ಚಾಮರಾಜನಗರ: ಕೆರೆಯಲ್ಲಿ ಈಜಲು ತೆರಳಿದ್ದ ಇಬ್ಬರು ಬಾಲಕರು ಮೃತ್ಯು

Update: 2018-10-11 12:22 GMT

ಚಾಮರಾಜನಗರ,ಅ.11: ಶಾಲೆಗೆ ಹೋಗುವುದಾಗಿ ಮನೆಯಲ್ಲಿ ಹೇಳಿ, ಕೆರೆಯಲ್ಲಿ ಈಜಲು ಹೋಗಿದ್ದ ಇಬ್ಬರು ವಿದ್ಯಾರ್ಥಿಗಳು ನೀರಿನಲ್ಲಿ ಮುಳುಗಿ ಮೃತಪಟ್ಟ ಘಟನೆ ಜಿಲ್ಲೆಯ ಗುಂಡ್ಲುಪೇಟೆ ತಾಲೂಕಿನ ಬೆಳಚಲವಾಡಿ ಗ್ರಾಮದಲ್ಲಿ ನಡೆದಿದೆ.

ಬೆಳಚಲವಾಡಿ ಗ್ರಾಮದ ಶಿವಣ್ಣ ಎಂಬವರ ಮಗ ಬೇಗೂರು ಸರ್ಕಾರಿ ಪ್ರೌಢಶಾಲೆಯ 9ನೇ ತರಗತಿ ವಿದ್ಯಾರ್ಥಿ ಚಂದನ್(14) ಹಾಗೂ ಮಹೇಶ್ ಎಂಬವರ ಮಗ ಎಸೆಸೆಲ್ಸಿ ವಿದ್ಯಾರ್ಥಿ ಪ್ರವೀಣ್(15) ಎಂಬವರು ಬುಧವಾರ ಮಧ್ಯಾಹ್ನ ಶಾಲೆಯಲ್ಲಿ ಡ್ಯಾನ್ಸ್ ತರಬೇತಿ ಇದೆ ಎಂದು ಹೇಳಿ ಮನೆಯಿಂದ ಹೊರಟಿದ್ದು, ನಂತರ ನಾಪತ್ತೆಯಾಗಿದ್ದರು.

ಇಂದು ಬೆಳಗ್ಗೆ ಗ್ರಾಮದ ಕೆರೆಯ ಬಳಿ ಎರಡು ಸೈಕಲುಗಳು ಹಾಗೂ ಬಟ್ಟೆಬರೆಗಳನ್ನು ಕಂಡ ಗ್ರಾಮಸ್ಥರು ಬೇಗೂರು ಪೊಲೀಸರಿಗೆ ವಿಷಯ ಮುಟ್ಟಿಸಿದ್ದು, ಬಳಿಕ ಈಜುಗಾರರ ನೆರವಿನಿಂದ ಅಗ್ನಿಶಾಮಕ ದಳದ ಸಿಬ್ಬಂದಿಗಳು ಕೆರೆಯಲ್ಲಿ ತೀವ್ರ ಹುಡುಕಾಟ ನಡೆಸಿದಾಗ ಇಬ್ಬರ ಮೃತದೇಹ ಪತ್ತೆಯಾಗಿದೆ.

ಮರಣೋತ್ತರ ಪರೀಕ್ಷೆ ನಡೆಸಿ ಕುಟುಂಬಸ್ಥರಿಗೆ ಮೃತದೇಹಗಳನ್ನು ಹಸ್ತಾಂತರಿಸಲಾಯಿತು. ಬೇಗೂರು ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಸ್ಥಳಕ್ಕೆ ತಹಶೀಲ್ದಾರ್ ಸಿ.ಭಾರತಿ, ಸರ್ಕಲ್ ಇನ್ಸ್ ಪೆಕ್ಟರ್ ಎಚ್.ಎನ್.ಬಾಲಕೃಷ್ಣ, ಬೇಗೂರು ಠಾಣೆಯ ಪಿಎಸ್‍ಐ ಲೋಹಿತ್‍ಕುಮಾರ್, ಅಗ್ನಿಶಾಮಕ ದಳದ ಅಧಿಕಾರಿ ಚೆಲುವರಾಜು ಭೇಟಿ ನೀಡಿದರು. ಜಿಲ್ಲಾ ಉಸ್ತುವಾರಿ ಸಚಿವ ಸಿ.ಪುಟ್ಟರಂಗಶೆಟ್ಟಿ ಶವಾಗಾರಕ್ಕೆ ಭೇಟಿ ನೀಡಿ ಪಾಲಕರಿಗೆ ಸಾಂತ್ವನ ಹೇಳಿದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News