ಚಿಕ್ಕಮಗಳೂರು: ಕಾಂಗ್ರೆಸ್‍ ಪಾಲಾದ ಎಪಿಎಂಸಿ ಅಧ್ಯಕ್ಷ ಸ್ಥಾನ; ಉಪಾಧ್ಯಕ್ಷ ಸ್ಥಾನ ಬಿಜೆಪಿಗೆ

Update: 2018-10-10 11:54 GMT

ಚಿಕ್ಕಮಗಳೂರು, ಅ.10: ಇಲ್ಲಿನ ಕೃಷಿ ಉತ್ಪನ್ನ ಮಾರುಕಟ್ಟೆ ಅಧ್ಯಕ್ಷ ಸ್ಥಾನ ಕಾಂಗ್ರೆಸ್ ಪಾಲಾಗಿದ್ದರೆ, ಉಪಾಧ್ಯಕ್ಷ ಸ್ಥಾನ ಬಿಜೆಪಿ ಪಾಲಾಗಿದೆ. 

ಬುಧವಾರ ಕೃಷಿ ಉತ್ಪನ್ನ ಮಾರುಕಟ್ಟೆ ಸಭಾಂಗಣದಲ್ಲಿ ನಡೆದ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷ ಬೆಂಬಲಿತ ಎ.ಕೆ.ಪ್ರಕಾಶ್ ಅಧ್ಯಕ್ಷರಾಗಿಯೂ ಬಿಜೆಪಿ ಬೆಂಬಲಿತ ಲೋಕೇಶ್ ಉಪಾಧ್ಯಕ್ಷರಾಗಿ ಆಯ್ಕೆಗೊಂಡರು.

ನಗರದ ಕೃಷಿ ಉತ್ಪನ್ನ ಮಾರುಕಟ್ಟೆ ಸಮಿತಿ ಆವರಣದಲ್ಲಿ ಬುಧವಾರ ಬೆಳಗ್ಗೆ 11ರಿಂದ 12ರವರೆಗೆ ನಾಮಪತ್ರ ಸಲ್ಲಿಕೆಗೆ ಕಾಲಾವಕಾಶ ನೀಡಲಾಗಿತ್ತು. ಅಧ್ಯಕ್ಷ ಸ್ಥಾನಕ್ಕೆ ಬಿಜೆಪಿ ಪಕ್ಷದಿಂದ ಕೆರೆದಡ್ಲು ಮಹೇಂದ್ರ, ರಾಜೀವ್ ನಾಮಪತ್ರ ಸಲ್ಲಿಸಿದ್ದರೆ, ಕಾಂಗ್ರೆಸ್ ಪಕ್ಷದಿಂದ ಎ.ಕೆ.ಪ್ರಕಾಶ್ ನಾಮಪತ್ರ ಸಲ್ಲಿಸಿದ್ದರು. ಉಪಾಧ್ಯಕ್ಷ ಸ್ಥಾನಕ್ಕೆ ಬಿಜೆಪಿಯಿಂದ ಲೋಕೇಶ್, ಕಾಂಗ್ರೆಸ್ ಪಕ್ಷದಿಂದ ಜಯಮ್ಮ ನಾಮಪತ್ರ ಸಲ್ಲಿಸಿದರು. 

ನಂತರ ನಡೆದ ಚುನಾವಣೆ ಪ್ರಕ್ರಿಯೆಯಲ್ಲಿ ಬಿಜೆಪಿ ಹಾಗೂ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಗಳು ಸಮಬಲ ಮತ ಪಡೆದುಕೊಂಡರು. ಬಿಜೆಪಿ ಕಾಂಗ್ರೆಸ್ ಹಾಗೂ ಜೆಡಿಎಸ್ ಪಕ್ಷಗಳ ಆಂತರಿಕ ಒಪ್ಪಂದದಂತೆ 8 ತಿಂಗಳ ಅವಧಿಗೆ ಕಾಂಗ್ರೆಸ್ ಬೆಂಬಲಿತ ಅಭ್ಯರ್ಥಿ ಎ.ಕೆ.ಪ್ರಕಾಶ್ ಅಧ್ಯಕ್ಷ ಸ್ಥಾನ ಮತ್ತು ಬಿಜೆಪಿ ಬೆಂಬಲಿತ ಅಭ್ಯರ್ಥಿ ಲೋಕೇಶ್ ಉಪಾಧ್ಯಕ್ಷರನ್ನಾಗಿ ಆಯ್ಕೆ ಮಾಡಲಾಯಿತು. ಚುನಾವಣಾಧಿಕಾರಿಯಾಗಿ ತಹಶೀಲ್ದಾರ್ ನಾಗಭೂಷಣ್ ಕಾರ್ಯನಿರ್ವಹಿಸಿದರು.

