ರಾಜ್ಯದಲ್ಲಿ ಇನ್ನೂ ನಾಲ್ಕೈದು ದಿನ ಮಳೆ ಸಾಧ್ಯತೆ

Update: 2018-10-04 13:10 GMT
ಸಾಂದರ್ಭಿಕ ಚಿತ್ರ

ಬೆಂಗಳೂರು, ಅ.4: ಅರಬ್ಬಿ ಸಮುದ್ರ ಹಾಗೂ ಬಂಗಾಳಕೊಲ್ಲಿಯಲ್ಲಿ ಮೇಲ್ಮೈ ಸುಳಿಗಾಳಿ ಉಂಟಾಗಿರುವುದರಿಂದ ರಾಜ್ಯದ ದಕ್ಷಿಣ ಒಳನಾಡಿನಲ್ಲಿ ಮೋಡ ಕವಿದ ವಾತಾವರಣ ಕಂಡು ಬಂದಿದ್ದು, ಹಲವೆಡೆ ಸಾಧಾರಣ ಮಳೆಯಾಗುತ್ತಿದೆ ಎಂದು ಕರ್ನಾಟಕ ನೈಸರ್ಗಿಕ ವಿಕೋಪ ಉಸ್ತುವಾರಿ ಕೇಂದ್ರದ ನಿರ್ದೇಶಕ ಡಾ.ಜಿ.ಎಸ್.ಶ್ರೀನಿವಾಸರೆಡ್ಡಿ ಹೇಳಿದ್ದಾರೆ.

ರಾಜ್ಯದಲ್ಲಿ ಅ.5 ರಿಂದ ಮಳೆ ಪ್ರಮಾಣ ಅಧಿಕವಾಗುವ ಮುನ್ಸೂಚನೆಗಳಿದ್ದು, ಇನ್ನೂ ನಾಲ್ಕು-ಐದು ದಿನಗಳ ಕಾಲ ಮೋಡ ಕವಿದ ವಾತಾವರಣ ಮುಂದುವರಿಯುತ್ತದೆ. ಅರಬ್ಬಿ ಸಮುದ್ರದಲ್ಲಿ ಉಂಟಾಗಿರುವ ಸುಳಿಗಾಳಿ, ವಾಯುಭಾರ ಕುಸಿತ ಹಾಗೂ ಚಂಡಮಾರುತದಿಂದಾಗಿ ರಾಜ್ಯದಲ್ಲಿ ಮಳೆಯ ಮುನ್ಸೂಚನೆ ಕಾಣುತ್ತಿದೆ. ಅಲ್ಲದೆ, ತಮಿಳುನಾಡಿನ ಕರಾವಳಿ ಭಾಗದಲ್ಲಿ ಮೇಲ್ಮೈ ಸುಳಿಗಾಳಿ ಉಂಟಾಗಿದೆ ಎಂದು ಅವರು ತಿಳಿಸಿದ್ದಾರೆ.

ಅರಬ್ಬಿ ಸಮುದ್ರ ಹಾಗೂ ಬಂಗಾಳಕೊಲ್ಲಿ ಎರಡೂ ಕಡೆ ಏಕಕಾಲದಲ್ಲಿ ಉಂಟಾಗಿರುವ ಬದಲಾವಣೆಯಿಂದಾಗಿ ರಾಜ್ಯದ ದಕ್ಷಿಣ ಒಳನಾಡು, ಕರಾವಳಿ, ಮಲೆನಾಡು ಭಾಗಗಳಲ್ಲಿ ಮಳೆಯಾಗುವ ಮುನ್ಸೂಚನೆ ಕಂಡುಬರುತ್ತಿದೆ. ಈಗಾಗಲೇ ತಮಿಳುನಾಡಿನ ಚೆನ್ನೈನಲ್ಲಿ ಅಧಿಕ ಮಳೆಯಾಗುತ್ತಿದ್ದು, ಬೆಂಗಳೂರು, ಕೋಲಾರ, ಚಿಕ್ಕಬಳ್ಳಾಪುರ ಭಾಗಗಳಲ್ಲಿ ಕೆಲವೆಡೆ ತುಂತುರು ಮಳೆ ಆರಂಭವಾಗಿದೆ. ಶುಕ್ರವಾರ ಹಾಗೂ ಶನಿವಾರ ಹೆಚ್ಚಿನ ಮಳೆಯಾಗುವ ಮುನ್ಸೂಚನೆಗಳು ಕಂಡುಬರುತ್ತಿವೆ ಎಂದು ಅವರು ಹೇಳಿದ್ದಾರೆ. ಇಂದಿನಿಂದ ಮೂರು-ನಾಲ್ಕು ದಿನಗಳ ಕಾಲ ಸಾಧಾರಣ ಮಳೆಯಾಗಲಿದೆ ಎಂದು ಅವರು ತಿಳಿಸಿದ್ದಾರೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News