ಪಂಪುವೆಲ್ ಮೇಲ್ಸೇತುವೆ ಕಾಮಗಾರಿ ಪೂರ್ಣಗೊಳಿಸಲು ಮನವಿ

Update: 2018-10-12 14:06 GMT

ಮಂಗಳೂರು, ಅ.12: ಪಂಪುವೆಲ್, ತೊಕ್ಕೊಟ್ಟು ಮೇಲ್ಸೇತುವೆ ಕಾಮಗಾರಿಯನ್ನು ಪೂರ್ಣಗೊಳಿಸಲು ಮತ್ತು ನಂತೂರು ಮೇಲ್ಸೇತುವೆ ನಿರ್ಮಿಸಲು ಹಾಗೂ ಹೆದ್ದಾರಿ ಅವ್ಯವಸ್ಥೆಯನ್ನು ಸರಿಪಡಿಸಲು ಒತ್ತಾಯಿಸಿ ಪಂಪುವೆಲ್ ಮೇಲ್ಸೇತುವೆ ಹೋರಾಟ ಸಮಿತಿಯ ನೇತೃತ್ವದಲ್ಲಿ ಶುಕ್ರವಾರ ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರಕ್ಕೆ ಮನವಿ ಸಲ್ಲಿಸಲಾಯಿತು.

ಮಂಗಳೂರು ಸುತ್ತಮುತ್ತಲಿನ ಹೆದ್ದಾರಿಯು ಸಂಪೂರ್ಣವಾಗಿ ಹದಗೆಟ್ಟಿದೆ. ಅದರಲ್ಲೂ ಪಂಪುವೆಲ್, ತೊಕ್ಕೊಟ್ಟಿನ ಮೇಲ್ಸೇತುವೆ ಕಾಮಗಾರಿಯು ಕಳೆದ 8 ವರುಷಗಳಿಂದ ಪೂರ್ಣಗೊಂಡಿಲ್ಲ, ಹೆದ್ದಾರಿಯುದ್ದಕ್ಕೂ ಸರ್ವಿಸ್ ರಸ್ತೆಗಳಿಲ್ಲ, ಮಾರಣಾಂತಿಕ ಗುಂಡಿಗಳಿಂದ ಹೆದ್ದಾರಿಯಲ್ಲಿ ಪದೇ ಪದೇ ಅಪಘಾತಗಳು ಸಂಭವಿಸುತ್ತಿದೆ. ಅರ್ಧಕ್ಕೆ ನಿಂತಿರುವ ಮೇಲ್ಸೇತುವೆ ಹಾಗೂ ರಸ್ತೆ ಅವ್ಯವಸ್ಥೆಯಿಂದಾಗಿ ದಿನನಿತ್ಯ ಟ್ರಾಫಿಕ್ ಜಾಮ್ ಉಂಟಾಗುತ್ತಿದೆ. ಇದರಿಂದಾಗಿ ವಿದ್ಯಾರ್ಥಿಗಳು ಸಮಯಕ್ಕೆ ಸರಿಯಾಗಿ ಶಾಲಾ ಕಾಲೇಜು ತಲುಪಲಾಗುತ್ತಿಲ್ಲ, ಜನರೂ ಕೂಡಾ ಸಮಯಕ್ಕೆ ಸರಿಯಾಗಿ ಉದ್ಯೋಗದ ಸ್ಥಳಗಳಿಗೆ ತೆರಳಲಾಗುತ್ತಿಲ್ಲ. ಇಷ್ಟೆಲ್ಲಾ ಸಮಸ್ಯೆಗಳಿಗೆ ಮೂಲಕಾರಣ ರಸ್ತೆ ನಿರ್ಮಾಣ ಹಾಗೂ ನಿರ್ವಹಣೆಯ ಗುತ್ತಿಗೆ ಪಡೆದಿರುವ ‘ನವಯುಗ ಕಂಪೆನಿ’ಯ ಬೇಜವಾಬ್ದಾರಿ ನಡವಳಿಕೆ, ಜೊತೆಗೆ ಸರ್ವಿಸ್ ರಸ್ತೆಗಳಿಲ್ಲದೆ ವಾಹನಗಳು, ಪ್ರಯಾಣಿಕರು ಪರದಾಡುವಂತಾಗಿದೆ. ಇಂತಹ ಸಮಸ್ಯೆಯಿಂದಾಗಿ ಈಗಾಗಲೇ ಅನೇಕ ಮಂದಿ ಜೀವಹಾನಿಗಳು ಸಂಭವಿಸಿದೆ. ಇಲ್ಲಿನ ಸಮಸ್ಯೆಗಳಿಗೆ ಪ್ರತಿಯಾಗಿ ಈಗಾಗಲೇ ಜನತೆ ಅಲ್ಲಲ್ಲಿ ಬೀದಿಗಿಳಿದು ಹೋರಾಟಗಳನ್ನು ನಡೆಸುತ್ತಿದ್ದಾರೆ. ಈ ಹಿನ್ನಲೆಯಲ್ಲಿ ಪಂಪ್‌ವೆಲ್, ತೊಕ್ಕೊಟ್ಟು ಮೇಲ್ಸೇತುವೆ ಕಾಮಗಾರಿಯನ್ನು ಪೂರ್ಣಗೊಳಿಸಬೇಕು, ನಂತೂರಿನಲ್ಲಿ ಮೇಲ್ಸೇತುವೆ ನಿರ್ಮಿಸಬೇಕು ಹಾಗೂ ಸರ್ವಿಸ್ ರಸ್ತೆ ನಿರ್ಮಾಣ ಸಹಿತ ಹೆದ್ದಾರಿ ಅವ್ಯವಸ್ಥೆಯನ್ನು ಸರಿಪಡಿಸಬೇಕೆಂಬ ಬೇಡಿಕೆಗಳನ್ನಿಟ್ಟು ಮನವಿಯನ್ನು ಅರ್ಪಿಸಲಾಗಿದೆ.

ಬಳಿಕ ಹೋರಾಟ ಸಮಿತಿಯ ನಿಯೋಗವು ಜಿಲ್ಲಾಧಿಕಾರಿ, ಸಂಸದ ನಳಿನ್‌ಕುಮಾರ್ ಕಟೀಲ್, ಜಿಲ್ಲಾ ಉಸ್ತುವಾರಿ ಸಚಿವ ಯು.ಟಿ. ಖಾದರ್‌ರವರಿಗೆ ಮನವಿ ಸಲ್ಲಿಸಿತು.

ನಿಯೋಗದಲ್ಲಿ ಪಂಪ್‌ವೆಲ್ ಮೇಲ್ಸೇತುವೆ ಹೋರಾಟ ಸಮಿತಿಯ ಸಂಚಾಲಕ ಸುನೀಲ್ ಕುಮಾರ್ ಬಜಾಲ್, ಇತರ ಪದಾಧಿಕಾರಿಗಳಾದ ಸಂತೋಷ್ ಕುಮಾರ್ ಬಜಾಲ್, ಡೋಲ್ಫಿ ಡಿಸೋಜ, ಜೆರಾಲ್ಡ್ ಟವರ್, ರಾಮಚಂದ್ರ ಪೂಜಾರಿ, ಸುಜಾತಾ ಸುವರ್ಣ, ಸ್ಟೀವನ್ ವಾಸ್ ಉಪಸ್ಥಿತರಿದ್ದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News