ನಂತರ ನಡೆದ ಅಭಿನಂದನ ಸಮಾರಂಭದಲ್ಲಿ ಟಿಎಪಿಸಿಎಂಎಸ್ ಅಧ್ಯಕ್ಷ ಟಿ. ಮಂಜುನಾಥ್ ಮಾತನಾಡಿ, ಬಿಜೆಪಿ, ಕಾಂಗ್ರೆಸ್, ಜೆಡಿಎಸ್ ಪಕ್ಷಗಳು ಆಂತರಿಕ ಒಪ್ಪಂದ ಮಾಡಿಕೊಂಡು ಅಧ್ಯಕ್ಷ ಮತ್ತು ಉಪಾಧ್ಯಕ್ಷ ಸ್ಥಾನಕ್ಕೆ ಆಯ್ಕೆ ಮಾಡಲಾಗಿದೆ. ಅಧಿಕಾರ, ರಾಜಕಾರಣ ಬರುತ್ತದೆ, ಹೋಗುತ್ತದೆ. ಸಿಕ್ಕ ಅಧಿಕಾರ ಅವಧಿಯಲ್ಲಿ ರೈತರ ಮತ್ತು ಕೃಷಿ ಉತ್ಪನ್ನ ಮಾರುಕಟ್ಟೆ ಸಮಿತಿ ಅಭಿವೃದ್ಧಿಗೆ ಶ್ರಮಿಸುವಂತೆ ಸಲಹೆ ನೀಡಿದರು.

ಜಿಲ್ಲಾ ಪಂಚಾಯತ್ ಸದಸ್ಯ ಸೋಮಶೇಖರ್ ಮಾತನಾಡಿ, ಮೂರು ಪಕ್ಷಗಳ ಸಹಮತದಿಂದ ಆಯ್ಕೆ ಮಾಡಲಾಗಿದೆ. ಸದಸ್ಯರ ಸಹಕಾರ ಪಡೆದು ಕೃಷಿ ಉತ್ಪನ್ನ ಮಾರುಕಟ್ಟೆ ಅಭಿವೃದ್ಧಿಗೆ ಶ್ರಮಿಸಿ ರೈತರ ಹಿತ ಕಪಾಡುವಂತೆ ತಿಳಿಸಿದರು.

ಕೃಷಿ ಉತ್ಪನ್ನ ಮಾರುಕಟ್ಟೆ ಸಮಿತಿ ನಿರ್ದೇಶಕ ಬಿ.ಎಚ್. ಹರೀಶ್ ಮಾತನಾಡಿ, ಅಧ್ಯಕ್ಷರು, ಉಪಾಧ್ಯಕ್ಷರು ರೈತರ ಪರ ಕೆಲಸ ಮಾಡಬೇಕು. ಅಲ್ಲದೇ ಮೂರು ಪಕ್ಷಗಳ ಆಂತರಿಕ ಒಪ್ಪಂದದಂತೆ ನಡೆದುಕೊಳ್ಳಬೇಕು ಎಂದರು.

ಈ ಸಂದರ್ಭದಲ್ಲಿ ಕೆಪಿಸಿಸಿ ಕಾರ್ಯದರ್ಶಿ ಎಂ.ಎಲ್. ಮೂರ್ತಿ, ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಮಂಜೇಗೌಡ, ನಗರಸಭೆ ಸದಸ್ಯ ಹಿರೇಮಗಳೂರು ಪುಟ್ಟಸ್ವಾಮಿ, ಕಾಂಗ್ರೆಸ್ ಮಹಿಳಾ ಘಟಕದ ರಾಜ್ಯಉಪಾಧ್ಯಕ್ಷ ರೇಖಾಹುಲಿಯಪ್ಪಗೌಡ, ಕೆ.ವಿ. ಶಿವಕುಮಾರ್ ಸೇರಿದಂತೆ ಬಿಜೆಪಿ, ಕಾಂಗ್ರೆಸ್, ಜೆಡಿಎಸ್ ಪಕ್ಷದ ಮುಖಂಡರು ಉಪಸ್ಥಿತರಿದ್ದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News