ಜನಾರ್ದನ ಪೂಜಾರಿ ವಿರುದ್ಧ ದಾಖಲಾಗಿದ್ದ ದೂರು ರದ್ದುಪಡಿಸಿದ ಹೈಕೋರ್ಟ್
ಬೆಂಗಳೂರು, ಅ.5: ಕಳೆದ ಲೋಕಸಭಾ ಚುನಾವಣೆ ವೇಳೆ ನೀತಿ ಸಂಹಿತೆ ಉಲ್ಲಂಘನೆ ಆರೋಪ ಸಂಬಂಧ ಕಾಂಗ್ರೆಸ್ ಮುಖಂಡ ಬಿ.ಜನಾರ್ದನ ಪೂಜಾರಿ ಅವರ ವಿರುದ್ಧ ದಾಖಲಾಗಿದ್ದ ದೂರು ಮತ್ತದರ ಅಧೀನ ನ್ಯಾಯಾಲಯದ ವಿಚಾರಣೆಯನ್ನು ಹೈಕೋರ್ಟ್ ರದ್ದುಪಡಿಸಿದೆ.
ತಮ್ಮ ವಿರುದ್ಧ ಪ್ರಕರಣ ರದ್ದುಪಡಿಸುವಂತೆ ಕೋರಿ ಜನಾರ್ದನ ಪೂಜಾರಿ ಸಲ್ಲಿಸಿದ್ದ ಅರ್ಜಿಯನ್ನು ಪುರಸ್ಕರಿಸಿದ ನ್ಯಾಯಮೂರ್ತಿ ಪಿ.ಎಸ್.ದಿನೇಶ್ ಕುಮಾರ್ ಅವರಿದ್ದ ಏಕಸದಸ್ಯ ನ್ಯಾಯಪೀಠ, ಪ್ರಕರಣ ಕುರಿತು ಮಂಗಳೂರು ಉತ್ತರ ಪೊಲೀಸ್ ಠಾಣೆಯಲ್ಲಿ ಪೂಜಾರಿ ವಿರುದ್ಧ ದಾಖಲಾಗಿದ್ದ ದೂರು ಮತ್ತದರ ಮಂಗಳೂರು 2ನೇ ಹೆಚ್ಚುವರಿ ಜೆಎಂಎಫ್‌ಸಿ ಕೋರ್ಟ್ ವಿಚಾರಣೆಯನ್ನು ರದ್ದುಪಡಿಸಿತು.
2014ರಲ್ಲಿ ನಡೆದ ಲೋಕಸಭೆ ಚುನಾವಣೆಯಲ್ಲಿ ಮಂಗಳೂರು ಕ್ಷೇತ್ರದಿಂದ ಕಾಂಗ್ರೆಸ್ ಅಭ್ಯರ್ಥಿಯಾಗಿ ಬಿ.ಜನಾರ್ದನ ಪೂಜಾರಿ ಅವರು ಸ್ಪರ್ಧಿಸಿದ್ದರು. 2014ರ ಮಾ.26ರಂದು ಅವರು ನಾಮಪತ್ರ ಸಲ್ಲಿಸಿದ್ದರು. ನಾಮಪತ್ರ ಸಲ್ಲಿಸಿದ ನಂತರ ಕಾಂಗ್ರೆಸ್ ಕಚೇರಿಯಲ್ಲಿ ಪತ್ರಿಕಾಗೋಷ್ಠಿ ನಡೆಸುವ ಮೂಲಕ ಪೂಜಾರಿ ಅವರು ಚುನಾವಣಾ ನೀತಿ ಸಂಹಿತೆ ಉಲ್ಲಂಘಿಸಿದ್ದಾರೆ ಎಂದು ಆರೋಪಿಸಿ ಜಿ.ವಿ.ರಾಜಶೇಖರ್ ಎಂಬವರು ಮಂಗಳೂರು ಉತ್ತರ ಠಾಣಾ ಪೊಲೀಸರಿಗೆ ಜನಪ್ರತಿನಿಧಿಗಳ ಕಾಯ್ದೆ ಮತ್ತು ಭಾರತೀಯ ದಂಡ ಸಂಹಿತೆ ಕಾಯ್ದೆಯ ವಿವಿಧ ಸೆಕ್ಷನ್‌ಗಳಡಿ ದೂರು ದಾಖಲಿಸಿದ್ದರು.
ಆ ದೂರಿನ್ವಯ ಪೂಜಾರಿ ಅವರ ವಿರುದ್ಧ ಎಫ್‌ಐಆರ್ ದಾಖಲಿಸಿದ್ದ ಪೊಲೀಸರು ತನಿಖೆ ಕೈಗೊಂಡು, ಅಧೀನ ನ್ಯಾಯಾಲಯಕ್ಕೆ ದೋಷಾರೋಪ ಪಟ್ಟಿ ಸಲ್ಲಿಸಿದ್ದರು. ಪ್ರಕರಣದ ವಿಚಾರಣೆ ನಡೆಸಿದ್ದ ಮಂಗಳೂರು 2ನೆ ಹೆಚ್ಚುವರಿ ಜೆಎಂಎಫ್‌ಸಿ ನ್ಯಾಯಾಲಯವು ಪೂಜಾರಿ ಅವರಿಗೆ 2015ರ ಅ.1ರಂದು ಸಮನ್ಸ್ ಜಾರಿ ಮಾಡಿ ವಿಚಾರಣೆಗೆ ಹಾಜರಾಗುವಂತೆ ನಿರ್ದೇಶಿಸಿತ್ತು.
ಅಧೀನ ನ್ಯಾಯಾಲಯ ಜಾರಿಗೊಳಿಸಿದ ಆ ಸಮನ್ಸ್ ಮತ್ತು ತಮ್ಮ ವಿರುದ್ಧದ ಪ್ರಕರಣ ರದ್ದುಪಡಿಸುವಂತೆ ಕೋರಿ 2015ರಲ್ಲಿ ಪೂಜಾರಿ ಅವರು ಹೈಕೋರ್ಟ್‌ಗೆ ಕ್ರಿಮಿನಲ್ ಅರ್ಜಿ ಸಲ್ಲಿಸಿದ್ದರು. ಈ ಅರ್ಜಿಯನ್ನು ಪುರಸ್ಕರಿಸಿದ ಹೈಕೋರ್ಟ್, ಅವರ ವಿರುದ್ಧದ ಚುನಾವಣಾ ನೀತಿ ಸಂಹಿತೆ ಉಲ್ಲಂಘನೆ ಪ್ರಕರಣ ರದ್ದುಪಡಿಸಿದೆ.