ಮೈಸೂರು ದಸರಾ ಉತ್ಸವ: ಕೆಎಸ್ಸಾರ್ಟಿಸಿಯಿಂದ 2500 ವಿಶೇಷ ಬಸ್ಸುಗಳ ವ್ಯವಸ್ಥೆ

Update: 2018-10-12 14:29 GMT
ಸಾಂದರ್ಭಿಕ ಚಿತ್ರ

ಬೆಂಗಳೂರು, ಅ.12: ಮೈಸೂರು ದಸರಾ ಮಹೋತ್ಸವದ ಪ್ರಯುಕ್ತ ರಾಜ್ಯದ ಹಾಗೂ ದೇಶದ ವಿವಿಧ ಕಡೆಗಳಿಂದ ದಸರಾ ಉತ್ಸವ ವೀಕ್ಷಣೆಗೆ ಮೈಸೂರಿಗೆ ಬರುವ ಪ್ರವಾಸಿಗರ ಅನುಕೂಲಕ್ಕಾಗಿ ಕೆಎಸ್ಸಾರ್ಟಿಸಿಯಿಂದ 2500ಕ್ಕೂ ಹೆಚ್ಚು ವಿಶೇಷ ಸಾರಿಗೆ ವ್ಯವಸ್ಥೆ ಕಲ್ಪಿಸಲಾಗಿದೆ.

ಈಗ ಕಾರ್ಯಾಚರಣೆ ಮಾಡಲಾಗುತ್ತಿರುವ ವೇಗದೂತ, ಕರ್ನಾಟಕ ವೈಭವ, ರಾಜಹಂಸ, ಐರಾವತ ಹಾಗೂ ಐರಾವತ ಕ್ಲಬ್ ಕ್ಲಾಸ್ (ಮಲ್ಟಿ ಆಕ್ಸಲ್) ಸಾರಿಗೆ ಸೇವೆಗಳ ಜೊತೆಗೆ ಅ.17ರಿಂದ 22ರ ವರೆಗೆ ಬೆಂಗಳೂರಿನಿಂದ ರಾಜ್ಯದ ಮತ್ತು ಅಂತಾರಾಜ್ಯದ ವಿವಿಧ ಸ್ಥಳಗಳಿಗೆ 2500ಕ್ಕೂ ಹೆಚ್ಚು ವಾಹನಗಳ ವಿಶೇಷ ಸಾರಿಗೆ ವ್ಯವಸ್ಥೆ ಮಾಡಲಾಗಿದೆ.

ಸದರಿ ವಾಹನಗಳನ್ನು ಕೆಂಪೇಗೌಡ ಬಸ್ ನಿಲ್ದಾಣ, ಮೈಸೂರು ರಸ್ತೆ ಬಸ್ ನಿಲ್ದಾಣ ಮತ್ತು ಶಾಂತಿನಗರದ ಬಿಎಂಟಿಸಿ ಬಸ್ ನಿಲ್ದಾಣದಿಂದ ಕಾರ್ಯಾಚರಣೆ ನಡೆಸಲಿವೆ. ರಾಜ್ಯದ ಧರ್ಮಸ್ಥಳ, ಕುಕ್ಕೆಸುಬ್ರಹ್ಮಣ್ಯ, ಶೃಂಗೇರಿ, ಹೊರನಾಡು, ಶಿವಮೊಗ್ಗ, ಮಡಿಕೇರಿ, ಮಂಗಳೂರು, ದಾವಣಗೆರೆ, ಗೋಕರ್ಣ, ಕೊಲ್ಲೂರು, ಹುಬ್ಬಳ್ಳಿ, ಧಾರವಾಡ, ಬೆಳಗಾವಿ, ವಿಜಯಪುರ, ಕಾರವಾರ, ಬಳ್ಳಾರಿ, ಹೊಸಪೇಟೆ, ಕಲಬುರ್ಗಿ, ರಾಯಚೂರು ಮುಂತಾದ ಸ್ಥಳಗಳಿಗೆ ಹಾಗೂ ನೆರೆರಾಜ್ಯಗಳಲ್ಲಿನ ಹೈದರಾಬಾದ್, ಚೆನ್ನೈ, ಊಟಿ, ಕೊಡೈಕೆನಾಲ್, ಸೇಲಂ, ತಿರುಚಿನಾಪಳ್ಳಿ, ಪುದುಕೋಟೆ, ಮಧುರೈ, ಪಣಜಿ, ಶಿರಡಿ, ಪೂನಾ, ಏರ್ನಾಕುಲಂ, ಪಾಲ್ಗಾಟ್ ಹಾಗೂ ಇತರೆ ಸ್ಥಳಗಳಿಗೆ ಕೆಎಸ್ಸಾರ್ಟಿಸಿ ವತಿಯಿಂದ ವಿಶೇಷ ಬಸ್ ಕಾರ್ಯಾಚರಣೆ ನಡೆಸಲಿವೆ.

