ಚಿಕ್ಕಮಗಳೂರು: ಪರಿಶಿಷ್ಟರ ವಿರುದ್ಧದ ದೌರ್ಜನ್ಯ ಅರ್ಜಿಗಳ ನಿರ್ಲಕ್ಷ್ಯಿಸಿದರೆ ಶಿಸ್ತು ಕ್ರಮ; ಜಿಲ್ಲಾಧಿಕಾರಿ ಎಚ್ಚರಿಕೆ

Update: 2018-10-07 17:44 GMT

ಚಿಕ್ಕಮಗಳೂರು, ಅ.7: ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡಗಳ ದೌರ್ಜನ್ಯ ನಿಯಂತ್ರಣ ಜಿಲ್ಲಾ ಜಾಗೃತ ಉಸ್ತುವಾರಿ ಸಮಿತಿ ಸಭೆಗೆ ಹಾಜರಾಗದೇ ನಿರ್ಲಕ್ಷ್ಯ ವಹಿಸದ ಅಧಿಕಾರಿಗಳ ವಿರುದ್ಧ ಕಟ್ಟುನಿಟ್ಟಿನ ಕ್ರಮ ಜರಗಿಸಲಾಗುವುದು ಎಂದು ಜಿಲ್ಲಾಧಿಕಾರಿ ಎಂ.ಕೆ.ಶ್ರೀರಂಗಯ್ಯ ಎಚ್ಚರಿಕೆ ನೀಡಿದರು.

ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಶನಿವಾರ ನಡೆದ ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡಗಳ ದೌರ್ಜನ್ಯ ನಿಯಂತ್ರಣ ಜಿಲ್ಲಾ ಜಾಗೃತಿ ಉಸ್ತುವಾರಿ ಸಮಿತಿ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು, ಅಧಿಕಾರಿಗಳು ಸಮಸ್ಯೆಗಳ ಪರಿಹಾರಕ್ಕಾಗಿ ತಮ್ಮ ಇಲಾಖೆಗಳಿಗೆ ಬರುವ ಅರ್ಜಿಗಳನ್ನು ವಿಳಂಬ ಮಾಡದೆ ಕೂಲಂಕುಶವಾಗಿ ಪರಿಶೀಲಿಸಿ ಕ್ರಮಕೈಗೊಳ್ಳಬೇಕು. ವಿಳಂಬವಾದರೆ ಅಂತಹ ಅಧಿಕಾರಿಗಳ ಮೇಲೆ ಶಿಸ್ತು ಕ್ರಮ ಕೈಗೊಳ್ಳಬಹುದಾಗಿದೆ ಎಂದರು.

ಗಂಗಾ ಕಲ್ಯಾಣ ಯೋಜನೆಯಡಿ ಕೊರೆದಿರುವ ಕೊಳವೆ ಬಾವಿಗಳಿಗೆ ಇದುವರೆಗೂ ವಿದ್ಯುತ್ ಸಂಪರ್ಕ ಹಾಗೂ ಮೋಟಾರ್ ಅಳವಡಿಸಿರುವುದಿಲ್ಲ ಎಂಬ ದೂರುಗಳು ಬರುತ್ತಿವೆ. ಈ ಸಂಬಂಧ ಇಲಾಖಾಧಿಕಾರಿಗಳು ಪರಿಶೀಲಿಸಿ ಕೂಡಲೇ ವಿದ್ಯುತ್ ಸಂಪರ್ಕ ಕಲ್ಪಿಸುವಂತೆ ಹಾಗೂ ಮೋಟಾರ್ ಅಳವಡಿಸುವಂತೆ ಸೂಚಿಸಿದ ಅವರು, ಈಗಾಗಲೇ ಉಪವಿಭಾಗಾಧಿಕಾರಿಗಳ ಅಧ್ಯಕ್ಷತೆಯಲ್ಲಿ ಆಯಾ ಉಪವಿಭಾಗಗಳಲ್ಲಿ ಹಾಗೂ ಎಲ್ಲಾ ತಾಲೂಕುಗಳ ತಹಶೀಲ್ದಾರರ ಅಧ್ಯಕ್ಷತೆಯಲ್ಲಿ ಸಭೆ ನಡೆಯುತ್ತಿದ್ದು, ಆಯಾ ತಾಲೂಕುಗಳಲ್ಲಿನ ಪರಿಶಿಷ್ಟರ ಸಮಸ್ಯೆಗಳಿಗೆ ಪರಿಹಾರ ಕಲ್ಪಿಸಲಾಗುತ್ತಿದೆ ಎಂದು ಹೇಳಿದರು.

