ರಾಜ್ಯ ಮುಖ್ಯ ಚುನಾವಣಾ ಆಯುಕ್ತರಿಗೆ ಬಿಜೆಪಿ ಪತ್ರ

Update: 2018-10-09 15:56 GMT

ಬೆಂಗಳೂರು, ಅ.9: ಉಪ ಚುನಾವಣೆ ಘೋಷಣೆಯಾಗಿರುವ ಮೂರು ಲೋಕಸಭಾ ಮತ್ತು ಎರಡು ವಿಧಾನಸಭಾ ಕ್ಷೇತ್ರಗಳ ವ್ಯಾಪ್ತಿಯಲ್ಲಿ ಹಾಗೂ ಆಯಾ ಜಿಲ್ಲೆಗಳಲ್ಲಿ ಚುನಾವಣಾ ನೀತಿಸಂಹಿತೆಯನ್ನು ಕಟ್ಟುನಿಟ್ಟಾಗಿ ಜಾರಿಗೊಳಿಸಬೇಕು ಎಂದು ಕೋರಿ ರಾಜ್ಯ ಬಿಜೆಪಿ ಪ್ರಧಾನ ಕಾರ್ಯದರ್ಶಿ ಎನ್.ರವಿಕುಮಾರ್, ಮುಖ್ಯ ಚುನಾವಣಾ ಆಯುಕ್ತರಿಗೆ ಮನವಿ ಮಾಡಿದ್ದಾರೆ.

ಚುನಾವಣಾ ಆಯೋಗವು ನ್ಯಾಯಯುತ ಮತ್ತು ಮುಕ್ತ ಚುನಾವಣೆ ನಡೆಸುವ ನಂಬಿಕೆ ನಮಗಿದೆ. ಆದರೆ ಕಳೆದ ವಿಧಾನಸಭಾ ಚುನಾವಣೆಯ ಸಂದರ್ಭದಲ್ಲಿ ಆಡಳಿತ ಯಂತ್ರವು ಅಧಿಕಾರ ದುರುಪಯೋಗ ಮಾಡಿಕೊಂಡಿರುವ ಕಹಿ ಅನುಭವ ನಮ್ಮ ಗಮನದಲ್ಲಿದೆ ಎಂದು ಅವರು ತಿಳಿಸಿದ್ದಾರೆ. ಅಲ್ಲದೇ ಚುನಾವಣೆಯಲ್ಲಿ ಅಧಿಕಾರ ದುರುಪಯೋಗಪಡಿಸಿಕೊಂಡು ನಮ್ಮ ಎದುರಾಳಿಗಳಿಗೆ ಸಹಾಯ ಮಾಡಲಾಗಿತ್ತು ಎಂದು ರವಿಕುಮಾರ್ ಪತ್ರದಲ್ಲಿ ದೂರಿದ್ದಾರೆ.

ಈಗ ಕಾಂಗ್ರೆಸ್-ಜೆಡಿಎಸ್ ಮೈತ್ರಿ ಕೂಟದ ಸರಕಾರವು ತಮ್ಮ ಅಭ್ಯರ್ಥಿಗಳ ಸಲುವಾಗಿ ಆಡಳಿತ ಯಂತ್ರ ದುರುಪಯೋಗ ಪಡಿಸಿಕೊಳ್ಳುವ ಅನುಮಾನ ನಮಗಿದೆ. ಮೈತ್ರಿಕೂಟದ ಎರಡೂ ಪಕ್ಷಗಳು ತಮ್ಮ ಲಾಭಕ್ಕಾಗಿ ನೀತಿಸಂಹಿತೆ ಉಲ್ಲಂಘನೆ ಮತ್ತು ಅಧಿಕಾರ ದುರುಪಯೋಗದಲ್ಲಿ ನಿಷ್ಣಾತರಾಗಿವೆ. ಈ ಹಿನ್ನೆಲೆಯಲ್ಲಿ ಚುನಾವಣಾ ಆಯೋಗವು ಸಂಬಂಧಪಟ್ಟ ಜಿಲ್ಲಾಧಿಕಾರಿಗಳಿಗೆ ಸ್ಪಷ್ಟ ಸೂಚನೆ ನೀಡಿ ನೀತಿ ಸಂಹಿತೆಯನ್ನು ಕಟ್ಟುನಿಟ್ಟಾಗಿ ಅನುಷ್ಠಾನಕ್ಕೆ ತರಬೇಕು ಎಂದು ಮನವಿ ಮಾಡಿದ್ದಾರೆ.

ರಾಜ್ಯದಲ್ಲಿ ದಸರಾ ಹಬ್ಬದ ಸಂದರ್ಭವಿರುವುದರಿಂದ ಆಡಳಿತಾರೂಢ ಪಕ್ಷಗಳು ತಮ್ಮ ಲಾಭಕ್ಕಾಗಿ ನೀತಿಸಂಹಿತೆಯನ್ನು ಉಲ್ಲಂಘಿಸುವ ಸಾಧ್ಯತೆ ಇದ್ದೇ ಇದೆ. ವಿಶೇಷವಾಗಿ ರಾಜಕೀಯವಾಗಿ ಸೂಕ್ಷ್ಮವಾಗಿರುವ ಮಂಡ್ಯ ಜಿಲ್ಲೆಯಲ್ಲಿ ಈ ರೀತಿಯ ದುರುಪಯೋಗದ ಸಂಭವವಿದೆ. ದಸರಾ ಸಲುವಾಗಿ ನೀತಿ ಸಂಹಿತೆಯನ್ನು ಸಡಲಿಸುವಂತೆ ಮೈತ್ರಿಕೂಟದ ಪಕ್ಷಗಳು ಮನವಿ ಮಾಡುವ ಸಾಧ್ಯತೆಯೂ ಇದೆ ಎಂದು ಅವರು ತಿಳಿಸಿದ್ದಾರೆ.

ಅಧಿಕೃತ ಆಡಳಿತ ಯಂತ್ರವು ಇಂತಹ ಉತ್ಸವಗಳನ್ನು ಯಶಸ್ವಿಯಾಗಿ ನಡೆಸಿರುವ ನಿದರ್ಶನಗಳು ನಮ್ಮ ಮುಂದಿದೆ. ಅಂತಹ ಸಂದರ್ಭಗಳಲ್ಲಿ ಜನರೂ ಕೂಡ ಉತ್ಸವಗಳಲ್ಲಿ ಪಾಲ್ಗೊಂಡಿದ್ದಾರೆ. ಆದ್ದರಿಂದ ಯಾವುದೇ ಕಾರಣಕ್ಕೂ ದಸರಾ ನೆಪವೊಡ್ಡಿ ನೀತಿಸಂಹಿತೆಯಲ್ಲಿ ಯಾವುದೇ ರಿಯಾಯಿತಿ ತೋರಬಾರದು ಎಂದು ರವಿಕುಮಾರ್ ಆಗ್ರಹಿಸಿದ್ದಾರೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News