ಬೆಂಗಳೂರಿನ ಮೈಸೂರು ರಸ್ತೆ ಬಸ್ ನಿಲ್ದಾಣದಿಂದ ಮೈಸೂರಿಗೆ ಪ್ರತ್ಯೇಕವಾಗಿ 150 ಹೆಚ್ಚುವರಿ ವಾಹನಗಳ ಕಾರ್ಯಾಚರಣೆ ಹಾಗೂ ಮೈಸೂರಿನ ಸುತ್ತಮುತ್ತಲಿನ ಪ್ರೇಕ್ಷಣೀಯ, ಧಾರ್ಮಿಕ ಹಾಗೂ ಪ್ರವಾಸಿ ತಾಣಗಳಾದ ಚಾಮುಂಡಿ ಬೆಟ್ಟ, ಕೆಆರ್‌ಎಸ್ ಅಣೆಕಟ್ಟು/ಬೃಂದಾವನ, ಶ್ರೀರಂಗಪಟ್ಟಣ, ನಂಜನಗೂಡು ಸೇರಿದಂತೆ ಮಡಿಕೇರಿ, ಮಂಡ್ಯ, ಮಳವಳ್ಳಿ, ಎಚ್.ಡಿ.ಕೋಟೆ, ಚಾಮರಾಜನಗರ, ಹುಣಸೂರು, ಕೆ.ಆರ್.ನಗರ, ಗುಂಡ್ಲುಪೇಟೆ ಇತ್ಯಾದಿ ಸ್ಥಳಗಳಿಗೆ ಸಾರಿಗೆ ಸಂಪರ್ಕ ಕಲ್ಪಿಸಲು 150 ವಾಹನಗಳು ಸೇರಿ ಒಟ್ಟು 300 ವಿಶೇಷ ವಾಹನಗಳನ್ನು ಕಾರ್ಯಾಚರಿಸಲಿವೆ

ಬೆಂಗಳೂರಿನ ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಿಂದ ಮೈಸೂರಿಗೆ ಫ್ಲೈ ಬಸ್ ಮೂಲಕ ನೇರ ಸಾರಿಗೆ ಸೌಲಭ್ಯ ಕಲ್ಪಿಸಲಾಗಿರುತ್ತದೆ. ಮೊಬೈಲ್ ಮೂಲಕ ಎಂ-ಬುಕಿಂಗ್‌ನ್ನು ಹಾಗೂ ಇ-ಟಿಕೇಟ್ ಬುಕಿಂಗ್‌ನ್ನು www.ksrtc.in ವೆಬ್ ಸೈಟ್ ಮುಖಾಂತರ ಮಾಡಬಹುದಾಗಿದೆ.

ಮೈಸೂರು ಗ್ರಾಮಾಂತರ ಹಾಗೂ ನಗರ ಬಸ್ ನಿಲ್ದಾಣಗಳಲ್ಲಿ ಸಾರ್ವಜನಿಕ ಪ್ರಯಾಣಿಕರಿಗೆ ಹಾಗೂ ಪ್ರವಾಸಿಗರಿಗೆ ಕರಾರಸಾ ನಿಗಮದ ಸಾರಿಗೆ ಸೌಲಭ್ಯಗಳ ಬಗ್ಗೆ ಮಾಹಿತಿ ನೀಡಲು ಮಾಹಿತಿ ಕೇಂದ್ರ ವನ್ನು ಪ್ರತ್ಯೇಕವಾಗಿ ತೆರೆಯಲಾಗುವುದು.

ಸಾರ್ವಜನಿಕ ಪ್ರಯಾಣಿಕರು ಕರ್ನಾಟಕ ಹಾಗೂ ನೆರೆರಾಜ್ಯಗಳಾದ ಆಂಧ್ರಪ್ರದೇಶ, ತೆಲಂಗಾಣ, ಕೇರಳ, ಗೋವಾ, ತುಮಿಳುನಾಡು, ಮಹಾರಾಷ್ಟ್ರ ಹಾಗೂ ಪುದುಚೇರಿ ರಾಜ್ಯಗಳಲ್ಲಿರುವ ಒಟ್ಟು 707 ಗಣಕೀಕೃತ ಮುಂಗಡ ಆಸನಗಳನ್ನು ಕಾಯ್ದಿರಿಸುವ ಕೌಂಟರ್‌ಗಳ ಮೂಲಕ ನಿಗಮದ ಸಾರಿಗೆಗಳಿಗೆ ಮುಂಗಡವಾಗಿ ಆಸನಗಳನ್ನು ಕಾಯ್ದಿರಿಸಲಾಗಿದೆ ಎಂದು ಪ್ರಕಟನೆಯಲ್ಲಿ ತಿಳಿಸಲಾಗಿದೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News