ಮುಝಫ್ಫರ್‌ಪುರ ಅತ್ಯಾಚಾರ ಪ್ರಕರಣ: ಬಿಹಾರದ ಮಾಜಿ ಸಚಿವೆಯ ನಿರೀಕ್ಷಣಾ ಜಾಮೀನು ಅರ್ಜಿ ತಿರಸ್ಕೃತ

Update: 2018-10-09 15:13 GMT

ಪಾಟ್ನ, ಅ.9: ಮುಝಫ್ಫರ್‌ಪುರದ ಬಾಲಕಿಯರ ಆಶ್ರಯಧಾಮದಲ್ಲಿ ನಡೆದ ಅತ್ಯಾಚಾರ ಪ್ರಕರಣಕ್ಕೆ ಸಂಬಂಧಿಸಿ ಬಿಹಾರದ ಮಾಜಿ ಸಚಿವೆ ಮಂಜು ವರ್ಮ ವಿರುದ್ಧ ಶಸ್ತ್ರಾಸ್ತ್ರ ಕಾಯ್ದೆಯಡಿ ದಾಖಲಿಸಲಾದ ಪ್ರಕರಣದ ಹಿನ್ನೆಲೆಯಲ್ಲಿ ಅವರು ನಿರೀಕ್ಷಣಾ ಜಾಮೀನು ಕೋರಿ ಸಲ್ಲಿಸಿದ್ದ ಅರ್ಜಿಯನ್ನು ಪಾಟ್ನಾ ಹೈಕೋರ್ಟ್ ಮಂಗಳವಾರ ತಿರಸ್ಕರಿಸಿದೆ.

 ಮುಝಫ್ಫರ್‌ಪುರದ ಬಾಲಕಿಯರ ಆಶ್ರಯಧಾಮದಲ್ಲಿದ್ದ 34 ಅಪ್ರಾಪ್ತ ವಯಸ್ಸಿನ ಬಾಲಕಿಯರ ಮೇಲೆ ಅತ್ಯಾಚಾರ ನಡೆದಿರುವುದಾಗಿ ಆಗಸ್ಟ್‌ನಲ್ಲಿ ದೂರು ಸಲ್ಲಿಸಲಾಗಿತ್ತು. ಪ್ರಕರಣದ ಪ್ರಮುಖ ಆರೋಪಿಯಾಗಿದ್ದ ಬೃಜೇಶ್ ಠಾಕೂರ್ ಸಚಿವೆ ವರ್ಮರ ಪತಿ ಚಂದ್ರೇಶ್ವರ ವರ್ಮರ ಜೊತೆ ನಿಕಟ ಸಂಪರ್ಕದಲ್ಲಿದ್ದ ಎಂಬ ಮಾಹಿತಿ ತನಿಖೆ ವೇಳೆ ತಿಳಿದುಬಂದಿತ್ತು. ಆ ಬಳಿಕ ಮಂಜು ವರ್ಮ ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡಿದ್ದರು. ಬಿಹಾರ ಪೊಲೀಸರು ಮಂಜು ವರ್ಮರ ಪತಿಯ ಮನೆ ಮೇಲೆ ನಡೆಸಿದ ದಾಳಿಯಲ್ಲಿ 50 ಕಾರ್ಟ್ರಿಡ್ಜ್‌ಗಳು ಪತ್ತೆಯಾಗಿದ್ದ ಹಿನ್ನೆಲೆಯಲ್ಲಿ ಸಚಿವೆ ಹಾಗೂ ಅವರ ಪತಿ ವಿರುದ್ಧ ಎಫ್‌ಐಆರ್ ದಾಖಲಿಸಿ ಶಸ್ತ್ರಾಸ್ತ್ರ ಕಾಯ್ದೆಯಡಿ ಪ್ರಕರಣ ದಾಖಲಿಸಲಾಗಿತ್ತು.

 ನಿರೀಕ್ಷಣಾ ಜಾಮೀನು ಕೋರಿ ವರ್ಮ ಸಲ್ಲಿಸಿದ್ದ ಅರ್ಜಿಯನ್ನು ಸ್ಥಳೀಯ ನ್ಯಾಯಾಲಯ ತಿರಸ್ಕರಿಸಿದ ಹಿನ್ನೆಲೆಯಲ್ಲಿ ಪೊಲೀಸ್ ಅಧೀಕ್ಷಕರು ಮಾಜಿ ಸಚಿವೆಯ ಬಂಧನಕ್ಕೆ ಆದೇಶ ಹೊರಡಿಸಿದ್ದರು. ಬಳಿಕ ನಿರೀಕ್ಷಣಾ ಜಾಮೀನು ಕೋರಿ ಹೈಕೋರ್ಟ್‌ಗೆ ಸಲ್ಲಿಸಿದ್ದ ಅರ್ಜಿಯೂ ತಿರಸ್ಕೃತಗೊಂಡಿದೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News