರದೀಪ್ ಶೆಟ್ಟಿ ಸಮಾರಂಭದಲ್ಲಿ ಪಾಲ್ಗೊಳ್ಳಲಿದ್ದಾರೆ.

ಅ.6ರ ಸಂಜೆ 6.30ಕ್ಕೆ ಸಮ್ಮೇಳನ ಸಮಾರೋಪ ಸಮಾರಂಭ ಜರುಗಲಿದ್ದು, ವಸತಿ ಹಾಗೂ ನಗರಾಭಿವೃದ್ಧಿ ಸಚಿವ ಯು.ಟಿ.ಖಾದರ್ ಅತಿಥಿಗಳಾಗಿ ಪಾಲ್ಗೊಳ್ಳಲಿದ್ದಾರೆ. ಡಾ.ಎಲ್.ಹನುಮಂತಯ್ಯ ಸಮಾರೋಪ ನುಡಿಗಳನ್ನಾಡಲಿದ್ದಾರೆ.

ಗಲ್ಫ್ ಕನ್ನಡಿಗರ ಸ್ಥಿತಿಗತಿ, ಕನ್ನಡ ಸಾಹಿತ್ಯದಲ್ಲಿ ಹಾಸ್ಯ, ವಿಶ್ವಭಾರತಿಗೆ ಕನ್ನಡದಾರತಿ ಎಂಬ ಮೂರು ಗೋಷ್ಠಿಗಳಲ್ಲಿ ಪ್ರಸಿದ್ಧ ವಿದ್ವಾಂಸರು ಉಪನ್ಯಾಸಗಳನ್ನು ನೀಡಲಿದ್ದಾರೆ. ಹಾಗೂ ಕನ್ನಡ ಸಾಹಿತ್ಯ, ಸಂಸ್ಕೃತಿ, ವಿದೇಶಿ ಕನ್ನಡಿಗರ ಸಮಸ್ಯೆ, ಶಿಕ್ಷಣ ಮಾಧ್ಯಮ ಉಪನ್ಯಾಸಗಳನ್ನೂ ಏರ್ಪಡಿಸಲಾಗಿದ್ದು, ದೇಶದ ವಿವಿಧ ರಾಜ್ಯಗಳ ಮತ್ತು ಬಹರೇನ್, ದುಬೈನಲ್ಲಿರುವ ಕನ್ನಡಿಗರು ಸೇರಿದಂತೆ 600ಕ್ಕೂ ಅಧಿಕ ಮಂದಿ ಸಮ್ಮೇಳನದಲ್ಲಿ ಭಾಗವಹಿಸಲಿದ್ದಾರೆ ಎಂದು ಪ್ರಕಟನೆ ತಿಳಿಸಿದೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News