ಬಳ್ಳಾರಿ ಲೋಕಸಭೆ ಉಪಚುನಾವಣೆಗೆ ಕಾಂಗ್ರೆಸ್ ಅಭ್ಯರ್ಥಿ ಆಯ್ಕೆ: ನಾಯಕರಲ್ಲಿ ಒಗ್ಗಟ್ಟು ಮೂಡಿಸಿದ ಸಿದ್ದರಾಮಯ್ಯ

Update: 2018-10-12 15:11 GMT

ಬೆಂಗಳೂರು, ಅ.12: ಬಳ್ಳಾರಿ ಲೋಕಸಭಾ ಕ್ಷೇತ್ರದ ಉಪ ಚುನಾವಣೆಗೆ ಕಾಂಗ್ರೆಸ್ ಅಭ್ಯರ್ಥಿಯನ್ನು ಆಯ್ಕೆ ಮಾಡುವ ವಿಚಾರಕ್ಕೆ ಸಂಬಂಧಿಸಿದಂತೆ ಜಿಲ್ಲೆಯ ಕಾಂಗ್ರೆಸ್ ಶಾಸಕರು ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಡಿ.ಕೆ.ಶಿವಕುಮಾರ್ ನಡುವಿನ ಹೊಂದಾಣಿಕೆ ಕೊರತೆಯನ್ನು ನೀಗಿಸುವಲ್ಲಿ ಶಾಸಕಾಂಗ ಪಕ್ಷದ ನಾಯಕ ಸಿದ್ದರಾಮಯ್ಯ ಯಶಸ್ವಿಯಾಗಿದ್ದಾರೆ.

ಬಳ್ಳಾರಿ ಲೋಕಸಭಾ ಕ್ಷೇತ್ರಕ್ಕೆ ಅಭ್ಯರ್ಥಿಯನ್ನು ಆಯ್ಕೆ ಮಾಡಲು ಕಳೆದ ಎರಡು ಮೂರು ದಿನಗಳಿಂದ ಕೆಪಿಸಿಸಿ ಕಚೇರಿಯಲ್ಲಿ ಸರಣಿ ಸಭೆಗಳು ನಡೆಯುತ್ತಿದ್ದರೂ ಒಮ್ಮತದ ತೀರ್ಮಾನ ಕೈಗೊಳ್ಳಲು ಸಾಧ್ಯವಾಗಿರಲಿಲ್ಲ. ಈ ಹಿನ್ನೆಲೆಯಲ್ಲಿ ಇಂದು ರಂಗಪ್ರವೇಶ ಮಾಡಿದ ಸಿದ್ದರಾಮಯ್ಯ, ಮುಖಂಡರ ಸಭೆಯಲ್ಲಿ ಪಾಲ್ಗೊಂಡು ಅಭ್ಯರ್ಥಿ ಆಯ್ಕೆ ಸಂಬಂಧ ಚರ್ಚೆಯಲ್ಲಿ ಪಾಲ್ಗೊಂಡರು.

ಶಾಸಕ ನಾಗೇಂದ್ರ ಅವರ ಸಹೋದರ ವೆಂಕಟೇಶ್ ಪ್ರಸಾದ್ ಅವರನ್ನು ಅಭ್ಯರ್ಥಿಯನ್ನಾಗಿ ಮಾಡಲು ಶಾಸಕರಾದ ತುಕಾರಾಮ್, ಪಿ.ಟಿ.ಪರಮೇಶ್ವರ್ ನಾಯ್ಕ್, ಆನಂದ್‌ಸಿಂಗ್, ಅನಿಲ್ ಲಾಡ್ ವಿರೋಧ ವ್ಯಕ್ತಪಡಿಸಿದ್ದಾರೆ. ಅಲ್ಲದೆ, ಕೆಪಿಸಿಸಿಯಲ್ಲಿ ನಡೆದ ಸಭೆಯಲ್ಲೂ ಪಾಲ್ಗೊಂಡಿರಲಿಲ್ಲ. ಇದರಿಂದಾಗಿ, ಅಭ್ಯರ್ಥಿ ಆಯ್ಕೆ ಕಗ್ಗಂಟಾಗಿತ್ತು.

ಇಂದು ಸಿದ್ದರಾಮಯ್ಯ ನೇತೃತ್ವದಲ್ಲಿ ಕೆಪಿಸಿಸಿ ಕಚೇರಿಯಲ್ಲಿ ನಡೆದ ಸಭೆಯಲ್ಲಿ ಜಿಲ್ಲೆಯ ಎಲ್ಲ ಕಾಂಗ್ರೆಸ್ ಶಾಸಕರು ಹಾಗೂ ಪಕ್ಷದ ಪ್ರಮುಖ ನಾಯಕರು ಪಾಲ್ಗೊಂಡು ತಮ್ಮ ಅಭಿಪ್ರಾಯಗಳನ್ನು ವ್ಯಕ್ತಪಡಿಸಿದ್ದಾರೆ. ಮಾಜಿ ಶಾಸಕ ಅನಿಲ್‌ಲಾಡ್ ಹೊರತುಪಡಿಸಿ ಎಲ್ಲರೂ ಸಭೆಯಲ್ಲಿ ಭಾಗವಹಿಸಿದ್ದರು.

ಸಭೆಯಲ್ಲಿ ಕೆಪಿಸಿಸಿ ಅಧ್ಯಕ್ಷ ದಿನೇಶ್‌ ಗುಂಡೂರಾವ್, ಜಲಸಂಪನ್ಮೂಲ ಹಾಗೂ ಬಳ್ಳಾರಿ ಜಿಲ್ಲಾ ಉಸ್ತುವಾರಿ ಸಚಿವ ಡಿ.ಕೆ.ಶಿವಕುಮಾರ್ ಸೇರಿದಂತೆ ಇನ್ನಿತರರು ಪಾಲ್ಗೊಂಡಿದ್ದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News