ರಾಜ್ಯ ಹೆದ್ದಾರಿಗಳಲ್ಲಿ ಟೋಲ್ ಸಂಗ್ರಹಕ್ಕೆ ಖಂಡನೆ

Update: 2018-10-09 13:40 GMT
ಸಾಂದರ್ಭಿಕ ಚಿತ್ರ

ಬೆಂಗಳೂರು, ಅ.9: ರಾಜ್ಯಾದ್ಯಂತ 17 ರಾಜ್ಯ ಹೆದ್ದಾರಿಗಳಲ್ಲಿ ಟೋಲ್ ಸಂಗ್ರಹಿಸಲು ಮುಂದಾಗಿರುವ ರಾಜ್ಯ ಸರಕಾರದ ಕ್ರಮಕ್ಕೆ ವಾಹನ ಸವಾರರು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಈಗಾಗಲೇ ಪೆಟ್ರೋಲ್, ಡೀಸೆಲ್ ದರ ಏರಿಕೆಯಿಂದಾಗಿ ವಾಹನ ಸವಾರರು ತೀವ್ರ ಸಂಕಷ್ಟಕ್ಕೆ ಗುರಿಯಾಗಿದ್ದಾರೆ. ಅದರ ಬೆನ್ನಲ್ಲೇ ರಾಜ್ಯದ ಹೆದ್ದಾರಿಗಳಲ್ಲಿ ಟೋಲ್ ಸಂಗ್ರಹ ಮಾಡಲು ಸರಕಾರ ನಿರ್ಧಾರ ಮಾಡಿದೆ. ಈ ಕ್ರಮವನ್ನು ವಾಹನ ಸವಾರರು ತೀವ್ರವಾಗಿ ಖಂಡಿಸಿದ್ದು, ಕೂಡಲೇ ಹಿಂಪಡೆಯಬೇಕು ಎಂದು ಆಗ್ರಹಿಸಿದ್ದಾರೆ.

ರಾಜ್ಯದ 1,400 ಕಿ.ಮೀ.ಉದ್ದದ 17 ರಾಜ್ಯ ಹೆದ್ದಾರಿಗಳಲ್ಲಿ ಟೋಲ್ ಸಂಗ್ರಹ ಮಾಡುವ ಕಾರ್ಯಕ್ಕೆ ಈಗಾಗಲೇ ಚಾಲನೆ ಸಿಕ್ಕಿದೆ ಎಂದು ಸರಕಾರದ ಮೂಲಗಳು ಹೇಳಿವೆ. ಇದುವರೆಗೂ ರಾಷ್ಟ್ರೀಯ ಹೆದ್ದಾರಿಗಳಿಗೆ ಸೀಮಿತವಾಗಿದ್ದ ಟೋಲ್ ಸಂಗ್ರಹ ರಾಜ್ಯದ ಲೋಕೋಪಯೋಗಿ ಇಲಾಖೆ ವ್ಯಾಪ್ತಿಗೆ ಒಳಪಟ್ಟ ಕೆಶಿಪ್ ಮತ್ತು ಕೆಆರ್‌ಡಿಸಿಎಲ್ ಸಂಸ್ಥೆಗಳು ವಿಶ್ವಬ್ಯಾಂಕ್ ಹಾಗೂ ಏಷ್ಯನ್ ಅಭಿವೃದ್ಧಿ ಬ್ಯಾಂಕ್‌ನಿಂದ ಸಾಲ ಪಡೆದು ನಿರ್ಮಿಸಿರುವ 3, 800 ಕಿ.ಮೀ. ಉದ್ದದ 31 ರಸ್ತೆಗಳಿಗೆ ಟೋಲ್ ವಿಧಿಸಲು ಪ್ರಸ್ಥಾವನೆ ಸಲ್ಲಿಸಿದ್ದವು.

ಹಿಂದಿನ ಸರಕಾರದ ಅವಧಿಯಲ್ಲಿ ಮಾರ್ಚ್‌ನಲ್ಲಿ ಸಿದ್ದರಾಮಯ್ಯ ಅಧ್ಯಕ್ಷತೆಯಲ್ಲಿ ನಡೆದ ರಾಜ್ಯ ಸಚಿವ ಸಂಪುಟ ಸಭೆಯಲ್ಲಿ ಈ ಬಗ್ಗೆ ತೀರ್ಮಾನ ಮಾಡಲಾಗಿತ್ತು. ಸಭೆಯಲ್ಲಿ ರಾಜ್ಯದ 19 ರಾಜ್ಯ ಹೆದ್ದಾರಿಗಳಲ್ಲಿ ಟೋಲ್ ಸಂಗ್ರಹಕ್ಕೆ ಸಂಪುಟ ಅನುಮೋದನೆ ನೀಡಿತ್ತು. ಎರಡು ರಾಜ್ಯ ಹೆದ್ದಾರಿಗಳು ರಾಷ್ಟ್ರೀಯ ಹೆದ್ದಾರಿಗಳಲ್ಲಿ ವಿಲೀನಗೊಂಡಿವೆ. ಈ ಹಿನ್ನೆಲೆಯಲ್ಲಿ 17 ರಾಜ್ಯ ಹೆದ್ದಾರಿಗಳಲ್ಲಿ ಟೋಲ್ ಸಂಗ್ರಹ ಮಾಡಲು ಸರಕಾರ ನಿರ್ಧಾರ ಮಾಡಿದೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News