ಸಮನ್ವಯತೆಯಿಂದ ಅತಿವೃಷ್ಟಿ ಪರಿಸ್ಥಿತಿಯನ್ನು ಎದುರಿಸಲಾಗಿದೆ: ಕೊಡಗು ಜಿಲ್ಲಾಧಿಕಾರಿ ಶ್ರೀವಿದ್ಯಾ

Update: 2018-10-10 11:48 GMT

ಮಡಿಕೇರಿ, ಅ.10: ಎಲ್ಲಾ ಇಲಾಖೆಗಳ ಅಧಿಕಾರಿಗಳು ಸಮನ್ವಯತೆಯಿಂದ ಕಾರ್ಯನಿರ್ವಹಿಸಿದ ಪರಿಣಾಮ ಜಿಲ್ಲೆಯಲ್ಲಿ ಇತ್ತೀಚೆಗೆ ಸಂಭವಿಸಿದ ಪ್ರಾಕೃತಿಕ ವಿಕೋಪದ ಸಂಕಷ್ಟದ ಪರಿಸ್ಥಿತಿಯನ್ನು ಯಶಸ್ವಿಯಾಗಿ ನಿಭಾಯಿಸಲು ಸಾಧ್ಯವಾಯಿತೆಂದು ಜಿಲ್ಲಾಧಿಕಾರಿ ಶ್ರೀವಿದ್ಯಾ ಅಭಿಪ್ರಾಯಪಟ್ಟಿದ್ದಾರೆ.  

ವರ್ಗಾವಣೆಗೊಂಡಿರುವ ಜಿ.ಪಂ.ಸಿಇಒ ಪ್ರಶಾಂತ್ ಕುಮಾರ್ ಮಿಶ್ರ ಅವರಿಗೆ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್ ವತಿಯಿಂದ ನಗರದ ಕೋಟೆ ಹಳೇ ವಿಧಾನಸಭಾಂಗಣದಲ್ಲಿ ನಡೆದ ಬೀಳ್ಕೊಡುಗೆ ಸಮಾರಂಭದಲ್ಲಿ ಪಾಲ್ಗೊಂಡು ಜಿಲ್ಲಾಧಿಕಾರಿಗಳು ಮಾತನಾಡಿದರು. ಪ್ರಕೃತಿ ವಿಕೋಪದ ಸಂದರ್ಭದಲ್ಲಿ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಪೊಲೀಸ್ ಇಲಾಖೆ ಸೇರಿದಂತೆ ಎಲ್ಲಾ ಇಲಾಖೆಗಳ ಅಧಿಕಾರಿಗಳು ಸಮನ್ವಯತೆಯಿಂದ ಕಾರ್ಯ ನಿರ್ವಹಿಸಿದ್ದೇವೆ ಎಂದು ಎಂದು ಹೆಮ್ಮೆ ವ್ಯಕ್ತಪಡಿಸಿದರು. 

ವಿಧಾನಸಭಾ ಚುನಾವಣಾ ಸಂದರ್ಭದಲ್ಲಿ ಮತದಾರರ ಜಾಗೃತಿ ಕಾರ್ಯಕ್ರಮಗಳನ್ನು ವ್ಯವಸ್ಥಿತವಾಗಿ ನಡೆಸಿರುವ ಸಿಇಒ ಅವರ ಕಾರ್ಯವೈಖರಿ ಮೆಚ್ಚುಗೆಗೆ ಪಾತ್ರವಾಗಿದೆ ಎಂದು ಜಿಲ್ಲಾಧಿಕಾರಿ ತಿಳಿಸಿದರು. 

ನಿರ್ಗಮಿತ ಸಿಇಒ ಪ್ರಶಾಂತ್ ಕುಮಾರ್ ಮಿಶ್ರಾ ಮಾತನಾಡಿ, ಜಿಲ್ಲೆಯಲ್ಲಿ ಅಧಿಕಾರ ವಹಿಸಿಕೊಂಡ ಆರಂಭದಲ್ಲಿ ಎಡರು ತೊಡರುಗಳು ಉಂಟಾದವು. ಆದರೆ ಕಳೆದ ಒಂಭತ್ತು ತಿಂಗಳಲ್ಲಿ ಉತ್ತಮ ಆಡಳಿತಾತ್ಮಕ ಅನುಭವ ಪಡೆಯಲಾಯಿತು ಎಂದರು. ಆಡಳಿತ ವ್ಯವಸ್ಥೆಯಲ್ಲಿ ಕೆಲವು ಸಂದರ್ಭಗಳಲ್ಲಿ ಕಠಿಣ ಕ್ರಮಗಳನ್ನು ಕೈಗೊಂಡಾಗ ಮಾತ್ರ ಕೆಲಸಗಳು ಆಗಲು ಸಾಧ್ಯ ಎಂದು ಅಭಿಪ್ರಾಯಪಟ್ಟರು.

ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಸುಮನ್ ಡಿ.ಪನ್ನೇಕರ್ ಮಾತನಾಡಿ, ಪ್ರತಿಯೊಂದು ವಿಚಾರವನ್ನು ಸಮಗ್ರವಾಗಿ ತಿಳಿದುಕೊಂಡು ಕಾರ್ಯನಿರ್ವಹಿಸುವ ಪ್ರವೃತ್ತಿಯನ್ನು ಪ್ರಶಾಂತ್ ಕುಮಾರ್ ಹೊಂದಿದ್ದರು ಎಂದು ಮೆಚ್ಚುಗೆ ವ್ಯಕ್ತಪಡಿಸಿದರು. ವಿವಿಧ ಇಲಾಖೆಗಳ ಅಧಿಕಾರಿಗಳು ಪ್ರಶಾಂತ್ ಕುಮಾರ್ ಮಿಶ್ರ ಅವರ ಕಾರ್ಯವೈಖರಿಯ ಬಗ್ಗೆ ಗುಣಗಾನ ಮಾಡಿದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News