ಬಸ್ರೂರು ಮೂರುಕೈ ಅಂಡರ್‌ಪಾಸ್ ಕಾಮಗಾರಿ ತಡೆಗೆ ಆಗ್ರಹ

Update: 2018-10-09 15:49 GMT

ಕುಂದಾಪುರ, ಅ.9: ಕುಂದಾಪುರ ಶಾಸ್ತ್ರಿ ಸರ್ಕಲ್ ಬಳಿಯ ಮೇಲ್ಸೆತುವೆ ಕಾಮಗಾರಿ ಪೂರ್ಣಗೊಳ್ಳದೆ ಬಸ್ರೂರು ಮೂರುಕೈ ಬಳಿಯ ಹೆದ್ದಾರಿಯಲ್ಲಿ ಅಂಡರ್‌ಪಾಸ್ ನಿರ್ಮಾಣ ಕಾಮಗಾರಿ ಆರಂಭಿಸಿದರೆ ತೀವ್ರ ಹೋರಾಟ ಮಾಡಲಾಗುವುದು ಎಂದು ಕುಂದಾಪುರದ ನಾಗರಿಕ ಸಮಿತಿ ಎಚ್ಚರಿಕೆ ನೀಡಿದೆ.

ಬಸ್ರೂರು ಮೂರುಕೈಯಲ್ಲಿ ಅಂಡರ್‌ಪಾಸ್ ನಿರ್ಮಿಸಲು ತರಾತುರಿ ಯಿಂದ ನಿರ್ಧರಿಸಿ ಮುಖ್ಯ ರಸ್ತೆ ಬಂದ್ ಮಾಡಿರುವುದನ್ನು ವಿರೋಧಿಸಿ ಹಾಗೂ ಅಂಡರ್‌ಪಾಸ್ ಕಾಮಗಾರಿಗೆ ತಾತ್ಕಾಲಿಕವಾಗಿ ತಡೆ ನೀಡುವಂತೆ ಆಗ್ರಹಿಸಿ ಮಂಗಳವಾರ ಕುಂದಾಪುರದ ಆರ್.ಎನ್.ಶೆಟ್ಟಿ ಮಿನಿ ಹಾಲ್‌ನಲ್ಲಿ ನಡೆದ ಸಮಾಲೋಚನೆ ಸಭೆಯಲ್ಲಿ ಈ ಕುರಿತು ನಿರ್ಣಯ ಕೈಗೊಳ್ಳಲಾಯಿತು.

ಬಸ್ರೂರು ಮೂರುಕೈಯಲ್ಲಿ ರಾಷ್ಟ್ರೀಯ ಹೆದ್ದಾರಿ 66ರಲ್ಲಿ ಅಂಡರ್‌ಪಾಸ್ ಕಾಮಗಾರಿ ಆರಂಭಿಸಲು ಹೆದ್ದಾರಿ ಸಂಚಾರ ಸ್ಥಗಿತಗೊಳಿಸಿ, ಸರ್ವಿಸ್ ರಸ್ತೆ ಯಲ್ಲಿ ಸಂಚಾರಕ್ಕೆ ಅವಕಾಶ ಕಲ್ಪಿಸಿರುವುದರಿಂದ ಸುಗಮ ಸಂಚಾರಕ್ಕೆ ತೊಂದರೆ ಯಾಗಲಿದೆ. ಆದುದರಿಂದ ಶಾಸ್ತ್ರಿ ಸರ್ಕಲ್ ಬಳಿಯ ಮೇಲ್ಸೇತುವೆ ಕಾಮಗಾರಿ ಯನ್ನು ಮೊದಲು ಪೂರ್ಣಗೊಳಿಸಿ, ನಂತರ ಅಂಡರ್‌ಪಾಸ್ ಕಾಮಗಾರಿ ನಡೆಸಬೇಕು ಎಂದು ಸಮಿತಿ ಒತ್ತಾಯಿಸಿದೆ.

ಸಮಿತಿಯ ಅಧ್ಯಕ್ಷ ನರೇಂದ್ರ ಶೆಟ್ಟಿ ಬಸ್ರೂರು ಮಾತನಾಡಿ, ಹೆದ್ದಾರಿ ಸಂಚಾರ ಸ್ಥಗಿತಗೊಳಿಸಿ, ಸರ್ವಿಸ್ ರಸ್ತೆಯಲ್ಲಿ ಮಾತ್ರ ಸಂಚಾರಕ್ಕೆ ಅನುವು ಮಾಡಿಕೊಟ್ಟರೆ, ಕೋಟೇಶ್ವರ, ಬಸ್ರೂರು, ಕುಂದಾಪುರ ಕಡೆಯಿಂದ ವಾಹನಗಳ ದಟ್ಟಣೆ ಹೆಚ್ಚಾಗಿ ಗಂಟೆಗಟ್ಟಲೆ ಸಂಚಾರದಲ್ಲಿ ವ್ಯತ್ಯಯ ಉಂಟಾಗುವ ಸಾಧ್ಯತೆಗಳಿವೆ. ಈ ಸಂಬಂಧ ಕುಂದಾಪುರ ಉಪ ವಿಭಾಗದ ಸಹಾಯಕ ಆಯುಕ್ತರಿಗೆ ಮನವಿ ಸಲ್ಲಿಸಿ, ಅಂಡರ್‌ಪಾಸ್ ಕಾಮಗಾರಿಯನ್ನು ಸ್ಥಗಿತಗೊಳಿಸಲು ವುನವಿ ಮಾಡ ಲಾಗುವುದು ಎಂದರು.

ಅಂಡರ್‌ಪಾಸ್ ಕಾಮಗಾರಿ ಆರಂಭಿಸಲು ನಾವು ಅವಕಾಶ ನೀಡುವುದಿಲ್ಲ. ಇದರ ವಿರುದ್ಧ ನಾಗರಿಕ ಸಮಿತಿಯಿಂದ ಹೋರಾಟ ನಡೆಸಲಾಗುವುದು. ನಮ್ಮ ವಿರೋಧವನ್ನು ಲೆಕ್ಕಿಸಿದೆ ಕಾಮಗಾರಿ ನಡೆಸಿದರೆ ರಸ್ತೆಯಲ್ಲೇ ಧರಣಿ ಕುಳಿತು ಹೋರಾಟ ನಡೆಸಲಾಗುವುದು ಎಂದು ನಾಗರಿಕ ಸಮಿತಿಯ ಕಿಶೋರ್ ಕುಮಾರ್ ಎಚ್ಚರಿಕೆ ನೀಡಿದರು.

ಸಭೆಯಲ್ಲಿ ನಾಗರಿಕ ಸಮಿತಿಯ ಕೆಂಚನೂರು ಸೋಮಶೇಖರ ಶೆಟ್ಟಿ, ಪ್ರತಾಪ್ ಶೆಟ್ಟಿ, ರಾಜೇಶ್ ಕಾವೇರಿ, ಕೆಂಚನೂರು ಕಿಶನ್ ಕುಮಾರ್, ಆವರ್ಸೆ ಸುಧಾಕರ ಶೆಟ್ಟಿ ಮೊದಲಾದವರು ಉಪಸ್ಥಿತರಿದ್ದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News