×
Ad

ಆಳ್ವಾಸ್ ವಸತಿ ಕಾಲೇಜು ವಿದ್ಯಾರ್ಥಿನಿಯರ ಆತ್ಮಹತ್ಯೆ ಪ್ರಕರಣ: ಹೈಕೋರ್ಟ್‌ಗೆ ತನಿಖಾ ವರದಿ ಸಲ್ಲಿಕೆ

Update: 2018-10-05 21:53 IST

ಬೆಂಗಳೂರು, ಅ.5: ದಕ್ಷಿಣ ಕನ್ನಡ ಜಿಲ್ಲೆಯ ಮೂಡುಬಿದಿರೆಯ ಆಳ್ವಾಸ್ ವಸತಿ ಕಾಲೇಜು ವಿದ್ಯಾರ್ಥಿನಿಯರ ಆತ್ಮಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ತನಿಖಾ ವರದಿಯನ್ನು ತನಿಖಾಧಿಕಾರಿಗಳು ಹೈಕೋರ್ಟ್‌ಗೆ ಸಲ್ಲಿಸಿದ್ದಾರೆ.

ಮೃತ ವಿದ್ಯಾರ್ಥಿನಿಯರಾದ ಕಾವ್ಯ ಪೂಜಾರಿ ಹಾಗೂ ರಚನಾ ಮಂಜುನಾಥ್ ಪಾಲಕರು ಸಲ್ಲಿಸಿರುವ ಅರ್ಜಿ ವಿಚಾರಣೆ ನಡೆಸಿದ ನ್ಯಾಯಮೂರ್ತಿ ಬಿ.ವಿ. ನಾಗರತ್ನ ಅವರಿದ್ದ ಪೀಠಕ್ಕೆ ಸರಕಾರಿ ವಕೀಲ ವಿ. ಶ್ರೀನಿಧಿ, ತನಿಖೆಗೆ ಸಂಬಂಧಿಸಿದ ವಸ್ತುಸ್ಥಿತಿ ವರದಿಯನ್ನು ಮುಚ್ಚಿದ ಲಕೋಟೆಯಲ್ಲಿ ಸಲ್ಲಿಸಿದರು.

ಮುಚ್ಚಿದ ಲಕೋಟೆಯಲ್ಲಿ ವರದಿ ಸಲ್ಲಿಸಿದರೆ ಅರ್ಜಿದಾರರ ಪರ ವಕೀಲರು ಹೇಗೆ ವಾದ ಮಂಡಿಸಲು ಸಾಧ್ಯ. ಪ್ರತಿಯನ್ನು ಅವರಿಗೂ ಒದಗಿಸಿದರೆ ಅದರ ಆಧಾರದ ಮೇಲೆ ಅರ್ಜಿದಾರರ ವಾದವನ್ನೂ ಆಲಿಸಿ ನ್ಯಾಯಾಲಯ ಆದೇಶ ನೀಡಬಹುದಲ್ಲವೇ ಎಂದು ಪ್ರಶ್ನಿಸಿತು.

ಇದಕ್ಕೆ ಉತ್ತರಿಸಿದ ಶ್ರೀನಿಧಿ, ಪ್ರಕರಣವಿನ್ನೂ ತನಿಖಾ ಹಂತದಲ್ಲಿದ್ದು, ಈ ಹಂತದಲ್ಲೇ ವರದಿಯನ್ನು ಬಹಿರಂಗಪಡಿಸಲು ಸಾಧ್ಯವಿಲ್ಲ. ಅಲ್ಲದೆ, ಪ್ರಕರಣಕ್ಕೆ ಸಂಬಂಧಿಸಿದಂತೆ 20ಕ್ಕೂ ಹೆಚ್ಚು ವಿದ್ಯಾರ್ಥಿಗಳ ಹೇಳಿಕೆಗಳನ್ನು ಪಡೆಯಲಾಗಿದ್ದು, ಹೆಸರುಗಳು ಬಹಿರಂಗವಾದರೆ ಅವರಿಗೆ ತೊಂದರೆಯಾಗುವ ಸಾಧ್ಯತೆ ಇದೆ. ಮೇಲಾಗಿ ತನಿಖಾಧಿಕಾರಿಗಳು ಪ್ರಕರಣವನ್ನು ಸಮರ್ಪಕವಾಗಿ ನಿಭಾಯಿಸುತ್ತಿದ್ದು, ಸಿಬಿಐಗೆ ವಹಿಸುವ ಅಗತ್ಯವಿಲ್ಲ ಎಂದರು.

ಇದರಿಂದ ನ್ಯಾಯಪೀಠ, ತನಿಖಾಧಿಕಾರಿಗಳು ಪ್ರಕರಣದ ತನಿಖೆಯನ್ನು ಸರಿಯಾಗಿ ನಡೆಸುತ್ತಿಲ್ಲ ಎಂಬ ನಿಮ್ಮ ಆಕ್ಷೇಪಣೆಯನ್ನು ಹಾಗೂ ಯಾವ ಆಧಾರದ ಮೇಲೆ ತನಿಖೆಯನ್ನು ಸಿಬಿಐಗೆ ವಹಿಸಬೇಕಿದೆ ಎಂಬುದನ್ನು ಮುಂದಿನ ವಿಚಾರಣೆ ವೇಳೆ ನ್ಯಾಯಾಲಯಕ್ಕೆ ಮನವರಿಕೆ ಮಾಡಿಕೊಡುವಂತೆ ಅರ್ಜಿದಾರರ ಪರ ವಕೀಲರಿಗೆ ಸೂಚಿಸಿ, ವಿಚಾರಣೆಯನ್ನು ಅ.29ಕ್ಕೆ ಮುಂದೂಡಿತು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News