ಲೋಕಸಭಾ ಚುನಾವಣೆ: ಈ ಬಾರಿ ಬೆಂಗಳೂರು ದಕ್ಷಿಣದಲ್ಲಿ ಅನಂತ್ ಕುಮಾರ್ ಸ್ಪರ್ಧೆಯಿಲ್ಲ?

Update: 2018-10-03 10:21 GMT

ಬೆಂಗಳೂರು, ಅ.3: ಕೇಂದ್ರ ಸಂಸದೀಯ ವ್ಯವಹಾರಗಳ ಸಚಿವ ಅನಂತ್ ಕುಮಾರ್ ಅವರು ಅಮೆರಿಕದ ನ್ಯೂಯಾರ್ಕ್ ನ ಆಸ್ಪತ್ರೆಯೊಂದರಲ್ಲಿ ಗಂಭೀರ ಕಾಯಿಲೆಗೆ ಚಿಕಿತ್ಸೆ ಪಡೆಯುತ್ತಿದ್ದಾರೆ. ಈ ಹಿನ್ನೆಲೆಯಲ್ಲಿ ಈ ಬಾರಿಯ ಲೋಕಸಭಾ ಚುನಾವಣೆಯಲ್ಲಿ ಬೆಂಗಳೂರು ದಕ್ಷಿಣ ಕ್ಷೇತ್ರದಿಂದ ಅವರು ಸ್ಪರ್ಧಿಸುವುದಿಲ್ಲ ಎನ್ನಲಾಗಿದೆ. ಬೆಂಗಳೂರು ದಕ್ಷಿಣ ಕ್ಷೇತ್ರಕ್ಕೆ ಸೂಕ್ತ ಅಭ್ಯರ್ಥಿಯ ಹುಡುಕಾಟವನ್ನು ಬಿಜೆಪಿ ಈಗಾಗಲೇ ಆರಂಭಿಸಿದೆ ಎಂದು ತಿಳಿದುಬಂದಿದೆ. ಆದರೆ ಈ ಬಗ್ಗೆ ಬಿಜೆಪಿ ಯಾವುದೇ ಅಧಿಕೃತ ಹೇಳಿಕೆ ನೀಡಿಲ್ಲ.

“ಲೋಕಸಭಾ ಚುನಾವಣೆಯಲ್ಲಿ ಸ್ಪರ್ಧಿಸಲು ಅನಂತ್ ಕುಮಾರ್ ಅವರ ಆರೋಗ್ಯವು ಸಮಸ್ಯೆಯಾಗಬಹುದು. ಆದರೆ ಬೆಂಗಳೂರು ದಕ್ಷಿಣದಲ್ಲಿ ಬಿಜೆಪಿ ಅಭ್ಯರ್ಥಿಯ ಬಗ್ಗೆ ಯಾವುದೇ ನಿರ್ಧಾರವಾಗಿಲ್ಲ” ಎಂದು ಬಿಜೆಪಿ ನಾಯಕರೊಬ್ಬರು ಹೇಳಿದ್ದಾಗಿ ಮಾಧ್ಯಮವೊಂದು ವರದಿ ಮಾಡಿತ್ತು.

1996ರಿಂದ ಬೆಂಗಳೂರು ದಕ್ಷಿಣದಲ್ಲಿ ಬಿಜೆಪಿ ಜಯಭೇರಿ ಬಾರಿಸುತ್ತಾ ಬಂದಿದೆ. 1991ರಿಂದ ಒಂದು ಬಾರಿಯೂ ಬಿಜೆಪಿ ಇಲ್ಲಿ ಸೋತಿಲ್ಲ. ತೀವ್ರ ಅನಾರೋಗ್ಯದಿಂದ ಬಳಲುತ್ತಿರುವ ಅನಂತ್ ಕುಮಾರ್ ಅಮೆರಿಕದಲ್ಲಿ ಚಿಕಿತ್ಸೆ ಪಡೆಯುತ್ತಿದ್ದು, ಲೋಕಸಭಾ ಚುನಾವಣೆಯ ಪ್ರಚಾರದಲ್ಲಿ ಭಾಗವಹಿಸುವುದು, ಚುನಾವಣೆಯಲ್ಲಿ ಸ್ಪರ್ಧಿಸುವುದು ಕಷ್ಟಸಾಧ್ಯ ಎನ್ನಲಾಗಿದೆ.

ಈ ಹಿನ್ನೆಲೆಯಲ್ಲಿ ಬಿಜೆಪಿಯು ಬೆಂಗಳೂರು ದಕ್ಷಿಣದಲ್ಲಿ ಹೊಸಮುಖಗಳನ್ನು ಅಥವಾ ಅನಂತ್ ಕುಮಾರ್ ಕುಟುಂಬ ಸದಸ್ಯರನ್ನು ಕಣಕ್ಕಿಳಿಸಲು ಸಿದ್ಧತೆ ನಡೆಸುತ್ತಿದೆ ಎಂದು ವರದಿಯಾಗಿದೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News