ಅ.10ರಂದು ಬಾಲವನದಲ್ಲಿ ಡಾ.ಶಿವರಾಮ ಕಾರಂತರ ಜನ್ಮದಿನಾಚಣೆ, ಬಾಲವನ ಪ್ರಶಸ್ತಿ ಪ್ರದಾನ

Update: 2018-10-09 09:13 GMT

ಪುತ್ತೂರು, ಅ.9: ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಬೆಂಗಳೂರು, ಡಾ.ಶಿವರಾಮ ಕಾರಂತರ ಬಾಲವನ ಪರ್ಲಡ್ಕ, ಸಹಾಯಕ ಆಯುಕ್ತರ ಕಚೇರಿ ಪುತ್ತೂರು ಇವುಗಳ ಸಹಯೋಗದಲ್ಲಿ ಡಾ.ಶಿವರಾಮ ಕಾರಂತರ ಜನ್ಮ ದಿನಾಚರಣೆ ಹಾಗೂ ಬಾಲವನ ಪ್ರಶಸ್ತಿ ಪ್ರದಾನ ಸಮಾರಂಭ ಅ.10ರಂದು ಡಾ.ಶಿವರಾಮ ಕಾರಂತರ ಬಾಲವನದಲ್ಲಿ ನಡೆಯಲಿದೆ ಎಂದು ಉಪವಿಭಾಗಾಧಿಕಾರಿ ಎಚ್.ಕೆ.ಕೃಷ್ಣಮೂರ್ತಿ ತಿಳಿಸಿದ್ದಾರೆ.

ಅವರು ಮಂಗಳವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿ, ಕಾರ್ಯಕ್ರಮವನ್ನು ಬೆಳಗ್ಗೆ 10 ಗಂಟೆಗೆ ಜಿಲ್ಲಾ ಉಸ್ತುವಾರಿ ಸಚಿವ ಯು.ಟಿ.ಖಾದರ್ ಉದ್ಘಾಟಿಸಲಿದ್ದಾರೆ. ಶಾಸಕ ಸಂಜೀವ ಮಠಂದೂರು ಅಧ್ಯಕ್ಷತೆ ವಹಿಸಲಿದ್ದಾರೆ. ವಿಧಾನ ಪರಿಷತ್ ವಿಪಕ್ಷ ನಾಯಕ ಕೋಟ ಶ್ರೀನಿವಾಸ ಪೂಜಾರಿ, ಸಂಸದ ನಳಿನ್ ಕುಮಾರ್ ಕಟೀಲು ಸೇರಿದಂತೆ ಜಿಲ್ಲೆಯ ಎಲ್ಲಾ ಶಾಸಕರು, ವಿಧಾನ ಪರಿಷತ್ ಸದಸ್ಯರು, ಪುತ್ತೂರು ತಾಪಂ ಅಧ್ಯಕ್ಷರು, ನಗರಸಭೆಯ ಸ್ಥಳೀಯ ಸದಸ್ಯರು ಅತಿಥಿಗಳಾಗಿ ಭಾಗವಹಿಸಲಿದ್ದಾರೆ.

ಈ ಸಂದರ್ಭದಲ್ಲಿ ಬಾಲ ವಿಜ್ಞಾನಿಗಳಾದ ಮಂಗಳೂರು ಸಂತ ಅಲೋಶಿಯಸ್ ಪಿಯು ಕಾಲೇಜು ವಿದ್ಯಾರ್ಥಿ ಮುಹಮ್ಮದ್ ಸುಹೈಲ್ ಸಿ.ಎಲ್. ಮತ್ತು ವಿವೇಕಾನಂದ ಆಂಗ್ಲ ಮಾಧ್ಯಮ ಪ್ರೌಢಶಾಲೆಯ ವಿದ್ಯಾರ್ಥಿ ರಾಕೇಶ್ ಕೃಷ್ಣ ಕೆ. ಅವರನ್ನು ಅಭಿನಂದಿಸಲಾಗುವುದು ಎಂದರು.

ಬಳಿಕ ‘ಡಾ.ಶಿವರಾಮ ಕಾರಂತರ ಸೃಷ್ಟಿಶೀಲತೆ’ ವಿಷಯದಲ್ಲಿ ಹಿರಿಯ ಚಿಂತಕ ಲಕ್ಷ್ಮೀಶ ತೋಳ್ಪಾಡಿ ಉಪನ್ಯಾಸ ನೀಡಲಿದ್ದಾರೆ. ವಿಶ್ರಾಂತ ಉಪ ಕುಲಪತಿ ಡಾ.ಬಿ.ಎ.ವಿವೇಕ ರೈ ಅಧ್ಯಕ್ಷತೆ ವಹಿಸಲಿದ್ದಾರೆ.

ಸಂಜೆ ಬಾಲವನ ಪ್ರಶಸ್ತಿ ಪ್ರದಾನ ಸಮಾರಂಭ ನಡೆಯಲಿದ್ದು, ಉಡುಪಿ ಇಂದ್ರಾಳಿ ಶಿವಪ್ರಭಾ ಯಕ್ಷಗಾನ ಕೇಂದ್ರದ ನಿರ್ದೇಶಕ ಬನ್ನಂಜೆ ಸಂಜೀವ ಸುವರ್ಣರಿಗೆ 'ಬಾಲವನ ಪ್ರಶಸ್ತಿ' ನೀಡಿ ಗೌರವಿಸಲಾಗುವುದು. ರಾಜ್ಯ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಹಾಗೂ ಕನ್ನಡ ಮತ್ತು ಸಂಸ್ಕೃತಿ ಸಚಿವೆ ಡಾ.ಜಯಮಾಲಾ 'ರಾಮಚಂದ್ರ ಪ್ರಶಸ್ತಿ' ಪ್ರದಾನ ಮಾಡಲಿದ್ದಾರೆ. ಡಾ. ಶಿವರಾಮ ಕಾರಂತರ ಪುತ್ರಿ ಕ್ಷಮಾ ರಾವ್ ಅಭಿನಂದನಾ ನುಡಿಗಳನ್ನಾಡಲಿದ್ದಾರೆ. ಜಿಲ್ಲಾಧಿಕಾರಿ ಸಸಿಕಾಂತ್ ಸೆಂಥಿಲ್ ಅಧ್ಯಕ್ಷತೆ ವಹಿಸಲಿದ್ದಾರೆ. ಶಾಸಕ ಸಂಜೀವ ಮಠಂದೂರು, ದ.ಕ. ಜಿಪಂ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಡಾ. ಸೆಲ್ವಮನಿ ಆರ್., ದ.ಕ. ಜಿಲ್ಲಾ ಕಸಾಪ ಅಧ್ಯಕ್ಷ ಪ್ರದೀಪ್ ಕುಮಾರ್ ಕಲ್ಕೂರ, ಕಾರಂತರ ಪುತ್ರ ಉಲ್ಲಾಸ್ ಕಾರಂತ ಮತ್ತಿತರರು ಅತಿಥಿಗಳಾಗಿ ಭಾಗವಹಿಸಲಿದ್ದಾರೆ ಎಂದು ಅವರು ತಿಳಿಸಿದ್ದಾರೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News