ಜಿಲ್ಲೆಯಲ್ಲಿ ಅಂಬೇಡ್ಕರ್ ಹಾಗೂ ವಾಲ್ಮೀಕಿ ಭವನಗಳು ಮಂಜೂರಾಗಿರುವ ಹಳ್ಳಿಗಳಲ್ಲಿ ಭವನಗಳ ಕಾಮಗಾರಿ ಕಳಪೆಯಾಗಿದೆ ಎಂಬ ದುರುಗಳು ಬಂದಿವೆ ಎಂದ ಅವರು, ಈ ಸಂಬಂಧ ಪರಿಶೀಲಿಸಿ ಕ್ರಮಕೈಗೊಳ್ಳಲಾಗುವುದು. ಗುಣಮಟ್ಟದ ಭವನಗಳ ನಿರ್ಮಾಣಕ್ಕೆ ಸಂಬಂಧಿಸಿದ ಅಧಿಕಾರಿಗಳು, ಇಂಜಿನಿಯರ್ ಗಳು ಕ್ರಮವಹಿಸಬೇಕು. ಸ್ಮಶಾನಕ್ಕೆ ಸರಕಾರಿ ಭೂಮಿ ಇಲ್ಲದಿರುವ ಕಡೆ ಖಾಸಗಿ ಜಮೀನು  ಖರೀದಿಸಿ ನೀಡಲಾಗುವುದು ಎಂದರು.

ಅಂಬೇಡ್ಕರ್ ಅಭಿವೃದ್ಧಿ ನಿಗಮದಿಂದ ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡದ ನಿರುದ್ಯೋಗಿ ಯುವಕರಿಗೆ ಸ್ವಯಂ ಉದ್ಯೋಗ ಕೈಗೊಳ್ಳಲು ಸಾಲ ಮಂಜೂರು ಮಾಡಲಾಗಿದೆ. ಆದರೆ ಸಾಲ ನೀಡಲು ಬ್ಯಾಂಕುಗಳು ಹಿಂದೇಟು ಹಾಕುತ್ತಿವೆ ಎಂಬ ದೂರಿಗೆ ಪ್ರತಿಕ್ರಿಯಿಸಿದ ಜಿಲ್ಲಾಧಿಕಾರಿ, ಈ ಸಂಬಂಧ ಲೀಡ್ ಬ್ಯಾಂಕ್ ವ್ಯವಸ್ಥಾಪಕರ ಜೊತೆ ಮಾತನಾಡಿ, ಸಾಲ ನೀಡುವಂತೆ ತಿಳಿಸಲಾಗುವುದು ಎಂದು ಹೇಳಿದರು.

ಪರಿಶಿಷ್ಟ ಜಾತಿಯ ಕಾಲನಿಗಳಲ್ಲಿ ಪೊಲೀಸ್ ಇಲಾಖೆಯಿಂದ ತಿಂಗಳಿಗೊಮ್ಮೆ ಸಭೆ ನಡೆಸಿ ಅವರಿಗೆ ಕಾಲೋನಿಗಳ ಕುರಿತು ಮಾಹಿತಿ ನೀಡುವಂತೆ ಸದಸ್ಯರು ಕೋರಿದರು. ಇದಕ್ಕೆ ಜಿಲ್ಲಾಧಿಕಾರಿ ಪ್ರತಿಕ್ರಿಯಿಸಿ, ಈ ಸಂಬಂಧ ಈಗಾಗಲೇ ಪ್ರತೀ ಗ್ರಾಮ ಪಂಚಾಯತ್ ಮಟ್ಟದಲ್ಲಿ ಪೊಲೀಸ್ ಇಲಾಖೆಯಿಂದ ಬೀಟ್ ಸಭೆಗಳನ್ನು ಮಾಡಲಾಗುತ್ತಿದೆ ಎಂದರು.

ಸಭೆಯಲ್ಲಿ ಸಮಾಜ ಕಲ್ಯಾಣ ಇಲಾಖೆ ಉಪನಿರ್ದೇಶಕ ಮಲ್ಲಿಕಾರ್ಜುನ್, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಮಲ್ಲಿಕಾರ್ಜುನಪ್ಪ ಸೇರಿದಂತೆ ವಿವಿಧ ಇಲಾಖೆಗಳ ಅಧಿಕಾರಿಗಳು ಹಾಗೂ ಸಮಿತಿಯ ಸದಸ್ಯರು ಉಪಸ್ಥಿತರಿದ್ದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News